Saturday, May 4, 2024
Homeರಾಜ್ಯಭಾರತ ಪೋಲಿಯೋ ಮುಕ್ತ ರಾಷ್ಟ್ರ ಸ್ಥಿತಿ ಕಾಪಾಡಿಕೊಳ್ಳಬೇಕು : ದಿನೇಶ್‍ ಗುಂಡೂರಾವ್

ಭಾರತ ಪೋಲಿಯೋ ಮುಕ್ತ ರಾಷ್ಟ್ರ ಸ್ಥಿತಿ ಕಾಪಾಡಿಕೊಳ್ಳಬೇಕು : ದಿನೇಶ್‍ ಗುಂಡೂರಾವ್

ಬೆಂಗಳೂರು, ಮಾ.3-ಭಾರತ ಪೋಲಿಯೋ ಮುಕ್ತ ರಾಷ್ಟ್ರವಾಗಿರುವುದನ್ನು ನಾವು ಮುಂದಿನ ದಿನಗಳಲ್ಲೂ ಕಾಯ್ದುಕೊಳ್ಳುವುದು ಮುಖ್ಯವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಕೋದಂಡರಾಮಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಪೋಲಿಯೋ ಲಸಿಕೆ ಹಾಕುವ ಅಭಿಯಾನದಲ್ಲಿ ಪಾಲ್ಗೊಂಡು ಮಕ್ಕಳಿಗೆ 2 ಹನಿ ಪೋಲಿಯೋ ಲಸಿಕೆ ಹಾಕುವ ಮೂಲಕ ಬೆಂಗಳೂರಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು ಇಂದಿನಿಂದ ಮಾರ್ಚ್ 6ರ ವರೆಗೆ ಆರೋಗ್ಯ ಇಲಾಖೆ ಹಮ್ಮಿಕೊಂಡಿರುವ ಪೋಲಿಯೋ ಲಸಿಕಾ ಅಭಿಯಾನದಲ್ಲಿ 5 ವರ್ಷದ ಒಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ವೈಲ್ಡ್ ಪೋಲಿಯೋ ವೈರಸ್‍ನ ಪಸರಿಸುವಿಕೆಯು ಇಂದಿಗೂ ಜಗತ್ತಿನಾದ್ಯಂತ ಮಕ್ಕಳನ್ನು ಬಾಧಿಸುತ್ತಿದೆ. ಇದರಲ್ಲಿ ನೆರೆ ರಾಷ್ಟ್ರಗಳೂ ಸೇರಿರುವುದು ಭಾರತಕ್ಕೆ ಕಳವಳಕಾರಿಯಾಗಿದೆ. ಹೀಗಾಗಿ ಪೋಲಿಯೋ ನಿರ್ಮೂಲನೆ ಸ್ಥಿತಿಯನ್ನು ಭಾರತ ಕಾಯ್ದುಕೊಳ್ಳಬೇಕಿದೆ. ಭಾರತದ ಪರಿಣಿತರ ಸಲಹಾ ಸಮೂಹದ ಶಿಫಾರಸಿನನ್ವಯ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಈ ಲಸಿಕೆ ಹಾಕಲು ರಾಷ್ಟ್ರೀಯ ಪೋಲಿಯೋ ಲಸಿಕಾ ಅಭಿಯಾನವನ್ನು ಇಂದಿನಿಂದ ಮಾರ್ಚ್ 6ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದರು.

ಇಂದು ಪೋಲಿಯೋ ಬೂತ್‍ಗಳಲ್ಲಿ, ಮುಂದಿನ 2 – 3 ದಿನಗಳಲ್ಲಿ ಮನೆ-ಮನೆ ಭೇಟಿಯ ಮೂಲಕ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ 2 ಹನಿ ಪೋಲಿಯೋ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ. ವಿಶೇಷವಾಗಿ ವಲಸಿಗ ಸಮುದಾಯದ, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳಲ್ಲಿನ ಹಾಗೂ ನಗರ ಪ್ರದೇಶದ ಕೊಳಗೇರಿಗಳಲ್ಲಿ ವಾಸಿಸುವ ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ನವೀನ್ ಭಟ್ ತಿಳಿಸಿದ್ದಾರೆ.

ಪಿ-2 ವಿಧದ ಪೋಲಿಯೋ ಸೋಂಕು ಜಾಗತಿಕ ಮಟ್ಟದಲ್ಲಿ ನಿರ್ಮೂಲನೆಯಾಗಿದೆ. ಪಿ-3 ಯ ಯಾವುದೇ ಪ್ರಕರಣಗಳು ವರದಿಯಾಗಿರುವುದಿಲ್ಲ. ಇದಕ್ಕೆ ಅಕೃತವಾಗಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಕ್ಟೋಬರ್ 2019ರಲ್ಲಿ ಪ್ರಮಾಣಪತ್ರ ಪಡೆದಿದೆ. ಈಗ ಪಿ-1 ಪ್ರಕರಣಗಳು ಮಾತ್ರವೇ ವರದಿಯಾಗುತ್ತಿವೆ. 2011ರ ಜನವರಿ 13ರಲ್ಲಿ ಪಶ್ಚಿಮ ಬಂಗಾಳದಲ್ಲಿ ಕೊನೆಯ ಪೋಲಿಯೋ ಪ್ರಕರಣವು ವರದಿಯಾಗಿತ್ತು. ಇದಾದ ಮೇಲೆ ಭಾರತದಲ್ಲಿ ಇದುವರೆವಿಗೂ ಯಾವುದೇ ಪೋಲಿಯೋ ಪ್ರಕರಣಗಳು ವರದಿಯಾಗಿರುವುದಿಲ್ಲ ಎಂದರು.

ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ನಿಯಮಿತವಾಗಿ ಪ್ರತಿ ಶಿಶುವಿಗೆ 5 ವರಸೆ ಒಪಿವಿ(ಓರಲ್ ಪೋಲಿಯೋ ವ್ಯಾಕ್ಸಿನ್) ಮತ್ತು 3 ವರಸೆ ಐಪಿವಿ(ಇನ್ಜಕ್ಟಬಲ್ ಪೋಲಿಯೋ ವ್ಯಾಕ್ಸಿನ್) ಲಸಿಕೆಗಳನ್ನು ನೀಡಲಾಗುತ್ತಿದೆ. ಯಾವುದೇ ಮಗುವು ಲಸಿಕೆಯಿಂದ ವಂಚಿತರಾಗದಂತೆ ಅಂದಾಜು 62 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದರು.

ಸುಮಾರು 33712 ಪೋಲಿಯೋ ಬೂತ್‍ಗಳನ್ನ ತೆರೆಯಲಾಗಿದ್ದು, 111370 ಲಸಿಕಾ ಕಾರ್ಯಕರ್ತರು ಕಾರ್ಯನಿರ್ವಹಿಸಲಿದ್ದಾರೆ. 963 ಸಂಚಾರಿ ತಂಡಗಳನ್ನು ರಚಿಸಲಾಗಿದ್ದು, 7206 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಈ ಹಿಂದೆ ಎಷ್ಟು ಬಾರಿ ಪೋಲಿಯೋ ಲಸಿಕೆ ಪಡೆದಿದ್ದರೂ ಸಹ ಈ ಅಭಿಯಾನದಲ್ಲಿ ಮತ್ತೆ ಲಸಿಕೆ ಹಾಕಿಸುವುದು ಅವಶ್ಯಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಆರೋಗ್ಯ ಕೇಂದ್ರವನ್ನು ಭೇಟಿ ಮಾಡಿ ಅಥವಾ ಆರೋಗ್ಯ ಕಾರ್ಯಕರ್ತರನ್ನು ಸಂಪರ್ಕಿಸಿ ಎಂದರು.

RELATED ARTICLES

Latest News