ನವದೆಹಲಿ, ನ.5- ಹಳೇ ದೆಹಲಿಯ ಚಾವ್ರಿ ಬಜಾರ್ ಪ್ರದೇಶದಲ್ಲಿ ಮೂರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡವೊಂದು ಇಂದು ಬೆಳಿಗ್ಗೆ ಕುಸಿದುಬಿದ್ದಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹಲವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಚಾವ್ರಿ ಬಜಾರ್ ಮೆಟ್ರೊ ನಿಲ್ದಾಣದ ಸಮೀಪದ ಗಲಿ ಸಿತಾರಾದಲ್ಲಿ ಬೆಳಿಗ್ಗೆ ಸುಮಾರು 9.50ಕ್ಕೆ ಈ ಘಟನೆ ನಡೆದಿದೆ.ಕಟ್ಟಡ ಏಕಾಏಕಿ ಕುಸಿದುಬಿದ್ದ ಪರಿಣಾಮ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಕನಿಷ್ಠ ಆರು ಘಟಕಗಳು ಸ್ಥಳಕ್ಕೆ ಧಾವಿಸಿವೆ. ನೀರು ಸಾಗಿಸುವ ವಾಹನಗಳು ಹಾಗೂ ರಕ್ಷಣಾ ವಾಹನಗಳನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿದ್ದು, ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದೆ.
ಅವಶೇಷಗಳಡಿ ಸಿಲುಕಿರುವವರನ್ನು ಪತ್ತೆಹಚ್ಚಿ ರಕ್ಷಿಸಲು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಟ್ಟಡ ಕುಸಿತಕ್ಕೆ ನಿಖರ ಕಾರಣವೇನು ಹಾಗೂ ನಿರ್ಮಾಣ ಕಾರ್ಯದಲ್ಲಿ ಸುರಕ್ಷತಾ ಲೋಪಗಳು ನಡೆದಿವೆಯೇ ಎಂಬ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಪಶ್ಚಿಮ ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಸೆಪ್ಟೆಂಬರ್ 6ರಂದು ಐದು ಅಂತಸ್ತಿನ ವಸತಿ ಕಟ್ಟಡ ಕುಸಿದು ಕನಿಷ್ಠ ಏಳು ಮಂದಿ ಮೃತಪಟ್ಟಿದ್ದರು. ಈ ಘಟನೆ ನಡೆದು ಸುಮಾರು ಎರಡು ತಿಂಗಳಾಗುವ ಮುನ್ನವೇ ಮತ್ತೊಂದು ಕಟ್ಟಡ ದುರಂತ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ.
