Thursday, May 9, 2024
Homeರಾಜ್ಯಹಳೇ ಮೈಸೂರು ಭಾಗದಲ್ಲಿ 'ಆಪರೇಷನ್ ಹಸ್ತ' ಜೋರು

ಹಳೇ ಮೈಸೂರು ಭಾಗದಲ್ಲಿ ‘ಆಪರೇಷನ್ ಹಸ್ತ’ ಜೋರು

ಬೆಂಗಳೂರು,ಮಾ.26– ಮೈಸೂರು- ಚಾಮರಾಜನಗರ, ಮಂಡ್ಯ ಕ್ಷೇತ್ರಗಳನ್ನು ಗೆಲ್ಲಲೇಬೇಕು ಎಂಬ ಹಠಕ್ಕೆ ಬಿದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಮೂರು ದಿನಗಳಿಂದಲೂ ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಬೀಡುಬಿಟ್ಟು ಕಾರ್ಯತಂತ್ರ ರೂಪಿ ಸುವಲ್ಲಿ ನಿರತರಾಗಿದ್ದಾರೆ.

ಇಂದು ಮೈಸೂರಿನಲ್ಲಿ ನಡೆಯುವ ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮದಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪರಮಾಪ್ತರಾಗಿರುವ ಎಚ್.ವಿ.ರಾಜೀವ, ಮೈಸೂರಿನ ಮಾಜಿ ಮಹಾಪೌರರಾಗಿದ್ದ ಬಿ.ಎಲ್.ಭೈರಪ್ಪ, ಹಿರಿಯ ಮುಖಂಡ ಕೆ.ವಿ.ಮಲ್ಲೇಶ್ ಸೇರಿದಂತೆ ನೂರಾರು ಮಂದಿ ಇಂದು ಬಿಜೆಪಿ ಮತ್ತು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯಿಂದ ಅಸಮಾಧಾನಗೊಂಡಿರುವ ಹಾಗೂ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಯಡಿಯೂರಪ್ಪ ಅವರ ಮಾತನ್ನು ನಿರ್ಲಕ್ಷಿಸಿದ್ದರಿಂದಾಗಿ ಅಸಹನೆಗೊಳಗಾಗಿರುವ ನಾಯಕರಿಗೆ ಕಾಂಗ್ರೆಸ್ ಗಾಳ ಹಾಕಿದೆ. ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅತೃಪ್ತ ನಾಯಕರನ್ನು ಕಾಂಗ್ರೆಸ್ಗೆ ಸೆಳೆದುಕೊಳ್ಳಲಾಗುತ್ತಿದೆ. ಇತ್ತೀಚೆಗೆ ಮಾಜಿ ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ ಹಾಗೂ ಅಪ್ಪಾಜಿಗೌಡ, ಮಾಜಿ ಶಾಸಕ ಶ್ರೀನಿವಾಸ್ ಅವರು ಕಾಂಗ್ರೆಸ್ ಸೇರ್ಪಡೆಯಾದರು.

ಅದರ ಬೆನ್ನಲ್ಲೇ ಮೈಸೂರಿನಲ್ಲಿ ಬಿಜೆಪಿಯ ಪ್ರಬಾವಿ ನಾಯಕರು ಕಾಂಗ್ರೆಸ್ ಸೇರುತ್ತಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅವರಿಗೆ ಟಿಕೆಟ್ ವಂಚನೆಯಾಗುತ್ತಿದ್ದಂತೆ ಅವರ ಬೆಂಬಲಿಗರು ಕಾಂಗ್ರೆಸ್ನತ್ತ ಮುಖ ಮಾಡಿದ್ದಾರೆ.ಬಿಜೆಪಿ ಚುನಾವಣೆ ಹಿನ್ನೆಲೆಯಲ್ಲಿ ಕರೆದಿರುವ ಮಂಡ್ಯ ಜಿಲ್ಲೆಯ ಸಭೆಗೆ ಸಂಸದೆ ಸುಮಲತಾ ಅವರಿಗೆ ಆಹ್ವಾನ ಇಲ್ಲ ಎಂಬುದು ಜಿಲ್ಲೆಯ ಬಹಳಷ್ಟು ಮಂದಿ ಬೆಂಬಲಿಗರನ್ನು ಕೆರಳಿಸಿದೆ.

ಹೀಗಾಗಿ ಕಾಂಗ್ರೆಸ್ನತ್ತ ವಲಸೆ ಬರುವವರ ಪ್ರಮಾಣ ಮತ್ತಷ್ಟು ಹೆಚ್ಚಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಮೈಸೂರು ಲೋಕಸಭಾ ಕ್ಷೇತ್ರದ ಲಕ್ಷ್ಮಣ್ ಅವರನ್ನು ಗೆಲ್ಲಿಸಿಕೊಳ್ಳಲೇ ಬೇಕೆಂದು ಹಠಕ್ಕೆ ಬಿದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ತಡರಾತ್ರಿ 2 ಗಂಟೆಯವರೆಗೂ ಮುಖಂಡರೊಂದಿಗೆ ಸರಣಿ ಸಭೆಗಳನ್ನು ನಡೆಸಿ ಚುನಾವಣಾ ರಣತಂತ್ರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿರುವ ಯದುವೀರ್ ಒಡೆಯರ್ ಅವರ ವಿರುದ್ಧ ಯಾವುದೇ ಟೀಕೆ ಮಾಡಬಾರದು. ಕಾಂಗ್ರೆಸ್ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಮತದಾರರ ಮನವೊಲಿಸಬೇಕು. ಬಿಜೆಪಿ ರಾಜ್ಯ ಮತ್ತು ಜಿಲ್ಲೆಗಳಿಗೆ ಮಾಡಿರುವ ಅನ್ಯಾಯಗಳ ಬಗ್ಗೆ ಮನೆಮನೆಗೆ ಮಾಹಿತಿ ನೀಡಿ ಪಕ್ಷದ ಎಲ್ಲಾ ನಾಯಕರು ಒಗ್ಗಟ್ಟು ಪ್ರದರ್ಶಿಸಬೇಕು. ಯಾವುದೇ ಕಾರಣಕ್ಕೂ ಅಸಮಾಧಾನ, ಅತೃಪ್ತಿಗಳಿಗೆ ಅವಕಾಶ ನೀಡಬಾರದು ಎಂದು ಕಿವಿಮಾತು ಹೇಳಿದ್ದಾರೆ.

ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲದೇ ಇದ್ದರೆ ಜಿಲ್ಲೆಯ ಯಾವುದೇ ನಾಯಕರು ನನ್ನ ಹತ್ತಿರ ಅರ್ಜಿ ಹಿಡಿದು ಬರಬೇಡಿ. ನಿಮ್ಮ ಯಾವುದೇ ಕೆಲಸಗಳನ್ನು ಮಾಡಿಕೊಡುವುದಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ.ಮೈಸೂರು ಜಿಲ್ಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ನ ಅಸಮಾಧಾನಿತ ನಾಯಕರ ಪೈಕಿ ಜನಬೆಂಬಲ ಇರುವ ಹಾಗೂ ಸೈದ್ಧಾಂತಿಕ ಸ್ಪಷ್ಟತೆ ಇರುವವರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಿ. ಹೀಗೆ ಬಂದು ಹಾಗೆ ಹೋಗುವವರನ್ನು ಸೇರಿಸಿಕೊಳ್ಳಬೇಡಿ. ಸೈದ್ಧಾಂತಿಕವಾಗಿ ಬಿಜೆಪಿಯನ್ನು ಅನುಸರಿಸುವುದು, ರಾಜಕೀಯ ಅವಕಾಶಕ್ಕಾಗಿ ಕಾಂಗ್ರೆಸ್ಗೆ ಬರುವವರ ಮೇಲೆ ನಿಗಾ ಇಡಿ ಎಂದು ತಾಕೀತು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚುನಾವಣೆ ಅಧಿಸೂಚನೆ ಜಾರಿಗೆ ಎರಡು ದಿನ ಬಾಕಿ ಇದ್ದು ರಾಜ್ಯಾದ್ಯಂತ ಲೋಕಸಭಾ ಚುನಾವಣೆಯ ಕಾವು ನಿಧಾನಕ್ಕೆ ಏರುತ್ತಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಜ್ಯಾದ್ಯಂತ ಪ್ರಚಾರ ನಡೆಸುವ ಅನಿವಾರ್ಯತೆ ಇದೆ. ಅದಕ್ಕೆ ಪೂರ್ವಭಾವಿಯಾಗಿ ತಮ್ಮ ತವರು ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ನೀಡಬೇಕಾಗಿದ್ದ ಸಲಹೆ ಸೂಚನೆ ನೀಡಲು ಮೂರು ದಿನಗಳ ಕಾಲ ನಿರಂತರ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

RELATED ARTICLES

Latest News