ಬೆಂಗಳೂರು, ಸೆ.4- ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಯಾರ ಮೇಲೂ ತಮಗೆ ಯಾವುದೇ ಅಸಮಾಧಾನವಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ.ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ನಿವಾಸಕ್ಕೆ ಭೇಟಿ ನೀಡಿದ ರಾಜಣ್ಣ ಅವರು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ತಿಂಗಳ 5ರಂದು ಜನಸ್ಪಂದನ ಇಲಾಖೆ ಉದ್ಘಾಟನೆಯಾಗಲಿದ್ದು, ಅದೇ ದಿನ ಶಿಕ್ಷಕರ ದಿನಾಚರಣೆಯೂ ನಡೆಯಲಿದೆ. ಕಾರ್ಯಕ್ರಮಗಳ ಸಿದ್ಧತೆ ಕುರಿತು ತಮ್ಮ ಜಿಲ್ಲೆ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು.
ತಮಗೆ ಯಾರ ಮೇಲೂ ಅಸಮಾಧಾನವಿಲ್ಲ. ಕಾಂಗ್ರೆಸ್ನಲ್ಲಿರುವವರೆಲ್ಲರೂ ಒಂದೇ. ಯಾರು ಯಾರ ಪರವಾಗಿದ್ದಾರೆ, ಯಾರು ಯಾರ ವಿರುದ್ಧವಾಗಿದ್ದಾರೆ ಎಂಬುದು ಅಪ್ರಸ್ತುತ. ಎಲ್ಲರೂ ಕಾಂಗ್ರೆಸ್ನಲ್ಲಿದ್ದು, ನಾವೆಲ್ಲರೂ ಒಂದೇ ಎಂದು ರಾಜಣ್ಣ ಹೇಳಿದರು.ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಇನ್ನೂ ಯಾವುದೇ ನೋಟಿಸ್ ಬಂದಿಲ್ಲ. ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ನೋಟಿಸ್ ಬಂದ ಬಳಿಕ ಈ ಬಗ್ಗೆ ಚರ್ಚೆ ನಡೆಸಬಹುದು ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಸಮಾಲೋಚನೆ
ರಾಜಣ್ಣ ಅವರು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತಿದ್ದ ಸಂದರ್ಭದಲ್ಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಮುಖ ನಾಯಕರೊಂದಿಗೆ ಸಮಾಲೋಚನೆ ನಡೆಸಿದರು. ಸಹಕಾರ ಸಚಿವ ಲಕ್ಷ್ಮಣ ಸವದಿ ಸೇರಿದಂತೆ ಹಲವು ನಾಯಕರೊಂದಿಗೆ ಅವರು ಚರ್ಚೆ ನಡೆಸಿದರು.ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಕೆ.ಎನ್.ರಾಜಣ್ಣ ಅವರು ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಪ್ತರಾಗಿರುವ ವಿಧಾನ ಪರಿಷತ್ ಸದಸ್ಯ ಎಸ್.ರವಿ ಅವರ ಹೆಸರೂ ಅಧ್ಯಕ್ಷ ಸ್ಥಾನಕ್ಕೆ ಕೇಳಿಬರುತ್ತಿದೆ.
ಇಂದು ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರವಾಗಿ ಸೆ.9ರಂದು ನಿರ್ದೇಶಕರೊಂದಿಗೆ ಚರ್ಚಿಸಿ, ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕಾಗಿ ರಾಜಣ್ಣ ಅವರು ಸದ್ಯ ಮೃದು ಧೋರಣೆ ಅನುಸರಿಸುತ್ತಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಯಾವುದೇ ಅಸಮಾಧಾನವಿಲ್ಲ ಎಂದು ಹೇಳಿಕೊಂಡಿದ್ದಾರೆ ಎನ್ನಲಾಗುತ್ತಿದೆ.ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಧ್ಯಸ್ಥಿಕೆ ವಹಿಸಿದ್ದು, ಈ ಸಂಬಂಧ ತೆರೆಮರೆಯ ಚರ್ಚೆಗಳು ಮುಂದುವರಿದಿವೆ.
