ಬೆಂಗಳೂರು,ಜ.3- ನೆರೆಹೊರೆಯ ರಾಜ್ಯಗಳಲ್ಲಿ ಹಾಗೂ ನಮ್ಮ ರಾಜ್ಯದಲ್ಲೂ ಕೋವಿಡ್ ಮತ್ತು ಓಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಾಳೆ ತಜ್ಞರ ಜೊತೆ ಸಭೆ ನಡೆಸಿ ಸೋಂಕು ನಿಯಂತ್ರಣಕ್ಕೆ ಕಠಿಣ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇಗವಾಗಿ ಹರಡುತ್ತಿರುವ ಸೋಂಕು ನಿಯಂತ್ರಣಕ್ಕೆ ಮುಂದಿನ ದಿನಗಳಲ್ಲಿ ಯಾವ ರೀತಿ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂಬ ಬಗ್ಗೆ ತಜ್ಞರ ಜೊತೆ ಚರ್ಚೆ ನಡೆಸುವ ಅಗತ್ಯವಿದೆ. ಹೀಗಾಗಿ ನಾಳೆ ಸಂಜೆ ತಜ್ಞರ ಜೊತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಹಲವು ಕ್ರಮಗಳ ಅಗತ್ಯವನ್ನು ಮನಗಂಡು ತಜ್ಞರ ಜೊತೆ ಮಾತುಕತೆ, ಚರ್ಚೆ ನಡೆಸುತ್ತೇವೆ. ಅವರು ನೀಡಿದ ಸಲಹೆಗಳ ಆಧಾರದ ಮೇಲೆ ಗುರುವಾರ ಸಂಪುಟ ಸಹೋದ್ಯೋಗಿಗಳ ಜೊತೆ ಸಚಿವ ಸಂಪುಟ ಸಭೆ ನಡೆಸಿ ಚರ್ಚಿಸುತ್ತೇನೆ. ಸಭೆಯಲ್ಲಿ ರಾಜ್ಯದ ಒಟ್ಟಾರೆ ಸ್ಥಿತಿಗತಿ, ತೆಗೆದುಕೊಳ್ಳಬೇಕಾದ ದೀರ್ಘಾವ ಕ್ರಮಗಳ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಈ ಹಿಂದೆ ಕೋವಿಡ್ ಮೊದಲ ಮತ್ತು ಎರಡನೇ ಅಲೆ ಬಂದು ಲಾಕ್ ಡೌನ್ ಮಾಡಿ ಆದ ಅನುಭವಗಳು, ಆರೋಗ್ಯ ವ್ಯವಸ್ಥೆ, ಕೋವಿಡ್ ಮುನ್ನೆಚ್ಚರಿಕೆ ಯಾವ ರೀತಿ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಮತ್ತು ಜನತೆಗೆ ಸಹ ಗೊತ್ತಾಗಿದೆ. ಈ ಸಂದರ್ಭದಲ್ಲಿ ಜನರು ಸ್ವ ನಿರ್ಬಂಧ ಹಾಕಿಕೊಳ್ಳಲೇಬೇಕು. ಸ್ವಯಂ ನಿಯಂತ್ರಣ ಮಾಡಿಕೊಂಡು ಆರೋಗ್ಯ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಕಷ್ಟವಾಗುತ್ತದೆ ಎಂದರು.
ಮುಂದಿನ ದಿನಗಳಲ್ಲಿ ಓಮಿಕ್ರಾನ್ ಸೋಂಕು ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿಗೆ ತರುವ ಬಗ್ಗೆಯೂ ಮುಖ್ಯಮಂತ್ರಿಗಳು ಸುಳಿವು ನೀಡಿದರು.
ಇಂದು ರಾVದ್ಯಂತ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೋನಾ ಲಸಿಕೆ ನೀಡುವ ಅಭಿಯಾನಕ್ಕೆ ಬೆಂಗಳೂರಿನಲ್ಲಿ ಚಾಲನೆ ನೀಡುತ್ತಿದ್ದೇನೆ.
ಯುವಜನತೆಯನ್ನು ಕೊರೋನಾ ಸುರಕ್ಷಾ ಚಕ್ರದ ಒಳಗೆ ತರಬೇಕು ಎಂಬುದು ಸರ್ಕಾರದ ಆದ್ಯತೆಯಾಗಿದೆ. ಇದಕ್ಕೆ ಶಿಕ್ಷಕರು, ಪೋಷಕರು, ಮಕ್ಕಳು ಎಲ್ಲರೂ ಸಹಕಾರ ನೀಡಬೇಕು ಎಂದು ಬೊಮ್ಮಾಯಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.
