ನವದೆಹಲಿ,ಏ.30- ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ದುರಂತ ಸಂಭವಿಸಿದ್ದು, ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಕೇಂದ್ರ ಸರ್ಕಾರ ಪರಿಹಾರ ಘೋಷಿಸಿದೆ. ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರ ನೀಡುವುದಾಗಿ ತಿಳಿಸಿದೆ.
ದುರ್ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿ ಅವರು, ಕರ್ನಾಟಕದ ಬೆಂಗಳೂರಿನಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ಅನಾಹುತವು ಅತ್ಯಂತ ದುರದೃಷ್ಟಕರ. ದುಃಖತಪ್ತ, ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುವೆ ಎಂದು ಪ್ರಧಾನ ಮಂತ್ರಿಯ ಅಧಿಕೃತ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.
ನಿನ್ನೆ ಸುಮಾರು 5 ಗಂಟೆಯ ಸುಮಾರಿಗೆ ನಗರದಲ್ಲಿ ದಿಢೀರ್ ಗುಡುಗು ಸಹಿತ ಭಾರಿ ಮಳೆ ಮತ್ತು ಆಲಿಕಲ್ಲು ಮಳೆ ಆರಂಭವಾಯಿತು. ಮಳೆಯಿಂದ ತಪ್ಪಿಸಿಕೊಳ್ಳಲು ಪಾದಚಾರಿಗಳು ಮತ್ತು ಬೀದಿ ಬದಿಯ ವ್ಯಾಪಾರಿಗಳು ಬೌರಿಂಗ್ ಆಸ್ಪತ್ರೆಯ ಹಳೆಯ ಕಾಂಪೌಂಡ್ ಗೋಡೆಯ ಕೆಳಗೆ ಆಶ್ರಯ ಪಡೆದಿದ್ದರು.
ಮಳೆಯ ತೀವ್ರತೆಗೆ ದುರ್ಬಲವಾಗಿದ್ದ ಗೋಡೆಯು ಏಕಾಏಕಿ ಕುಸಿದುಬಿದ್ದಿತ್ತು, ಪರಿಣಾಮ ಗೋಡೆಯ ಕೆಳಗಿದ್ದವರು ಅವಶೇಷಗಳಡಿ ಸಿಲುಕಿಕೊಂಡರು. ಸ್ಥಳೀಯರು ಮತ್ತು ತುರ್ತು ಸೇವಾ ಸಿಬ್ಬಂದಿ ತಕ್ಷಣವೇ ರಕ್ಷಣಾ ಕಾರ್ಯ ನಡೆಸಿದರೂ, ಏಳು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ತನಿಖೆ ನಡೆಸುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
