ಬೆಂಗಳೂರು, ಸೆ.16- ಹಿಂದುಳಿದ ವರ್ಗಗಳ ಆಯೋಗವು ಸೆ.22ರಿಂದ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆಧಾರ್ ಸಂಖ್ಯೆಗಳನ್ನು ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡಲು ಅಂಚೆ ಇಲಾಖೆಯಿಂದ ಅಧಿಕಾರಿ/ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಸಾರ್ವಜನಿಕರ ಅನುಕೂಲಕ್ಕಾಗಿ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆ ಲಿಂಕ್ ಮಾಡಲು ಆಯಾ ಜಿಲ್ಲೆ ಮತ್ತು ತಾಲ್ಲೂಕುವಾರು ಹಾಗೂ ಗ್ರಾಮವಾರು ಅಧಿಕಾರಿಗಳನ್ನು ನಿಯೋಜಿಸಿದೆ. ನಿಯೋಜನೆಗೊಂಡ ಗ್ರಾಮದ/ಪಟ್ಟಣದ ಅಂಚೆ ಕಚೇರಿಯ ಅಧಿಕಾರಿ/ ಸಿಬ್ಬಂದಿಯ ಹೆಸರು ಹಾಗೂ ದೂರವಾಣಿ ಸಂಖ್ಯೆಗಳನ್ನು ಹಿಂದುಳಿದ ವರ್ಗಗಳ ಆಯೋಗದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ.
ಅಗತ್ಯವಿರುವವರು ತಮ ಗ್ರಾಮದ ವ್ಯಾಪ್ತಿಯಲ್ಲಿ ನಿಯೋಜನೆಗೊಂಡ ಅಂಚೆ ಕಚೇರಿಯ ಅಧಿಕಾರಿ/ ಸಿಬ್ಬಂದಿಯನ್ನು ಸಂಪರ್ಕಿಸಿ, ಆಧಾರ್ ಮತ್ತು ಮೊಬೈಲ್ ಸಂಖ್ಯೆಗಳನ್ನು ಲಿಂಕ್ ಮಾಡಿಸಿಕೊಳ್ಳಬಹುದಾಗಿದೆ.
ಆರು ವರ್ಷ ಮೇಲ್ಪಟ್ಟವರಿಗೆ ಸಮೀಕ್ಷೆಯಲ್ಲಿ ಆಧಾರ್ ಸಂಖ್ಯೆ ದಾಖಲಿಸುವುದು ಕಡ್ಡಾಯ ಮಾಡಲಾಗಿದೆ. ಹೀಗಾಗಿ ಮೊಬೈಲ್ ಸಂಖ್ಯೆಯೊಂದಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡದವರ ಅನುಕೂಲಕ್ಕಾಗಿ ಆಯೋಗ ಈ ಕ್ರಮ ಕೈಗೊಂಡಿದೆ.ಸಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಹಿನ್ನೆಲೆಯಲ್ಲಿ ಈಗಾಗಲೇ ವಿದ್ಯುತ್ ಮೀಟರ್ ರೀಡರ್‌ಗಳ ಸೇವೆ ಬಳಸಿಕೊಂಡು ಮನೆ ಗಣತಿ ಮಾಡಲಾಗುತ್ತಿದೆ.