ಬೆಂಗಳೂರು, ನ.13- ರಾಜ್ಯದಲ್ಲಿ ನಡೆಯುತ್ತಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಹಿತೇಂದ್ರ ಅವರು ತಿಳಿಸಿದ್ದಾರೆ.
ಈ ಸಂಜೆಯೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ವಿವರಿಸಿದರು. ಸಣ್ನಪುಟ್ಟ ಘಟನೆಗಳನ್ನು ಹೊರತುಪಡಿಸಿದಂತೆ ಈತನಕ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಮತದಾನ ಬಹಳ ಶಾಂತಿಯುತವಾಗಿ ಬಿರುಸಿನಿಂದ ನಡೆಯುತ್ತಿದೆ ಎಂದು ಅವರು ಹೇಳಿದರು.
ಜಿಲ್ಲಾ ಎಸ್ಪಿಗಳು ವಿಧಾನಸಭಾ ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿದರೆ, ಕಿರಿಯ ಪೊಲೀಸ್ ಅಧಿಕಾರಿಗಳು ಗಸ್ತಿನಲ್ಲಿದ್ದಾರೆ. ಸ್ಥಳೀಯ ಪೊಲೀಸರ ಜತೆಗೆ 18 ಕಂಪೆನಿ ಕೇಂದ್ರ ಪಡೆಗಳನ್ನು ಬಂದೋಬಸ್ತ್ಗಾಗಿ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆ ನಡೆಯುತ್ತಿದೆ.