ನವದೆಹಲಿ, ಜು.21- ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಕಾರಿಗಳಾದ ಡಾ.ಶ್ರೀ ವೀರೇಂದ್ರ ಹೆಗ್ಗಡೆ ಅವರು ಇಂದು ಸಂಸತ್‍ನಲ್ಲಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.
ಇಂದು ಬೆಳಗ್ಗೆ ಸಂಸತ್ ಭವನಕ್ಕೆ ಆಗಮಿಸಿದ ಅವರನ್ನು ಕರ್ನಾಟಕ, ಆಂಧ್ರ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳ ಸಂಸದರು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟಿಲ್ ಸೇರಿದಂತೆ ಹಲವಾರು ಮಂದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ರಾಜ್ಯಸಭೆ ಸದನಕ್ಕೆ ಬಂದು ತಮ್ಮ ಸ್ಥಾನದಲ್ಲಿ ಆಸೀನರಾದ ನಂತರ ಎಲ್ಲರಿಗೂ ಧನ್ಯತಾಭಾವದಿಂದ ಕೈ ಮುಗಿದರು. ಸಭಾಪತಿ ಸ್ಥಾನದಲ್ಲಿದ್ದ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವಂತೆ ಆಹ್ವಾನ ನೀಡಿದರು.
ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ ನಂತರ ಕಡತಗಳಿಗೆ ಸಹಿ ಹಾಕಿ ಕಲಾಪದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.