ತಾರಾಪಿತ್ (ಪಶ್ಚಿಮ ಬಂಗಾಳ), ಆ.1- ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ ತಾರಾಪಿತ್‌ನಲ್ಲಿರುವ ಹೋಟೆಲ್‌ವೊಂದರಲ್ಲಿ ಮುಂಜಾನೆ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ದೇವಾಲಯ ಪಟ್ಟಣವಾದ ತಾರಾಪಿತ್‌ನಲ್ಲಿರುವ ನಾಲ್ಕು ಅಂತಸ್ತಿನ ಹೋಟೆಲ್‌ನ ನೆಲ ಮಹಡಿಯಲ್ಲಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಹೆಚ್ಚಿನ ಅತಿಥಿಗಳು ನಿದ್ರಿಸುತ್ತಿದ್ದರು ಎಂದು ತಿಳಿದುಬಂದಿದೆ.
ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಗಾಯಾಳುಗಳನ್ನು ರಾಂಪುರಹಾಟ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಯ ಮೂಲಗಳು ಆರಂಭದಲ್ಲಿ ಐವರು ಬೆಂಕಿಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದವು. ಬಳಿಕ ಪೊಲೀಸರು ಸಾವಿನ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ ಎಂದು ದೃಢಪಡಿಸಿದ್ದಾರೆ.
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಸಂಭವಿಸಿರಬಹುದು ಎಂದು ಹೋಟೆಲ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
