ಬೆಂಗಳೂರು, ಅ.25-ಆಡಳಿತ ಮತ್ತು ಪ್ರತಿಪಕ್ಷಗಳ ಪ್ರತಿಷ್ಠೆಯ ಕಣವಾಗಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಕಾವು ಏರತೊಡಗಿದ್ದು, ಮೂರು ಪಕ್ಷಗಳ ಅಭ್ಯರ್ಥಿಗಳು ಶಕ್ತಿ ಪ್ರದರ್ಶನದ ಮೂಲಕ ತಮ ಉಮೇದುವಾರಿಕೆಯನ್ನು ಇಂದು ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾದ ಇಂದು ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ನ ಅಭ್ಯರ್ಥಿಗಳು ತಮ ತಮ ಪಕ್ಷದ ನಾಯಕರು ಮುಖಂಡರೊಂದಿಗೆ ರೋಡ್ ಶೋ ನಡೆಸಿದ ಬಳಿಕ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.
ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ, ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು, ಶಿಗ್ಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹಮದ್ ಪಠಾಣ್ ಹಾಗೂ ಬಿಜೆಪಿ ಅಭ್ಯರ್ಥಿ ಭರತ್ ಬೊಮಾಯಿ ಅವರು ಸೇರಿದಂತೆ ಹಲವು ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಜೆಪಿನಗರ ಲಕ್ಷ್ಮೀ ವೆಂಕಟೇಶ್ವರ ದೇವಾಲಯದಲ್ಲಿ ಕುಟುಂಬ ಸಮೇತ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕೆಂಗಲ್ ಆಂಜನೇಯಸ್ವಾಮಿ ದೇವಾಲಯದಲ್ಲೂ ವಿಶೇಷ ಪೂಜೆ ಸಲ್ಲಿಸಿದರು.
ನಂತರ ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಂಸದ ಸಿ.ಎನ್.ಮಂಜುನಾಥ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಮಾಜಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮೊದಲಾದ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಪಾಲ್ಗೊಂಡಿದ್ದರು. ನಂತರ ಚನ್ನಪಟ್ಟಣ ತಹಸೀಲ್ದಾರ್ ಕಚೇರಿಗೆ ತೆರಳಿ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ತಮ ಉಮೇದುವಾರಿಕೆ ಸಲ್ಲಿಸಿದರು.
ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಯಾಸೀರ್ ಅಹಮದ್ ಪಠಾಣ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಶಿಗ್ಗಾವಿಯಲ್ಲಿ ತಮ ಪಕ್ಷದ ನಾಯಕರು ಮುಖಂಡರೊಂದಿಗೆ ರೋಡ್ ಶೋ ನಡೆಸಿದರು.
ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮಾಯಿ ನಿನ್ನೆ ಸಾಂಕೇತಿಕವಾಗಿ ಉಮೇದುವಾರಿಕೆ ಸಲ್ಲಿಸಿದ್ದರು. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತಿತರ ನಾಯಕರ ಜತೆಗೂಡಿ ರೋಡ್ ಶೋ ನಡೆಸಿದ ಬಳಿಕ ಇಂದು ನಾಮಪತ್ರ ಸಲ್ಲಿಸಿದರು.
ಸಂಡೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವರಾದ ಜನಾರ್ದನರೆಡ್ಡಿ, ಬಿ.ಶ್ರೀರಾಮುಲು, ಎಂ.ಪಿ.ರೇಣುಕಾಚಾರ್ಯ, ಕರುಣಾಕರರೆಡ್ಡಿ, ಮಾಜಿ ಶಾಸಕ ಸೋಮಶೇಖರರೆಡ್ಡಿ ಸೇರಿದಂತೆ ಪಕ್ಷದ ಹಲವು ಮುಖಂಡರು ರೋಡ್ ಶೋ ನಡೆಸಿದರು. ಬಳಿಕ ಬಂಗಾರು ಹನುಮಂತು ತಮ ಉಮೇದುವಾರಿಕೆ ಸಲ್ಲಿಸಿದರು.