ಬೆಂಗಳೂರು, ಮೇ 15-ಲೋಕಸಭಾ ಚುನಾವಣೆಗಿಂತಲೂ ವಿಧಾನ ಪರಿಷತ್ ಚುನಾವಣೆ ತೀವ್ರ ಪೈಪೋಟಿಯಿಂದ ಕೂಡಿದ್ದು, ಮೂರು ಪಕ್ಷಗಳೂ ಬಂಡಾಯದ ಬಿಸಿ ಎದುರಿಸುವಂತಾಗಿದೆ. ವಿಧಾನ ಪರಿಷತ್ತಿನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರಗಳಿಗೆ ಜೂನ್ ಮೂರರಂದು ಮತದಾನ ನಡೆಯಲಿದೆ. ಈಗಾಗಲೇ ಮೂರು ಪಕ್ಷಗಳು ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸ್ಪರ್ಧೆಗಿಳಿಸುತ್ತಿವೆ.
ನಾಮಪತ್ರ ಸಲ್ಲಿಸಲೂ ಇನ್ನೊಂದು ದಿನ ಮಾತ್ರ ಬಾಕಿ ಉಳಿದಿದ್ದು, ಬೆಂಗಳೂರು ಪದವೀಧರರ, ಕರ್ನಾಟಕ ದಕ್ಷಿಣ ಶಿಕ್ಷಕರ, ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಲ್ಲೂ ಬಂಡಾಯವಿರುವುದು ಕಂಡುಬರುತ್ತಿದೆ.
ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಅವರು ನಾಮಪತ್ರ ಸಲ್ಲಿಸಿ ಸ್ಪರ್ಧೆಗಿಳಿದಿದ್ದಾರೆ. ಕಾಂಗ್ರೆಸ್ ಟಿಕೆಟ್ ಸಿಗದಿದ್ದರೂ ನೀಲಕಂಠ ಆರ್. ಗೌಡ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯದ ಬಿಸಿ ಎದುರಿಸುವಂತಾಗಿದೆ.
ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್ .ಭೋಜೇಗೌಡ ಸ್ಪರ್ಧಿಸಿದ್ದಾರೆ. ಈ ಕ್ಷೇತ್ರವನ್ನು ಬಿಜೆಪಿ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಆದರೂ ಬಿಜೆಪಿ ಅಭ್ಯರ್ಥಿ ಆಕಾಂಕ್ಷಿಯಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ನ ಮಾಜಿ ಸದಸ್ಯ ಎಸ್.ಆರ್.ಹರೀಶ್ ಆಚಾರ್ಯ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ. ಇದು ಮೈತ್ರಿ ಪಕ್ಷಗಳಿಗೆ ತಲೆನೋವಾಗಿದೆ.
ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ ಸ್ಪರ್ಧಿಸಿದ್ದಾರೆ. ಆದರೆ, ಈ ಕ್ಷೇತ್ರ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರು ಸಂಜೆ ಶಿಕ್ಷಕರ ಸಭೆ ಕರೆದಿದ್ದು, ಬಂಡಾಯ ಸ್ಪರ್ಧೆ ಮಾಡುವ ಸುಳಿವು ನೀಡಿದ್ದಾರೆ ಎನ್ನಲಾಗಿದೆ.
ಅಲ್ಲದೆ, ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಇ.ಸಿ.ನಿಂಗರಾಜು ಅವರನ್ನು ಘೋಷಿಸಿದ್ದಾರೆ. ನಿಂಗರಾಜು ಕೂಡ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿರುವುದು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ.ಹೀಗಾಗಿ ಮೂರು ಕ್ಷೇತ್ರಗಳಲ್ಲೂ ಮೂರು ರಾಜಕೀಯ ಪಕ್ಷಗಳಿಗೆ ಟಿಕೆಟ್ ಆಕಾಂಕ್ಷಿಗಳು ಬಂಡಾಯ ಸ್ಪರ್ಧೆ ಮಾಡುತ್ತಿರುವುದು ತಲೆನೋವಾಗಿ ಪರಿಣಮಿಸಿದೆ.