ಬೆಂಗಳೂರು, ಫೆ.8- ಜೆಡಿಎಸ್‍ನ ಕೆಲವು ಶಾಸಕರು, ಮಾಜಿ ಶಾಸಕರು, ಮುಖಂಡರು ಪಕ್ಷ ತೊರೆಯಲು ಸಿದ್ಧರಾಗಿದ್ದು, ರಾಷ್ಟ್ರೀಯ ಪಕ್ಷಗಳತ್ತ ಮುಖ ಮಾಡಿರುವ ಬೆನ್ನಲ್ಲೇ ಆಪರೇಷನ್ ಜೆಡಿಎಸ್‍ಗೆ ತೆರೆಮರೆಯಲ್ಲಿ ಸಿದ್ಧತೆ ನಡೆದಿದೆ. ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು ಕಾಂಗ್ರೆಸ್ ತೊರೆದು ಜೆಡಿಎಸ್‍ಗೆ ಸೇರ್ಪಡೆಯಾದ ಬೆನ್ನಲ್ಲೇ ಆಪರೇಷನ್ ಜೆಡಿಎಸ್‍ಗೆ ಚಾಲನೆ ದೊರೆಯಲಿದೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಹಲವು ನಾಯಕರು, ಮುಖಂಡರು ಸಂಪರ್ಕದಲ್ಲಿದ್ದಾರೆ. ಇಬ್ರಾಹಿಂ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ತೊರೆದು ಜೆಡಿಎಸ್‍ಅನ್ನು ಸದ್ಯದಲ್ಲೇ ಸೇರ್ಪಡೆಯಾಗಲಿದ್ದಾರೆ. ಇದಾದ ನಂತರ ಅಂದರೆ ಶಿವರಾತ್ರಿ ಹಬ್ಬದ ನಂತರ ರಾಷ್ಟ್ರೀಯ ಪಕ್ಷಗಳಿಂದ ಬರುವ ನಾಯಕರಿಗೆ ಮಣೆ ಹಾಕಲು ಉದ್ದೇಶಿಸಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಲ್ಲಿ ಟಿಕೆಟ್ ಸಿಗುವುದಿಲ್ಲ ಎಂಬುದು ಖಾತರಿಯಾಗಿರುವವರು ಜೆಡಿಎಸ್‍ನತ್ತ ಮುಖ ಮಾಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ದೊರೆಯುವುದು ಖಚಿತವಾದರೆ ಜೆಡಿಎಸ್ ಸೇರುವುದು ನಿಶ್ಚಿತವಾಗಿದೆ ಎಂದು ಮೂಲಗಳು ಹೇಳಿವೆ.
ಎರಡೂ ಪಕ್ಷಗಳಿಂದ ಸುಮಾರು 20ಕ್ಕೂ ಹೆಚ್ಚು ನಾಯಕರು, ಮುಖಂಡರು ಕುಮಾರಸ್ವಾಮಿಯವರ ಜತೆ ನಿಕಟ ಸಂಪರ್ಕದಲ್ಲಿದ್ದಾರೆ. ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕುರಿತಂತೆ ಈಗಾಗಲೇ ಪಕ್ಷದ ಹಿರಿಯ ನಾಯಕರೊಂದಿಗೆ ಕುಮಾರಸ್ವಾಮಿ ಸಮಾಲೋಚನೆ ಕೂಡ ನಡೆಸಿದ್ದಾರೆ.
ಜೆಡಿಎಸ್‍ನ ಮಹತ್ವದ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂದರ್ಭದಲ್ಲೇ ಪಕ್ಷಕ್ಕೆ ಬರುವವರನ್ನು ಸೇರ್ಪಡೆ ಮಾಡಿಕೊಳ್ಳುವ ಕಾರ್ಯವು ಚುರುಕಾಗಲಿದೆ. ಈಗಾಗಲೇ ಅದಕ್ಕೆ ಬೇಕಾದ ಭೂಮಿಕೆಯನ್ನು ಸಿದ್ಧಪಡಿಸಲಾಗಿದೆ. ಪಕ್ಷ ತೊರೆದು ಹೋಗುವ ಶಾಸಕರು, ಮಾಜಿ ಸಚಿವರ ಕ್ಷೇತ್ರಗಳಿಗೆ ಪರ್ಯಾಯ ಅಭ್ಯರ್ಥಿಯನ್ನು ಹುಡುಕಲಾಗುತ್ತಿದೆ.
ಕೋವಿಡ್ ಹಾಗೂ ಪಕ್ಷಕ್ಕೆ ಸೇರ್ಪಡೆಯಾಗುವವರ ಕಾರಣದಿಂದ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಪ್ರಕಟಿಸಬೇಕಾಗಿದ್ದ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಮುಂದೂಡಲಾಗಿದೆ. ಸೇರ್ಪಡೆ ಕಾರ್ಯಕ್ರಮ ಮುಗಿದ ನಂತರ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿ ಈಗಿನಿಂದಲೇ ಚುನಾವಣಾ ಸಿದ್ಧತೆ ಕೈಗೊಳ್ಳುವಂತೆ ವರಿಷ್ಠರು ನಿರ್ದೇಶನ ನೀಡಲಿದ್ದಾರೆ ಎಂದು ಜೆಡಿಎಸ್ ಮೂಲಗಳು ಸ್ಪಷ್ಟಪಡಿಸಿವೆ.
