ಬೆಂಗಳೂರು,ಆ.14- ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್ ಅವರು ನಾಳೆ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ವಿಜಯನಗರ ಜಿಲ್ಲೆಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದಾರೆ ಎನ್ನಲಾದ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಸ್ಥಳೀಯ ಸಂಸ್ಥೆಗಳ ಚುನಾವಣೆ, ಉಪಚುನಾವಣೆ ಹಾಗೂ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದಿಂದ ವಿನಾಯಿತಿ ನೀಡುವಂತೆ ಅವರು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವುದು ಸಚಿವರಂತಹ ಜವಾಬ್ದಾರಿಯುತ ಜನಪ್ರತಿನಿಧಿಯ ಕರ್ತವ್ಯವಾಗಿದ್ದು, ಅದಕ್ಕಿಂತ ಪಕ್ಷದ ರಾಜಕೀಯ ಚಟುವಟಿಕೆಗಳಿಗೆ ಆದ್ಯತೆ ನೀಡುವುದು ಸರಿಯಲ್ಲ ಎಂದು ಅವರು ಆಕ್ಷೇಪಿಸಿದ್ದಾರೆ.
ಜಮೀರ್ ಅವರ ಪತ್ರದ ವಿಚಾರವನ್ನು ಉಲ್ಲೇಖಿಸಿರುವ ಅಶೋಕ್, ಕಾಂಗ್ರೆಸ್ ಸರ್ಕಾರದ ಆದ್ಯತೆಗಳ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಧ್ವಜಾರೋಹಣ ಮಾಡಲು ಸಮಯವಿಲ್ಲ ಎನ್ನುವ ಸ್ಥಿತಿ ಬಂದಿರುವುದು ಸರ್ಕಾರದ ಮನಸ್ಥಿತಿಯನ್ನು ತೋರಿಸುತ್ತದೆ ಎಂಬ ಅರ್ಥದಲ್ಲಿ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸಚಿವರಿಗೆ ರಾಷ್ಟ್ರಧ್ವಜ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ದೇಶದ ಸ್ವಾತಂತ್ರ್ಯದ ಮಹತ್ವಕ್ಕಿಂತ ಚುನಾವಣಾ ಲೆಕ್ಕಾಚಾರವೇ ಮುಖ್ಯವಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.
ಅಶೋಕ್ ಅವರು ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕತ್ವವನ್ನೂ ಗುರಿಯಾಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ರಾಜಕೀಯ ಸಂಸ್ಕೃತಿಯಲ್ಲೇ ರಾಷ್ಟ್ರದ ವಿಚಾರಗಳಿಗಿಂತ ಅಧಿಕಾರ ಮತ್ತು ಚುನಾವಣಾ ರಾಜಕೀಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಮನಸ್ಥಿತಿ ಇದೆ ಎಂದು ಆರೋಪಿಸಿರುವ ಅವರು, ರಾಹುಲ್ ಗಾಂಧಿ ನೇತತ್ವದ ಕಾಂಗ್ರೆಸ್ ಈ ರೀತಿಯ ಧೋರಣೆಗೆ ಬೆಂಬಲ ನೀಡುತ್ತಿದೆ ಎಂದು ಟೀಕಿಸಿದ್ದಾರೆ. ಸ್ವಾತಂತ್ರ್ಯೋತ್ಸವಕ್ಕಿಂತ ಪಕ್ಷದ ಸಂಘಟನಾ ಚಟುವಟಿಕೆಗಳಿಗೆ ಆದ್ಯತೆ ನೀಡುವ ನಾಯಕರ ಬಗ್ಗೆ ಜನತೆ ಪ್ರಶ್ನಿಸಬೇಕಾದ ಸಮಯ ಬಂದಿದೆ ಎಂದು ಹೇಳಿದ್ದಾರೆ.
ಜಮೀರ್ ಅಹಮದ್ ಖಾನ್ ಮತ್ತು ರಾಷ್ಟ್ರಧ್ವಜಾರೋಹಣದ ವಿಚಾರ ಇದೇ ಮೊದಲ ಬಾರಿಗೆ ರಾಜಕೀಯ ಚರ್ಚೆಗೆ ಬಂದಿಲ್ಲ. 2022ರಲ್ಲಿ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯ ದಿನದಂದು ರಾಷ್ಟ್ರಧ್ವಜಾರೋಹಣ ನಡೆಸುವ ವಿಚಾರವಾಗಿ ತೀವ್ರ ವಿವಾದ ಉಂಟಾಗಿತ್ತು.
ಆ ಸಂದರ್ಭದಲ್ಲಿ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರು ನಾಳೆ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸುವುದಾಗಿ ಹೇಳಿದ್ದರು.ಆದರೆ ಮೈದಾನದ ಮಾಲೀಕತ್ವಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಸರ್ಕಾರ ಮಧ್ಯಪ್ರವೇಶಿಸಿತ್ತು. ಅಂದಿನ ಕಂದಾಯ ಸಚಿವರಾಗಿದ್ದ ಆರ್.ಅಶೋಕ್ ಅವರು ಕಂದಾಯ ಇಲಾಖೆಯ ಸಹಾಯಕ ಆಯುಕ್ತರ ಹ್ದುೆಯ ಅಧಿಕಾರಿಯೇ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಘೋಷಿಸಿದ್ದರು. ಅಂತಿಮವಾಗಿ 2022ರ ಆ.15ರಂದು ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡಿದ್ದರು.
ಈದ್ಗಾ ಮೈದಾನದ ವಿಚಾರದಲ್ಲಿ ಜಮೀರ್ ಅವರು ರಾಷ್ಟ್ರಧ್ವಜಾರೋಹಣದ ಪರವಾಗಿ ಬಹಿರಂಗವಾಗಿ ನಿಲುವು ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲೇ, ಇದೀಗ ವಿಜಯನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದಿಂದ ವಿನಾಯಿತಿ ಕೋರಿ ಪತ್ರ ಬರೆದಿದ್ದಾರೆ ಎನ್ನಲಾದ ವಿಚಾರವನ್ನು ಬಿಜೆಪಿ ರಾಜಕೀಯವಾಗಿ ಪ್ರಸ್ತಾಪಿಸುತ್ತಿದೆ.
ರಾಷ್ಟ್ರಧ್ವಜಾರೋಹಣವನ್ನು ಸಚಿವರೊಬ್ಬರು ಕೇವಲ ಅಧಿಕೃತ ಕಾರ್ಯಕ್ರಮವೆಂದು ಪರಿಗಣಿಸಬಾರದು. ಅದು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಸರಿಸುವ ಹಾಗೂ ಸಂವಿಧಾನ ಮತ್ತು ರಾಷ್ಟ್ರದ ಸಾರ್ವಭೌಮತ್ವಕ್ಕೆ ಗೌರವ ಸಲ್ಲಿಸುವ ಸಾಂದರ್ಭಿಕ ಕರ್ತವ್ಯವಾಗಿದೆ ಎಂದು ಅಶೋಕ್ ಪ್ರತಿಪಾದಿಸಿದ್ದಾರೆ.
ಹೀಗಾಗಿ, ಸಚಿವರು ತಮ ಪಕ್ಷದ ಚುನಾವಣಾ ಮತ್ತು ಸಂಘಟನಾ ಚಟುವಟಿಕೆಗಳಿಗೆ ಆದ್ಯತೆ ನೀಡಿ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಿಂದ ಹಿಂದೆ ಸರಿಯಲು ಮುಂದಾಗಿರುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ. ಜಮೀರ್ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒತ್ತಾಯಿಸಿರುವ ಅಶೋಕ್, ಈ ವಿಚಾರದಲ್ಲಿ ಕಾಂಗ್ರೆಸ್ ನಾಯಕತ್ವ ಜನತೆಯ ಮುಂದೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
