ರಾಜ್ಯಕ್ಕೆ ಪ್ರಧಾನಿ ಆಗಮನ, ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ಭರ್ಜರಿ ತಯಾರಿ

Social Share

ಮಂಗಳೂರು, ಸೆ.1- ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಆಯೋಜಿಸಿರುವ ಸಮಾವೇಶದ ಯಶಸ್ಸಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ನೇತೃತ್ವದಲ್ಲಿ ಭರದ ಸಿದ್ಧತೆ ನಡೆಯುತ್ತಿದ್ದು, ಒಂದು ಲಕ್ಷಕ್ಕೂ ಮೇಲ್ಪಟ್ಟು ಜನರು ಸೇರುವ ನಿರೀಕ್ಷೆ ಇದೆ.

ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಬಳಿಕ ಈ ಸಮಾವೇಶ ನಡೆಯಲಿದೆ. ರಾಜಕೀಯವಾಗಿಯೂ ಇದು ಮಹತ್ವ ಪಡೆದಿರುವುದರಿಂದ ಸಣ್ಣಪುಟ್ಟ ಸಂಗತಿಗಳಿಗೂ ಬಿಜೆಪಿ ವಿಶೇಷ ಲಕ್ಷ್ಯ ನೀಡುತ್ತಿದೆ.ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಕಾರ್ಯಕ್ರಮದ ಖುದ್ದು ಮೇಲುಸ್ತುವಾರಿ ವಹಿಸಿದ್ದು, ರಾಜಾ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಜತೆಗೆ ಈಗಾಗಲೇ ಸ್ಥಳ ಪರಿಶೀಲನೆ ಹಾಗೂ ಸಭೆ ನಡೆಸಲಾಗಿದೆ.

ಈ ಸಮಾವೇಶಕ್ಕೆ ಕರಾವಳಿ ಜಿಲ್ಲೆಗಳಲ್ಲೇ ಇತ್ತೀಚಿನ ದಿನಗಳಲ್ಲಿ ಸೇರದೆ ಇರುವಷ್ಟು ಜನರನ್ನು ಸೇರಿಸಲಾಗುತ್ತಿದೆ. ಕರಾವಳಿ ಬಿಜೆಪಿಯ ಭದ್ರಕೋಟೆಯಾಗಿರುವುದರಿಂದ ಸ್ವಯಂಪ್ರೇರಣೆಯಿಂದಲೇ ಜನರು ಸಮಾವೇಶಕ್ಕೆ ಆಗಮಿಸಲಿದ್ದಾರೆ. ಸುಮಾರು ಒಂದು ಲಕ್ಷ ಜನರು ಮೋದಿ ಭಾಷಣ ಕೇಳುವುದಕ್ಕೆ ಆಗಮಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಸಮಾವೇಶ ಸ್ಥಳಕ್ಕೆ ಉಭಯ ಜಿಲ್ಲೆಗಳಿಂದ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಕರೆತರುವುದಕ್ಕೆ ಸುಮಾರು 2000 ಬಸ್ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಕಾರ್ಯಕ್ರಮದ ಬಳಿಕ ಬಿಜೆಪಿ ಕೋರ್ ಕಮಿಟಿ ಸಭೆಯೂ ಸೇರಿದಂತೆ ಸುಮಾರು ಒಂದು ಗಂಟೆ ಕಾಲ ಪಕ್ಷದ ನಾಯಕರ ಜತೆಗೆ ಪ್ರಧಾನಿ ಮೋದಿ ಚರ್ಚೆ ನಡೆಸಲಿದ್ದು, ಇದಕ್ಕೆ ಬೇಕಾದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

ಪರಶುರಾಮನ ವಿಗ್ರಹ ಸ್ಮರಣಿಕೆ:

ಪ್ರಧಾನಿ ಮೋದಿಯವರಿಗೆ ಪರಶುರಾಮ ವಿಗ್ರಹವನ್ನು ಸ್ಮರಣಿಕೆಯಾಗಿ ನೀಡಲಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಪ್ರದೇಶ ಪರಶುರಾಮ ಸೃಷ್ಟಿಯಾಗಿದೆ. ವಿಷ್ಣುವಿನ ಅವತಾರವಾಗಿರುವ ಪರಶುರಾಮರು ಕೊಡಲಿ ಬೀಸಿ ಕಡಲು ಹಿಂದೆ ಸರಿಯುವಂತೆ ಮಾಡಿ ಕರಾವಳಿಯನ್ನು ಸೃಷ್ಟಿಸಿದ ಐತಿಹ್ಯವಿದೆ.

ಈ ಹಿನ್ನೆಲೆಯಲ್ಲಿ ಪರಶುರಾಮ ಸೃಷ್ಟಿ ಕರಾವಳಿಗೆ ಆಗಮಿಸುತ್ತಿರುವ ನರೇಂದ್ರ ಮೋದಿಯವರಿಗೆ ಪರಶುರಾಮ ಮೂರ್ತಿಯನ್ನು ಸ್ಮರಣಿಕೆಯಾಗಿ ನೀಡಲಾಗುತ್ತಿದೆ. ಮೂರ್ತಿ 2.5 ಅಡಿ ಎತ್ತರವಿದ್ದು, ಉಡುಪಿಯಲ್ಲಿ ಸಿದ್ಧಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಪುತ್ಥಳಿಯನ್ನು ವಿಶೇಷ ಆಸ್ಥೆಯಿಂದ ಸಿದ್ಧಪಡಿಸುವುದಕ್ಕೆ ಸಚಿವ ಸುನಿಲ್ ಕುಮಾರ್ ಈಗಾಗಲೇ ಸೂಚನೆ ನೀಡಿದ್ದಾರೆ. ಕರಾವಳಿಯ ಇತಿಹಾಸದಲ್ಲಿ ನಭೂತೋ ಎಂಬಂತೆ ಕಾರ್ಯಕ್ರಮ ಯಶಸ್ವಿಗೊಳಿಸಲು ಕೇಸರಿಪಡೆ ಈಗ ಸಜಾ್ಜಗಿದೆ.

Articles You Might Like

Share This Article