Thursday, May 2, 2024
Homeರಾಜ್ಯನಾಳೆ ರಾಜ್ಯದಲ್ಲಿ ಪ್ರಧಾನಿ ಮೋದಿ ಮಿಂಚಿನ ಸಂಚಾರ, ಭರ್ಜರಿ ಮತಬೇಟೆ

ನಾಳೆ ರಾಜ್ಯದಲ್ಲಿ ಪ್ರಧಾನಿ ಮೋದಿ ಮಿಂಚಿನ ಸಂಚಾರ, ಭರ್ಜರಿ ಮತಬೇಟೆ

ಬೆಂಗಳೂರು,ಏ.19- ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನಕ್ಕೆ ಒಂದು ವಾರ ಬಾಕಿ ಇರುವಂತೆ ಮತದಾರರನ್ನು ಓಲೈಸಿಕೊಳ್ಳಲು ರಾಜಕೀಯ ಪಕ್ಷಗಳ ಮುಖಂಡರು ಬೆವರು ಹರಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರಮೋದಿ ಅವರು ನಾಳೆ ಕರುನಾಡಿಗೆ ಲಗ್ಗೆ ಇಡಲಿದ್ದಾರೆ.

ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ಮೋದಿ ಅವರು ನಾಳೆ ಬಹಿರಂಗ ಪ್ರಚಾರ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಚಿಕ್ಕಬಳ್ಳಾಪುರಕ್ಕೆ ಆಗಮಿಸಲಿರುವ ಮೋದಿಯವರು ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರವಾಗಿ ಬಹಿರಂಗ ಪ್ರಚಾರವನ್ನು ನಡೆಸಲಿದ್ದಾರೆ.

ಪ್ರಧಾನಿಯವರು ಚಿಕ್ಕಬಳ್ಳಾಪುರಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ನಾಳೆ ಚಿಕ್ಕಬಳ್ಳಾಪುರ (ಬೆಂಗಳೂರು-ಹೈದರಾಬಾದ್) ದ ರಾಷ್ಟ್ರೀಯ ಹೆದ್ದಾರಿ 44 ಬೈಪಾಸ್‍ನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇರುವುದರಿಂದ ಹೆದ್ದಾರಿಯ ಬೈಪಾಸ್‍ನ್ನು ನಾಳೆ ಸಂಜೆಯವರೆಗೆ ಬಂದ್ ಮಾಡಲಾಗಿದ್ದು, ಪ್ರಯಾಣಿಕರು ಸಹಕರಿಸಬೇಕೆಂದು ಜಿಲ್ಲಾಡಳಿತ ಮನವಿ ಮಾಡಿಕೊಂಡಿದೆ.

ಹೈದರಾಬಾದ್ ಅಥವಾ ಬೆಂಗಳೂರಿಗೆ ಹೋಗುವ ಪ್ರಯಾಣಿಕರು ಚದಲಪುರ, ಚೊಕ್ಕಹಳ್ಳಿ ಮುಖಾಂತರ ಚಿಕ್ಕಬಳ್ಳಾಪುರ ನಗರದ ಒಳಗೆ ಪ್ರವೇಶಿಸಿ, ನಂತರ ಚಿಕ್ಕಬಳ್ಳಾಪುರ ಹೊರಗೆ ವಾಪಸಂದ್ರ ಬ್ರಿಡ್ಜ್ ಮೂಲಕ ರಾಷ್ಟ್ರೀಯ ಹೆದ್ದಾರಿ 44 ಅನ್ನು ಸಂಪರ್ಕಿಸಬಹುದು. ವಾಹನ ಸವಾರರು ಯಾವುದೇ ಕಾರಣಕ್ಕೂ ಚಿಕ್ಕಬಳ್ಳಾಪುರ ಬಳಿ ಇರುವ ಬೈಪಾಸ್ ಮೂಲಕ ಸಂಚರಿಸುವಂತಿಲ್ಲ ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ಚಿಕ್ಕಬಳ್ಳಾಪುರದಲ್ಲಿ ಸಂಜೆ 4 ಗಂಟೆಗೆ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ, ಪಕ್ಷದ ಅಭ್ಯರ್ಥಿ ಡಾ.ಕೆ ಸುಧಾಕರ್ ಪರ ಮತ ಯಾಚನೆ ಮಾಡಲಿದ್ದಾರೆ. ಬಳಿಕ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ.

ಲೋಕಸಭಾ ಚುನಾವಣೆಯ ಪ್ರಚಾರದ ದೃಷ್ಟಿಯಿಂದ ಬಿಜೆಪಿ ಕರ್ನಾಟಕದಲ್ಲಿ ಎಂಟು ಕ್ಲಸ್ಟರ್‍ಗಳನ್ನು ಮಾಡಿದೆ. ಉತ್ತರ ಕರ್ನಾಟಕ, ಕರಾವಳಿ ಸೇರಿದಂತೆ ಹಳೆ ಮೈಸೂರು ಭಾಗ ಸೇರಿ ಒಟ್ಟು 8 ಕ್ಲಸ್ಟರ್‍ಗಳನ್ನು ಮಾಡಲಾಗಿದೆ. ಇದರಂತೆ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮಧ್ಯಾಹ್ನ 3ಕ್ಕೆ ಸಮಾವೇಶದ ಬಳಿಕ ಬೆಂಗಳೂರು ಉತ್ತರದಲ್ಲಿ ರೋಡ್ ಶೋ ಹಾಗೂ ತುಮಕೂರಿನಲ್ಲೂ ರೋಡ್ ಶೋ ನಡೆಸಲು ಮುಂದಾಗಿದೆ.

ಏ.26ರಂದು ರಾಜ್ಯದ 14 ಕ್ಷೇತ್ರಕ್ಕೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರಕ್ಕೆ ಎರಡನೇ ಹಂತದಲ್ಲಿ ಅಂದರೆ ಮೇ 7ರಂದು ಚುನಾವಣೆ ನಡೆಯಲಿದೆ.

ಎರಡನೇ ಹಂತದ ಚುನಾವಣೆಯ ಅಸೂಚನೆ ಏಪ್ರಿಲ್ 12ರಂದು ಹೊರಬಿದ್ದಿದ್ದು, ಇಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ನಾಳೆ ನಾಮಪತ್ರ ಪರಿಶೀಲನೆ ನಡೆಯಲಿದ್ದು , ಏ.22 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ 7ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

RELATED ARTICLES

Latest News