ಬೆಂಗಳೂರು,ಆ.14-ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿರುವ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ನೀಡಲು ಸಿದ್ಧತೆ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನಿಂದ ಮೈಸೂರಿನವರೆಗೆ ಬಿಜೆಪಿ-ಜೆಡಿಎಸ್ ಜಂಟಿಯಾಗಿ ನಡೆಸಿದ ಪಾದಯಾತ್ರೆಯ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ ಮುಂಚೂಣಿಯಲ್ಲಿದ್ದರು. ಪಾದಯಾತ್ರೆ ಸಂದರ್ಭದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರ ಜತೆಗೆ ನಿಖಿಲ್ ಕುಮಾರಸ್ವಾಮಿ ಅವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು.
ರಾಜ್ಯಾಧ್ಯಕ್ಷ ಸ್ಥಾನ ನೀಡುವ ಉದ್ದೇಶದಿಂದಲೇ ನಿಖಿಲ್ ಕುಮಾರಸ್ವಾಮಿ ಅವರಿಗೆ ಪಕ್ಷದ ಕಾರ್ಯಕ್ರಮಗಳಲ್ಲಿ ಇತರ ನಾಯಕರು ಮತ್ತು ಮುಖಂಡರಿಗಿಂತ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಈಗಾಗಲೇ ಪಕ್ಷದ ಜವಾಬ್ದಾರಿಯನ್ನು ನಿಖಿಲ್ ಕುಮಾರಸ್ವಾಮಿ ನಿಭಾಯಿಸತೊಡಗಿದ್ದಾರೆ. ಹೀಗಾಗಿ ಮುಂದಿನ ರಾಜ್ಯಾಧ್ಯಕ್ಷರಾಗುವುದರಲ್ಲಿ ಅನುಮಾನವಿಲ್ಲ. ಮತ್ತೆ ರಾಜ್ಯಾಧ್ಯಕ್ಷ ಸ್ಥಾನ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬಕ್ಕೆ ದೊರೆತಂತಾಗುತ್ತದೆ.
ಸದ್ಯಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹೆಚ್.ಡಿ.ಕುಮಾರಸ್ವಾಮಿ ಅವರೇ ಮುಂದುವರೆದಿದ್ದಾರೆ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಕಳೆದ ಮೂರು ತಿಂಗಳಿನಿಂದಲೂ ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಡುವ ಉದ್ದೇಶದಿಂದ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಯನ್ನು ಲಿಂಗಾಯತ ಇಲ್ಲವೆ ಕುರುಬ ಸಮುದಾಯಕ್ಕೆ ನೀಡಿದರೆ ಪಕ್ಷ ಸಂಘಟನೆಗೆ ಹೆಚ್ಚು ಅನುಕೂಲವಾಗಲಿದೆ ಎಂಬ ಅಭಿಪ್ರಾಯವೂ ಇದೆ.
ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರು ಪಕ್ಷ ತೊರೆದ ನಂತರ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಹೆಚ್.ಕೆ.ಕುಮಾರಸ್ವಾಮಿ ಅವರಿಗೆ ನೀಡಲಾಗಿತ್ತು. ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಅವರು ಪಕ್ಷಕ್ಕೆ ಮರಳಿದ ನಂತರ ಕುಮಾರಸ್ವಾಮಿ ಅವರ ಬದಲಿಗೆ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿತ್ತು.
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಎನ್‌ಡಿಎ ಮೈತ್ರಿಕೂಟ ಸೇರುವುದನ್ನು ವಿರೋಧಿಸಿದ ಇಬ್ರಾಹಿಂ ಅವರನ್ನು ಪಕ್ಷದಿಂದಲೇ ಹೊರ ಹಾಕಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಯಿತು.ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕುರುಬ, ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತ ಹಾಗೂ ಒಕ್ಕಲಿಗ ಸಮುದಾಯಕ್ಕೆ ದೊರೆತಿದೆ.
ಲಿಂಗಾಯತ ಸಮುದಾಯಕ್ಕೆ ಅವಕಾಶ ಸಿಕ್ಕಿಲ್ಲ. ಹೀಗಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟನೆ ಬಲಗೊಳ್ಳಲು ಆ ಭಾಗ ಲಿಂಗಾಯತರಿಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಮಾಡಿಕೊಡುವುದು ಸೂಕ್ತ ಎಂಬ ಅಭಿಪ್ರಾಯ ಪಕ್ಷದ ಆಂತರಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಮುಂಬರುವ ನಗರ ಸ್ಥಳೀಯ ಸಂಸ್ಥೆಗಳ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿಗಳ ಹಾಗೂ ಬಿಬಿಎಂಪಿ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಇದು ಸಹಕಾರಿಯಾಗಲಿದೆ. ಈಗಾಗಲೇ ಅಲ್ಪಸಂಖ್ಯಾತ ಸಮುದಾಯದವರು ಪಕ್ಷದಿಂದ ದೂರ ಸರಿದಿದ್ದಾರೆ. ಬಿಜೆಪಿ ಮೈತ್ರಿ ಒಂದನ್ನೇ ನಂಬಿಕೊಂಡರೆ ಅನುಕೂಲ ಆಗುವುದಿಲ್ಲ. ಸಂಘಟನೆ ದೃಷ್ಟಿಯಿಂದ ಪಕ್ಷದಲ್ಲಿ ಎಲ್ಲಾ ಸಮುದಾಯಗಳಿಗೂ ಸಮಾನ ಅವಕಾಶ ಕಲ್ಪಿಸುವ ಅಗತ್ಯವಿದೆ ಎಂಬ ಅಭಿಪ್ರಾಯವಿದೆ.
ನಿರೀಕ್ಷೆಯಂತೆ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಸಾರಥ್ಯ ನೀಡಲಾಗುತ್ತದೆಯೇ ಅಥವಾ ಕೊನೆಯ ಕ್ಷಣದಲ್ಲಿ ಬದಲಾವಣೆ ಮಾಡಿ ಬೇರೆಯವರಿಗೆ ಜವಾಬ್ದಾರಿ ವಹಿಸಲಾಗುವುದೋ ಎಂಬುದನ್ನು ಕಾದು ನೋಡಬೇಕಿದೆ.