ಬೆಂಗಳೂರು,ಆ.6- ರಾಜ್ಯ ಸಚಿವ ಸಂಪುಟದ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿ ಮೂರು ದಿನಗಳು ಕಳೆದಿದ್ದರೂ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಳ್ಳದಿರುವುದನ್ನು ಪ್ರಶ್ನಿಸಿ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ತಮ ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಚಿವರಿಗೆ ಇನ್ನೂ ಖಾತೆಗಳನ್ನು ಹಂಚದಿರುವುದು ಸರ್ಕಾರದ ಆಡಳಿತಾತಕ ಗೊಂದಲವನ್ನು ಬಯಲಿಗೆಳೆಯುತ್ತಿದೆ ಎಂದು ಆರೋಪಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಉದ್ದೇಶಿಸಿ ಡಮ್ಮಿ ಸಿಎಂ ಎಂದು ಟೀಕಿಸಿದ ಅಶೋಕ್, ಸಚಿವರಿಗೆ ಖಾತೆ ಹಂಚಿಕೆ ಮಾಡಲು ದೆಹಲಿಯ ಕಾಂಗ್ರೆಸ್ ಹೈಕಮಾಂಡ್‌ನ ಅನುಮತಿಗಾಗಿ ಕಾಯಲಾಗುತ್ತಿದೆಯೇ ಅಥವಾ ಬೇರೆ ಕಾರಣಗಳಿಂದ ವಿಳಂಬವಾಗುತ್ತಿದೆಯೇ ಎಂಬ ಅನುಮಾನಗಳು ಮೂಡುತ್ತಿವೆ ಎಂದು ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಕರ್ನಾಟಕ ರಾಜ್ಯದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಬೆಂಗಳೂರಿನಲ್ಲಿ ಅಸಮಾಧಾನಗೊಂಡ ಶಾಸಕರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿರುವುದನ್ನು ಉಲ್ಲೇಖಿಸಿದ ಅವರು, ರಾಜ್ಯ ಸರ್ಕಾರದ ಆಡಳಿತ ದೆಹಲಿಯಿಂದಲೇ ನಿಯಂತ್ರಣಗೊಳ್ಳುತ್ತಿದೆ ಎಂಬ ಭಾವನೆ ಜನರಲ್ಲಿ ಮೂಡಿದೆ ಎಂದು ಆರೋಪಿಸಿದರು.
ಇನ್ನು ಮುಂದೆ ಪ್ರತಿಯೊಂದು ಕಡತಕ್ಕೂ ಸಹಿ ಹಾಕಲು ಸುರ್ಜೇವಾಲಾ ಅವರೇ ಬೆಂಗಳೂರಿಗೆ ಬರಬೇಕಾ? ಅಥವಾ ಎಲ್ಲಾ ಕಡತಗಳನ್ನು ದೆಹಲಿಗೆ ಕಳುಹಿಸಿ ಅನುಮೋದನೆ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ನೈಜವಾದ ಆಡಳಿತ ನಡೆಯುತ್ತಿದೆಯೇ ಅಥವಾ ದೆಹಲಿಯ ಹೈಕಮಾಂಡ್‌ನ ರಿಮೋಟ್ ಕಂಟ್ರೋಲ್ ಮೂಲಕ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆಯೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಕೇವಲ ರಬ್ಬರ್ ಸ್ಟ್ಯಾಂಪ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಹಾಗೂ ಕಾಂಗ್ರೆಸ್ ಶಾಸಕಾಂಗದಲ್ಲಿ ಉಂಟಾಗಿರುವ ಅಸಮಾಧಾನದ ಬೆಳವಣಿಗೆಗಳನ್ನು ಉಲ್ಲೇಖಿಸಿದ ಅವರು, ಹಿಂದೆ ಕೂಡ ಕಾಂಗ್ರೆಸ್ ಸರ್ಕಾರಗಳಲ್ಲಿ ಸಚಿವ ಸ್ಥಾನ ಮತ್ತು ಖಾತೆ ಹಂಚಿಕೆ ವಿಚಾರವಾಗಿ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗಳು ನಡೆದ ಉದಾಹರಣೆಗಳಿವೆ ಎಂದು ಹೇಳಿದರು.
ಈಗಲೂ ಅದೇ ಪರಿಸ್ಥಿತಿ ಮರುಕಳಿಸುತ್ತಿದ್ದು, ರಾಜ್ಯದ ಆಡಳಿತ ವ್ಯವಸ್ಥೆಯ ಮೇಲೆ ಅದರ ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿದ್ದಾರೆ. ಸರ್ಕಾರ ಆಡಳಿತದ ಮೇಲೆ ಗಮನಹರಿಸುವ ಬದಲು ಆಂತರಿಕ ಭಿನ್ನಾಭಿಪ್ರಾಯಗಳನ್ನು ಸರಿಪಡಿಸುವ ಪ್ರಯತ್ನದಲ್ಲೇ ನಿರತವಾಗಿದೆ ಎಂದು ಟೀಕಿಸಿದ ಅವರು, ಖಾತೆ ಹಂಚಿಕೆ ವಿಳಂಬದಿಂದ ಇಲಾಖೆಗಳ ಆಡಳಿತ ಕಾರ್ಯಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅಶೋಕ್ ಹೇಳಿದ್ದಾರೆ.
