ಬೆಂಗಳೂರು,ಸೆ.29– ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಹಾಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ರಾಜ್ಯ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದೆ ಎಂದು ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ.
ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ ಸೇರಿದಂತೆ ಮಳೆ ಪೀಡಿತ ಪ್ರದೇಶಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದ ಎರಡು ತಂಡ ಮಳೆ ಪೀಡಿತ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿಯ ಪರಿಶೀಲನೆ ನಡೆಸಿ ಸರ್ಕಾರದ ವೈಫಲ್ಯವನ್ನು ತೀವ್ರವಾಗಿ ಖಂಡಿಸಿದರು.
ಒಂದು ಕಡೆ ಮುಂಗಾರು ಅವಧಿ ಪೂರ್ಣಗೊಳ್ಳುತ್ತಿದ್ದು, ಇನ್ನೊಂದೆಡೆ ಅತಿವೃಷ್ಟಿ, ಮತ್ತೊಂದೆಡೆ ಮಹಾರಾಷ್ಟ್ರದಿಂದ ಹರಿದು ಬರುತ್ತಿರುವ ನೀರಿನಿಂದ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಆದರೂ ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಬಿಜೆಪಿ ಆರೋಪಿಸಿದೆ.
ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಅನೇಕ ಕಡೆ ಸಾವುನೋವು ಉಂಟಾಗಿದೆ. ಕೆಲವು ಕಡೆ ಮನೆಗಳು ಕುಸಿದು ಬಿದ್ದಿದ್ದು ನೂರಾರು ಜನ ನಿರಾಶ್ರಿತರಾಗಿದ್ದಾರೆ. ಶಾಲೆಗಳು, ಅಂಗನವಾಡಿ ಕೇಂದ್ರಗಳು ಸಹ ಕುಸಿದು ಬಿದ್ದಿವೆ.
ಕನಿಷ್ಟಪಕ್ಷ ಸೌಜನ್ಯಕ್ಕಾದರೂ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸಂಸದರು ಸಂತ್ರಸ್ತರನ್ನು ಭೇಟಿ ಮಾಡಿ ಕಷ್ಟಸುಖ ವಿಚಾರಿಸಿಲ್ಲ. ಸರ್ಕಾರ ಗಾಢ ನಿದ್ರೆಯಲ್ಲಿದ್ದು, ಎಚ್ಚೆತ್ತುಕೊಳ್ಳುವ ಕೆಲಸವನ್ನು ಪ್ರತಿಪಕ್ಷ ಮಾಡುತ್ತದೆ ಎಂದು ಬಿಜೆಪಿ ಹೇಳಿದೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಸರ್ಕಾರ ಮಳೆ ಪೀಡಿತ ಪ್ರದೇಶಗಳನ್ನು ನಿರ್ಲಕ್ಷ್ಯ ಮಾಡಿದೆ. ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ಜಿಲ್ಲಾಧಿಕಾರಿಗಳ ಖಜಾನೆಯಲ್ಲಿರುವ ಹಣವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ಕೊಡಬೇಕು. ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುವುದು ಸರಿಯಲ್ಲ. ಎಲ್ಲದಕ್ಕೂ ಕೇಂದ್ರದ ಕಡೆ ಬೆರಳು ತೋರಿದರೆ ಸರ್ಕಾರ ದಿವಾಳಿಯಾಗಿದೆಯೇ ಎಂದು ಪ್ರಶ್ನೆ ಮಾಡಿದರು.
ಪ್ರವಾಸ ತಂಡಗಳು
ತಂಡ-1: ಬಿ.ವೈ.ವಿಜಯೇಂದ್ರ, ಮೇಲನೆ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಸಂಸದ ಗೋವಿಂದ ಕಾರಜೋಳ, ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ, ಮಾಜಿ ಸಚಿವ ಬಿ.ಶ್ರೀರಾಮುಲು, ಮಾಜಿ ಸಂಸದ ಉಮೇಶ್ ಜಾಧವ್, ಮೇಲನೆ ಸದಸ್ಯೆ ಭಾರತಿ ಶೆಟ್ಟಿ, ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ ಅವರು ಒಂದು ತಂಡವಾಗಿ ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಸಂಯೋಜಕರಾಗಿ ಕಾರ್ಯನಿರ್ವಹಿಸಲಿದ್ದಾರೆ.
ತಂಡ-2: ಆರ್.ಅಶೋಕ್, ಜಗದೀಶ್ ಶೆಟ್ಟರ್, ಶಾಸಕರಾದ ಅರವಿಂದ ಬೆಲ್ಲದ್, ಸಿ.ಟಿ.ರವಿ, ಶಶಿಕಲಾ ಜೊಲ್ಲೆ, ಸಿದ್ದು ಸವದಿ, ಅಭಯ್ ಪಾಟೀಲ್, ಸಂಸದರಾದ ರಮೇಶ್ ಜಿಗಜಿಣಗಿ, ರಮೇಶ್ ಗದ್ದಿಗೌಡರ್ ಅವರ ತಂಡವು ಬೆಳಗಾವಿ, ಬಾಗಲಕೋಟೆ, ಚಿಕ್ಕೋಡಿ, ವಿಜಯಪುರ ಭಾಗದಲ್ಲಿ ಪ್ರವಾಸ ಕೈಗೊಳ್ಳಲಿದೆ. ಮೇಲನೆ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್ ಸಂಯೋಜಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.