ಬೆಂಗಳೂರು,ಸೆ.25- ಕಳೆದ ಎರಡು ವಾರಗಳಲ್ಲಿ ಬಿಡುವು ಕೊಟ್ಟಿದ್ದ ಮಳೆ ನಿನ್ನೆಯಿಂದ ಮತ್ತೆ ಪ್ರಾರಂಭವಾಗಿದ್ದು, ಇನ್ನು ಮೂರು ದಿನಗಳ ಕಾಲ ಮುಂದುವರೆಯುವ ಸಾಧ್ಯತೆಗಳಿವೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಮಳೆಯಾಗುವ ಸಾಧ್ಯತೆಗಳಿವೆ.
ಇದನ್ನೂ ಓದಿ : ಮತ್ತೆ ಕಿಮ್ ಕಿತಾಪತಿ, ಕ್ಷಿಪಣಿ ಉಡಾಯಿಸಿ ಉತ್ತರ ಕೊರಿಯಾ ಕಿರಿಕ್
ಕಳೆದ ಎರಡು ವಾರಗಳಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಬಿಡುವು ಕೊಟ್ಟಿದ್ದು, ಆದರೆ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಮುಂದುವರೆದಿದ್ದು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲೂ ಮಳೆ ಮುಂದುವರೆದಿದೆ.
ಸೆ.29, 30ರಿಂದ ಇನ್ನೊಂದು ಸುತ್ತಿನ ಮಳೆಯಾಗಲಿದ್ದು, ಆ ಸಂದರ್ಭದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಇದನ್ನೂ ಓದಿ : ನಾಳೆ ವಿಶ್ವವಿಖ್ಯಾತ ಮೈಸೂರು ದಸರಾಗೆ ರಾಷ್ಟ್ರಪತಿ ಮುರ್ಮು ಅಧಿಕೃತ ಚಾಲನೆ
ಮುಂಗಾರು ಮಳೆ ಅಕ್ಟೋಬರ್ 2ನೇ ವಾರದ ನಂತರ ಮರಳುವಿಕೆ ಪ್ರಕ್ರಿಯೆ ಶುರುವಾಗಲಿದ್ದು, ಆ ಸಂದರ್ಭದಲ್ಲೂ ರಾಜ್ಯದಲ್ಲಿ ಹೆಚ್ಚಿನ ಮಳೆಯನ್ನು ನಿರೀಕ್ಷಿಸಬಹುದಾಗಿದೆ.
ಮುಂಗಾರು ಮರಳಿದ ನಂತರ ಈಶಾನ್ಯ ಹಿಂಗಾರು ಪ್ರಾರಂಭದ ಪ್ರಕ್ರಿಯೆಗಳು ಶುರುವಾಗಲಿದೆ ಎಂದು ಹವಾಮಾನ ತಜ್ಞರು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ : ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು