Saturday, September 14, 2024
Homeರಾಜ್ಯಸದ್ಯಕ್ಕೆ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಪ್ರಸ್ತಾಪ ಇಲ್ಲ : ಪರಮೇಶ್ವರ್‌

ಸದ್ಯಕ್ಕೆ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಪ್ರಸ್ತಾಪ ಇಲ್ಲ : ಪರಮೇಶ್ವರ್‌

ಬೆಂಗಳೂರು,ಆ.14- ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಅಲ್ಲಲ್ಲಿ ಶಾಸಕರು, ಸಚಿವರು ಸೇರಿದಾಗ ಅನೌಪಚಾರಿಕವಾಗಿ ಸಮಾಲೋಚನೆಗಳಾಗಿವೆ. ಆದರೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ, ಸದ್ಯಕ್ಕೆ ಈ ವರ್ಷ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಪ್ರಸ್ತಾಪ ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

ಸದಾಶಿವನಗರದ ತಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು, ಮುಖಂಡರು ದೆಹಲಿಗೆ ಹೋದಾಗ ಎಐಸಿಸಿ ಕಚೇರಿಗೆ ಭೇಟಿ ನೀಡುವುದು ಸಂಪ್ರದಾಯ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ತಲುಪಬೇಕು ಎಂಬುದು ಬಹಳ ಜನರ ಅಭಿಪ್ರಾಯವಾಗಿದೆ. ಈಗಾಗಲೇ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ರೂ. 56 ಸಾವಿರ ಕೋಟಿ ಮೀಸಲಿಡಲಾಗಿದೆ. ಹೀಗಾಗಿ ಪ್ರಸಕ್ತ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಚರ್ಚೆಗಳಾಗುತ್ತಿರುವುದು ನಿಜ. ಶಾಸಕರು, ಕಾರ್ಯಕರ್ತರು ಸಾರ್ವಜನಿಕವಾಗಿ ಅಲ್ಲಲ್ಲಿ ಮಾತನಾಡಿರಬಹುದು. ಪಕ್ಷದ ವೇದಿಕೆಯಲ್ಲಿ, ಸರ್ಕಾರದ ಹಂತದಲ್ಲಿ ಚರ್ಚೆಯಾಗಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷಕ್ಕೆ ಶೇ.13ರಷ್ಟು ಮತ ಹೆಚ್ಚಾಗಿವೆ. ಗ್ಯಾರಂಟಿ ಯೋಜನೆಗಳಿಂದ ಮತ ಹೆಚ್ಚಾಗಿದೆ ಎಂದು ಯಾಕೆ ವಿಶ್ಲೇಷಣೆ ಮಾಡಬಾರದು ಎಂದ ಅವರು, ಗ್ಯಾರಂಟಿ ಯೋಜನೆ ಪರಿಷ್ಕರಣೆ ಬಗ್ಗೆ ನನ್ನ ಅಭಿಪ್ರಾಯವೊಂದೇ ಮುಖ್ಯವಾಗುವುದಿಲ್ಲ. ಒಬ್ಬೊಬ್ಬರು ಒಂದೊಂದು ಹೇಳಿಕೆಗಳನ್ನು ನೀಡುತ್ತಾ ಹೋದರೆ ಗೊಂದಲ ಉಂಟಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಮೂಡಾ ವಿಚಾರದಲ್ಲಿ ರಾಜ್ಯಪಾಲರ ನಡೆಯ ಬಗ್ಗೆ ವಕ್ತಾರನಾಗಿ ನಾನೇನೂ ಹೇಳಲು ಹೋಗುವುದಿಲ್ಲ. ತಪ್ಪು ತೀರ್ಮಾನ ತೆಗೆದುಕೊಳ್ಳುತ್ತಿದ್ದೀರಿ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಡಿ. ಸಿಎಂ ಅವರಿಗೆ ನೀಡಿರುವ ಷೋಕಾಸ್‌‍ ನೋಟಿಸ್‌‍ ವಾಪಸ್‌‍ ಪಡೆಯುವಂತೆ ರಾಜ್ಯಪಾಲರಿಗೆ ಸಲಹೆ ನೀಡಲು ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಇದನ್ನು ರಾಜ್ಯಪಾಲರು ಸ್ವೀಕರಿಸಬೇಕು. ಇಲ್ಲವಾದರೆ ಮುಂದಿನ ಕ್ರಮದ ಬಗ್ಗೆ ಸಮರ್ಥನೆ ನೀಡಬೇಕಾಗುತ್ತದೆ ಎಂದು ಹೇಳಿದರು.

ಒಳಮೀಸಲಾತಿ ಜಾರಿ ಮಾಡುವ ಕುರಿತು ಎಐಸಿಸಿಯವರು ರಾಜ್ಯ ಸರ್ಕಾರಕ್ಕೆ ಯಾವ ನಿರ್ದೇಶನ ನೀಡುತ್ತಾರೆಯೋ ಅದರ ಪ್ರಕಾರ ಮುಂದುವರಿಯುತ್ತೇವೆ. ಈ ಬಗ್ಗೆ ಹೈಕಮಾಂಡ್‌ ಹಂತದಲ್ಲಿ ಚರ್ಚೆಯಾಗಬೇಕು ಎಂದರು.

ಭೋವಿ ನಿಗಮದ ಮೇಲೆ ಸಿಐಡಿ ದಾಳಿ ನಡೆಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಅಕ್ರಮದ ಬಗ್ಗೆ ತನಿಖೆಗೆ ಆದೇಶಿಸಲಾಗಿತ್ತು. ಇದರ ಭಾಗವಾಗಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದಿರುವ ಎಲ್ಲ ಅಕ್ರಮಗಳ ಬಗ್ಗೆ ತನಿಖೆ ಮಾಡುತ್ತೇವೆ. ಎಲ್ಲವನ್ನೂ ತಾರ್ಕಿಕ ಅಂತ್ಯಕ್ಕೆ ತರಬೇಕು ಎಂದು ಹೇಳಿದರು.

RELATED ARTICLES

Latest News