ನವದೆಹಲಿ,ಜು.24- ದೇಶಾದ್ಯಂತ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಂಟಕ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಈ ಸಂಬಂಧ ಗುರುವಾರ ತಡರಾತ್ರಿ 11.52ರ ಸುಮಾರಿಗೆ ವೀಡಿಯೊ ಸಂದೇಶ ಬಿಡುಗಡೆ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕಠಿಣ ಕಾನೂನು ಮತ್ತು ಶೀಘ್ರ ವಿಚಾರಣೆಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು ಸ್ಥಾಪಿಸುವ ಹೊಸ ಮಸೂದೆಯನ್ನು ಮಂಡಿಸಲು ಸಿದ್ಧತೆ ನಡೆಸಿರುವುದಾಗಿ ಪ್ರಕಟಿಸಿದ್ದಾರೆ.
ರಾತ್ರಿ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ, ಈ ಹೊಸ ನಿಯಮಗಳು ಹಾಗೂ ಕಠಿಣ ಶಿಕ್ಷೆಯ ಕುರಿತು ಶುಕ್ರವಾರ ನಡೆಯಲಿರುವ ಕೇಂದ್ರ ಸಚಿವರ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಎಂಬುದು ಸಣ್ಣ ವಿಷಯವಲ್ಲ. ಇದು ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗೆ ಅಪಾರ ನೋವುಂಟುಮಾಡಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ವ್ಯರ್ಥವಾಗದಂತೆ ತಡೆಯುವುದೇ ನಮ ಮೊದಲ ಆದ್ಯತೆಯಾಗಿದೆ ಎಂದು ಪ್ರಧಾನಿ ಹೇಳಿದರು.
ಪರೀಕ್ಷಾ ಅಕ್ರಮಗಳಲ್ಲಿ ತೊಡಗುವ ಅಪರಾಧಿಗಳಿಗೆ ತಕ್ಷಣವೇ ಮತ್ತು ಕಠಿಣ ಶಿಕ್ಷೆ ವಿಧಿಸಲು ವಿಶೇಷ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಇಲಾಖೆಗಳು ಕರಡು ಪ್ರಸ್ತಾವನೆಯನ್ನು ಸಿದ್ಧಪಡಿಸಿದ್ದು, ಸಂಪುಟ ಸಭೆಯ ಚರ್ಚೆಯ ನಂತರ ಶೀಘ್ರದಲ್ಲೇ ಸಂಸತ್ತಿನಲ್ಲಿ ಹೊಸ ಮಸೂದೆಯನ್ನು ಮಂಡಿಸಲಾಗುವುದು. ಇತ್ತೀಚೆಗೆ ನಡೆದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಇತರ ಸ್ಪರ್ಧಾತಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು ಕೇಳಿಬಂದು ದೇಶಾದ್ಯಂತ ವ್ಯಾಪಕ ಪ್ರತಿಭಟನೆ ನಡೆಯಿತು.
ಕೇಂದ್ರ ಸರ್ಕಾರದ ಕಠಿಣ ನಿಯಮಗಳು :
ಕೇಂದ್ರ ಸರ್ಕಾರವು ಪರೀಕ್ಷಾ ಅಕ್ರಮಗಳನ್ನು ತಡೆಯಲು ಈಗಾಗಲೇ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆ, 2024 (The Public Examinations Prevention of Unfair Means) Act, 2024) ಅನ್ನು ಜಾರಿಗೆ ತಂದಿದೆ.
ಈ ಕಾಯ್ದೆಯಡಿ ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗುವ ಸಂಘಟಿತ ದಂಧೆಕೋರರಿಗೆ 5 ರಿಂದ 10 ವರ್ಷಗಳ ಜೈಲು ಶಿಕ್ಷೆ ಹಾಗೂ ಕನಿಷ್ಠ 1 ಕೋಟಿ ರೂ. ದಂಡ ವಿಧಿಸಲು ಅವಕಾಶವಿದೆ. ಸಾಮಾನ್ಯ ಅಕ್ರಮ ಎಸಗುವ ವ್ಯಕ್ತಿಗಳಿಗೆ ಕನಿಷ್ಠ 3 ರಿಂದ 5 ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಪ್ರಸ್ತುತ ಸರ್ಕಾರದ ಈ ನಡೆ, ಪರೀಕ್ಷಾ ವ್ಯವಸ್ಥೆಯ ಮೇಲೆ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಮತ್ತೆ ನಂಬಿಕೆ ಮೂಡಿಸುವ ಪ್ರಮುಖ ಪ್ರಯತ್ನವೆಂದು ವಿಶ್ಲೇಷಿಸಲಾಗಿದೆ.
