Homeರಾಜಕೀಯಯಾವುದೇ ಖಾತೆ ಕೊಟ್ಟರೂ ಓಕೆ : ಸಚಿವ ಕೆ.ಎಂ.ಶಿವಲಿಂಗೇಗೌಡ

ಯಾವುದೇ ಖಾತೆ ಕೊಟ್ಟರೂ ಓಕೆ : ಸಚಿವ ಕೆ.ಎಂ.ಶಿವಲಿಂಗೇಗೌಡ

ಹಾಸನ,ಆ.6- ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯ ಅಧ್ಯಯನ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನೀಡಿರುವ ಸೂಚನೆಯ ಹಿನ್ನೆಲೆಯಲ್ಲಿ, ನೂತನ ಸಚಿವ ಕೆ.ಎಂ.ಶಿವಲಿಂಗೇಗೌಡ ಅವರು ಜಿಲ್ಲೆಯಲ್ಲಿ ಬರ ಅಧ್ಯಯನಕ್ಕೆ ಚಾಲನೆ ನೀಡಿದರು. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಅವರು, ಜಿಲ್ಲೆಯ ಗಡಿಭಾಗವಾದ ಹಿರೀಸಾವೆ ಭಾಗದಲ್ಲಿ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ ಬರ ಪರಿಸ್ಥಿತಿ, ಬೆಳೆ ನಷ್ಟ ಹಾಗೂ ಎದುರಾಗಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದು ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಬರ ಅಧ್ಯಯನ ವರದಿ ಸರ್ಕಾರಕ್ಕೆ ಸಲ್ಲಿಕೆ :
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕೆ.ಎಂ. ಶಿವಲಿಂಗೇಗೌಡ, ರಾಜ್ಯದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬರ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಎಂದರು.

ಪ್ರತಿ ಹೊಲಕ್ಕೂ ಭೇಟಿ ನೀಡಿ ನೈಜ ಸ್ಥಿತಿಗತಿಯನ್ನು ಪರಿಶೀಲಿಸಿ ವರದಿ ಸಲ್ಲಿಸಬೇಕು. ರೈತರಿಗೆ ಪರಿಹಾರ ದೊರಕುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಯಬೇಕು ಎಂಬ ಉದ್ದೇಶದಿಂದ ರಾಜ್ಯಾದ್ಯಂತ ಅಧ್ಯಯನ ನಡೆಯುತ್ತಿದೆ. ಹಾಸನ ಜಿಲ್ಲೆಯಲ್ಲಿಯೂ ಸಮಗ್ರ ಪರಿಶೀಲನೆ ನಡೆಸಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು. ಅಗತ್ಯವಿದ್ದರೆ ಕೇಂದ್ರ ಸರ್ಕಾರಕ್ಕೂ ಮಾಹಿತಿ ರವಾನಿಸಲಾಗುತ್ತದೆ ಎಂದು ಹೇಳಿದರು.

ಸಚಿವ ಸಂಪುಟದಲ್ಲಿ ತಮಗೆ ಯಾವ ಖಾತೆ ಸಿಗಲಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ. ಯಾವುದೇ ನಿರೀಕ್ಷೆಯೂ ಇಲ್ಲ. ಖಾತೆ ಹಂಚಿಕೆ ಮಾಡುವುದು ಮುಖ್ಯಮಂತ್ರಿಗಳ ಪರಮಾಧಿಕಾರ. ಅವರು ಯಾವ ಖಾತೆ ನೀಡಿದರೂ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ಆನೆಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಅಗತ್ಯ :
ಹಾಸನ ಜಿಲ್ಲೆಯ ಪ್ರಮುಖ ಸಮಸ್ಯೆಯಾಗಿರುವ ಆನೆಮಾನವ ಸಂಘರ್ಷದ ಕುರಿತು ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಗಂಭೀರ ಸಮಸ್ಯೆಯಾಗಿದೆ. ಈ ಸಮಸ್ಯೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯದಿಂದ ಪರಿಣಾಮಕಾರಿ ಕ್ರಿಯಾ ಯೋಜನೆ ರೂಪಿಸಬೇಕು. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಒಟ್ಟಾಗಿ ಕೆಲಸ ಮಾಡಿದರೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯ. ಮುಂದಿನ ದಿನಗಳಲ್ಲಿ ಈ ವಿಷಯಕ್ಕೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಸಂಸದ ಶ್ರೇಯಸ್‌‍ ಎಂ.ಪಟೇಲ್‌, ಶಾಸಕ ಸಿ.ಎನ್‌. ಬಾಲಕೃಷ್ಣ, ಮಾಜಿ ಶಾಸಕರು, ಮಾಜಿ ವಿಧಾನ ಪರಿಷತ್‌ ಸದಸ್ಯರು, ಜಿಲ್ಲಾಧಿಕಾರಿ ಕೆ.ಎಸ್‌‍.ಲತಾ ಕುಮಾರಿ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಚಿವರೊಂದಿಗೆ ಇದ್ದರು.

RELATED ARTICLES
spot_img

Latest News