Sunday, June 30, 2024
Homeಇದೀಗ ಬಂದ ಸುದ್ದಿಚನ್ನಪಟ್ಟಣ ಉಪಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸಲ್ಲ : ಡಿಕೆಶಿ ಸ್ಪಷ್ಟನೆ

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸಲ್ಲ : ಡಿಕೆಶಿ ಸ್ಪಷ್ಟನೆ

ಬೆಂಗಳೂರು, ಜೂ.28- ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯ ಬಗ್ಗೆ ಕುತೂಹಲ ಇರುವ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ .ಕೆ.ಶಿವಕುಮಾರ್‌ ಅವರು ತಮ್ಮ ಕುಟುಂಬದಿಂದ ಬೇರೆ ಯಾರೂ ಚುನಾವಣಾ ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳುವ ಮೂಲಕ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ನಡೆಸಿದ್ದಾರೆ.

ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಡಿ.ಕೆ.ಶಿವಕುಮಾರ್‌, ನಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಆಗಾಗ್ಗೆ ಈ ಕುರಿತು ಗೊಂದಲಗಳು ಸೃಷ್ಟಿಯಾಗುತ್ತಿವೆ. ಅಂತಹ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.

ಚನ್ನಪಟ್ಟಣ ಚುನಾವಣೆಯಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್‌ ಅಭ್ಯರ್ಥಿಯಾಗಲಿದ್ದಾರೆ ಎಂಬ ವದಂತಿಗಳು ಆರಂಭದಲ್ಲಿದ್ದವು. ಆದರೆ ಡಿ.ಕೆ.ಸುರೇಶ್‌ ಅದನ್ನು ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಜನ ತಮಗೆ ವಿಶ್ರಾಂತಿ ಪಡೆಯಲು ಸೂಚಿಸಿದ್ದು, ಅದರಂತೆ ತಾವು ಚುನಾವಣಾ ರಾಜಕೀಯದಿಂದ ದೂರ ಉಳಿದು ವಿಶ್ರಾಂತಿ ಪಡೆಯುವುದಾಗಿ ಸ್ಪಷ್ಟಪಡಿಸಿದ್ದಾರೆ.

ಅದರ ಜೊತೆಯಲ್ಲೇ ಚನ್ನಪಟ್ಟಣ ಕ್ಷೇತ್ರಕ್ಕೆ ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಿ, ಅಚ್ಚರಿ ಮೂಡಿಸಿದ್ದರು. ಇದಕ್ಕೆ ನಾನಾ ರೀತಿಯ ವ್ಯಾಖ್ಯಾನಗಳು ಕೇಳಿಬಂದಿದ್ದವು.ಡಿ.ಕೆ.ಶಿವಕುಮಾರ್‌ರವರ ಪುತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ ಅದೆಲ್ಲವುದಕ್ಕೂ ಡಿ.ಕೆ.ಶಿವಕುಮಾರ್‌ ತೆರೆ ಎಳೆದಿದ್ದಾರೆ. ತಮ ಕುಟುಂಬದಿಂದ ಬೇರೆ ಯಾರೂ ಚುನಾವಣಾ ರಾಜಕೀಯಕ್ಕೆ ಬರುವುದಿಲ್ಲ ಎಂದು ಖಡಾಖಂಡಿತವಾಗಿ ಸ್ಪಷ್ಟಪಡಿಸಿದ್ದಾರೆ. ಇದರ ಬಳಿಕ ಚನ್ನಪಟ್ಟಣಕ್ಕೆ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಕಾಡಲಾರಂಭಿಸಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್‌ ಅವರು ಸೋಲು ಕಂಡ ಬಳಿಕ ಡಿ.ಕೆ.ಶಿವಕುಮಾರ್‌ ಅವರಿಗೆ ತವರು ಜಿಲ್ಲೆಯಲ್ಲೇ ಹಿನ್ನಡೆಯಾಗಿತ್ತು. ಇದನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿರುವ ಡಿ.ಕೆ. ಸಹೋದರರು ಚನ್ನಪಟ್ಟಣದಲ್ಲಿ ಗೆದ್ದೇ ಗೆಲ್ಲಬೇಕು ಎಂಬ ಹಠಕ್ಕೆ ಬಿದ್ದು ತಂತ್ರಗಾರಿಕೆ ರೂಪಿಸುತ್ತಿದ್ದಾರೆ.

ಡಿ.ಕೆ.ಶಿವಕುಮಾರ್‌ ಈಗಾಗಲೇ ಎರಡು ಬಾರಿ ಕ್ಷೇತ್ರದಲ್ಲಿ ಜನಸ್ಪಂದನ ನಡೆಸಿದ್ದಾರೆ. ಪದೇಪದೇ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಚನ್ನಪಟ್ಟಣದಲ್ಲಿ ಗೆದ್ದು ಮತ್ತೆ ತಮ ಅಧಿಪತ್ಯವನ್ನು ಉಳಿಸಿಕೊಳ್ಳಬೇಕು ಎಂಬ ಹೋರಾಟಕ್ಕೆ ಮುಂದಾಗಿದ್ದಾರೆ.ಅಚ್ಚರಿ ಹಾಗೂ ಕುತೂಹಲದ ಅಭ್ಯರ್ಥಿ ಯಾರು ಎಂಬ ಪ್ರಶ್ನೆಯ ನಡುವೆ, ಯಾರೇ ಕಣಕ್ಕಿಳಿದರೂ ಅವರನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಡಿ.ಕೆ.ಸುರೇಶ್‌ ಪದೇಪದೇ ಹೇಳುತ್ತಿದ್ದಾರೆ.ಡಿ.ಕೆ.ಶಿವಕುಮಾರ್‌ ತಮ ಕುಟುಂಬದ ಸದಸ್ಯರು ಸ್ಪರ್ಧಿಸುವುದಿಲ್ಲ ಎಂದು ಹೇಳಿದ ಬಳಿಕ ಹೊರಗಿನ ಅಭ್ಯರ್ಥಿಯ ಹುಡುಕಾಟವು ತೀವ್ರವಾಗಿ ನಡೆದಿದೆ.

RELATED ARTICLES

Latest News