ಪ್ರವಾಹ ತಪ್ಪಿಸಲು ಇದೇ ಮೊದಲ ಬಾರಿಗೆ ಕರ್ನಾಟಕ-ಮಹಾರಾಷ್ಟ್ರ ಮಾಹಿತಿ ಹಂಚಿಕೆ

Spread the love

ಬೆಂಗಳೂರು,ಜೂ.19- ಪ್ರತಿ ವರ್ಷ ಮಳೆಗಾಲದಲ್ಲಿ ಉಂಟಾಗುತ್ತಿದ್ದ ಪ್ರವಾಹವನ್ನು ತಪ್ಪಿಸಲು ಇದೇ ಮೊದಲ ಬಾರಿಗೆ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳು, ಮಳೆ ಪ್ರಮಾಣ, ಜಲಾಶಯಗಳಿಂದ ನೀರು ಬಿಡುಗಡೆ ಕುರಿತಂತೆ ಕ್ಷಣ ಕ್ಷಣದ ಮಾಹಿತಿ ಹಂಚಿಕೊಳ್ಳಲು ತೀರ್ಮಾನಿಸಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿಂದು ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್ ಹಾಗೂ ರಾಜ್ಯದ ಪ್ರವಾಹ ನಿಯಂತ್ರಣ ಮತ್ತು ನಿರ್ವಹಣಾ ಸಮಿತಿಯ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು.

ಕೃಷ್ಣಾ ಮತ್ತು ಭೀಮಾ ಜಲಾನಯನ ಪ್ರದೇಶದಲ್ಲಿ ಪರಿಣಾಮಕಾರಿ ಪ್ರವಾಹ ನಿರ್ವಹಣೆ, ಎರಡೂ ರಾಜ್ಯಗಳ ನಡುವೆ ಸಚಿವರು, ಕಾರ್ಯದರ್ಶಿಗಳ ಹಂತ ಹಾಗೂ ತಳಹಂತದ ಅಕಾರಿಗಳ ನಡುವೆ ಉತ್ತಮ ಸಂವಹನ, ಸಮನ್ವಯ ನಿರ್ವಹಿಸಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ದೂಧ್ ಗಂಗಾ ಯೋಜನೆಯನ್ನು ಎರಡು ವರ್ಷದೊಳಗೆ ಪೂರ್ಣಗೊಳಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಒಪ್ಪಿಕೊಂಡಿದೆ. ಇದರಿಂದ ಈ ಭಾಗದ ಜನರ ನೀರಾವರಿ ಸೌಲಭ್ಯ ಹೊಂದುವ ಆಕಾಂಕ್ಷೆ ನೆರವೇರಲಿದೆ.

ಇದರೊಂದಿಗೆ ಬೇಸಿಗೆಯಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ 4 ಟಿಎಂಸಿ ನೀರು ಹಾಗೂ ಮಳೆಗಾಲದಲ್ಲಿ ಮಹಾರಾಷ್ಟ್ರಕ್ಕೆ ರಾಜ್ಯದಿಂದ ಅಷ್ಟೇ ಪ್ರಮಾಣದ ನೀರು ಒದಗಿಸುವ ಬಗ್ಗೆ ತಾಂತ್ರಿಕ ಸಮಿತಿ ರಚಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ಸಭೆಯಲ್ಲಿ ಮಹಾರಾಷ್ಟ್ರ ರಾಜ್ಯದ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್, ಕರ್ನಾಟಕದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಜಲಸಂಪನ್ಮೂಲ ಇಲಾಖೆಯ ಅಪರಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕರ್ನಾಟಕ ಮತ್ತು ಮಹಾರಾಷ್ಟ್ರದ ರಾಜ್ಯ ಸರ್ಕಾರಗಳ ಹಿರಿಯ ಅಕಾರಿಗಳು ಭಾಗವಹಿಸಿದ್ದರು.

Facebook Comments

Sri Raghav

Admin