ಬೆಂಗಳೂರು,ಜ.22– ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಅಧಿಸೂಚನೆ ಹೊರಡಿಸಲಾಗಿದೆ.ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ನಿರ್ದಿಷ್ಟಪಡಿಸಲಾದ ಪರಿಮಿತಿಯುಳ್ಳ ಪ್ರದೇಶವನ್ನು ಆಡಳಿತಾತಕ ಹಿತದೃಷ್ಟಿಯಿಂದ ಪ್ರತ್ಯೇಕಿಸಿ ಧಾರವಾಡ ಮಹಾನಗರ ಪಾಲಿಕೆಯನ್ನು ಸ್ಥಾಪಿಸಿ ರಾಜ್ಯಸರ್ಕಾರ ಅಧಿಸೂಚಿಸಿದೆ.
ಹೊಸದಾಗಿ ರಚಿತವಾದ ಧಾರವಾಡ ಮಹಾನಗರ ಪಾಲಿಕೆಯು 120.94 ಚದರ ಕಿ.ಮೀ. ವ್ಯಾಪ್ತಿಯನ್ನು ಒಳಗೊಳ್ಳಲಿದೆ. ಹಾಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನಿರ್ದಿಷ್ಟಪಡಿಸಲಾದ ಪರಿಮಿತಿಯುಳ್ಳ ಪ್ರದೇಶವನ್ನು ಹುಬ್ಬಳ್ಳಿ ಮಹಾನಗರ ಪಾಲಿಕೆ ಎಂದು ಮುಂದುವರೆಸಲು ಉದ್ದೇಶಿಸಲಾಗಿದೆ. ಧಾರವಾಡ ಮಹಾನಗರ ಪಾಲಿಕೆ ಹಾಗೂ ಹುಬ್ಬಳ್ಳಿ ಮಹಾನಗರ ಪಾಲಿಕೆಯ ವ್ಯಾಪ್ತಿ ಪ್ರದೇಶವನ್ನು ಪ್ರತ್ಯೇಕವಾಗಿ ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿದೆ.
ಇಂದು ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿದ್ದು, ಧಾರವಾಡ ಮಹಾನಗರ ಪಾಲಿಕೆ ಅಸ್ತಿತ್ವಕ್ಕೆ ಬರಲಿದೆ. ಆದರೆ ಸಾರ್ವಜನಿಕರಿಂದ ಆಕ್ಷೇಪಣೆ, ಸಲಹೆಗಳನ್ನು ಲಿಖಿತವಾಗಿ ಸಲ್ಲಿಸಲು ನಿನ್ನೆಯಿಂದ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ.
ಬೆಂಗಳೂರಿನ ವಿವಿ ಗೋಪುರದ ಒಂಭತ್ತನೇ ಮಹಡಿಯಲ್ಲಿರುವ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಗೆ ಇಂದಿನಿಂದ 30 ದಿನದೊಳಗಾಗಿ ಆಕ್ಷೇಪಣೆ ಅಥವಾ ಸಲಹೆಗಳನ್ನು ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.