ಬೆಂಗಳೂರು,ಮಾ.21- ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಸ್ವಂತ ಮಗನ ಚುನಾವಣಾ ಸ್ಪರ್ಧೆ ಎಂದು ಭಾವಿಸಿ ಕೆಲಸ ಮಾಡುವ ಭರವಸೆಯನ್ನು ನೀಡಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು.ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ತಮ್ಮ ತಂದೆ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರೊಂದಿಗೆ ಯಡಿಯೂರಪ್ಪ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಆಶೀರ್ವಾದ ಪಡೆಯಲು ಬಂದಿದ್ದೆ.
ನಮ್ಮ ಚುನಾವಣೆ ಎಂದು ಭಾವಿಸಿ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಈಗಾಗಲೇ ನನ್ನನ್ನು ಹಾಸನ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ ಎಂದರು.ಹಾಸನ ಕ್ಷೇತ್ರದಲ್ಲಿ ಎರಡೆರಡು ಬಾರಿ ಚುನಾವಣಾ ಪ್ರಚಾರಕ್ಕೆ ಬರುವುದಾಗಿ ಹೇಳಿದ್ದಾರೆ. ಮಾಜಿ ಸಚಿವ ಪ್ರೀತಂ ಗೌಡ ಅವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿಲ್ಲ. ಅವರನ್ನು ಸಹ ಸಮಾಧಾನಪಡಿಸುವ ಕೆಲಸ ಮಾಡುತ್ತೇವೆ.
ದೇಶದಲ್ಲಿ ಎನ್ಡಿಎ ಮೈತ್ರಿಕೂಟ 400ಕ್ಕೂ ಅಕ ಸ್ಥಾನ ಗೆಲ್ಲಬೇಕೆಂಬುದು ನಮ್ಮ ಗುರಿಯಾಗಿದೆ. ಆ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕು ಎಂದು ನುಡಿದರು. ಮಾಜಿ ಸಚಿವ ಎಚ್.ಡಿ.ರೇವಣ್ಣ ಮಾತನಾಡಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಡಿ.ವೈ.ವಿಜಯೇಂದ್ರ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇವೆ. ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡುವುದು ನಮ್ಮ ಉದ್ದೇಶ.
ಯಡಿಯೂರಪ್ಪ ಅವರಿಗೆ ರಾಜ್ಯದಲ್ಲಿ ತಮ್ಮದೇ ಆದ ಶಕ್ತಿ ಇದೆ. ಅವರು ಪ್ರಜ್ವಲ್ ಅವರಿಗೆ ಆರ್ಶೀವಾದ ಮಾಡಿದ್ದಾರೆ. ಬಿಜೆಪಿ, ಜೆಡಿಎಸ್ ಮೈತ್ರಿಯಿಂದ ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದರು. ಪ್ರೀತಂಗೌಡ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯಿ ಸುವುದಿಲ್ಲ. ಆ ಸಮಸ್ಯೆಗೆ ಯಡಿಯೂರಪ್ಪ, ವಿಜಯೇಂದ್ರ ಪರಿಹಾರ ಕಂಡುಕೊಳ್ಳುತ್ತಾರೆ ಎಂದು ಹೇಳಿದರು. ರಾಜ್ಯದ ನೀರಾವರಿ ಯೋಜನೆಗಳಿಗೆ ದೇವೇಗೌಡರು, ಯಡಿಯೂರಪ್ಪ ನವರ ಕೊಡುಗೆ ಇದೆ. ಮೇಕೆದಾಟು ಯೋಜನೆಯನ್ನು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮಾಡಬಹುದಿತ್ತಲ್ಲವೇ ಎಂದು ಪ್ರಶ್ನಿಸಿದರು.
ಡಿಎಂಕೆ ಪ್ರಣಾಳಿಕೆ ಬಗ್ಗೆ ಕಾಂಗ್ರೆಸ್ನವರೇ ಹೇಳಬೇಕು. ದೇವೇಗೌಡರನ್ನು ಪ್ರಧಾನಿ ಮಾಡಿದ್ದೇವೆ ಎಂದು ಕಾಂಗ್ರೆಸ್ನವರು ಹೇಳುತ್ತಾರೆ. ಅದೇ ಕಾಂಗ್ರೆಸ್ನವರು ಯಾವುದೇ ಆಪಾದನೆ ಇಲ್ಲದಿದ್ದರೂ ಅವರನ್ನು ಯಾಕೆ ತೆಗೆದರು ಎಂದು ಪ್ರಶ್ನಿಸಿದರು. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಶಸ್ತ್ರ ಚಿಕಿತ್ಸೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ರೇವಣ್ಣ, ಅವರಿಗೆ ಶಿವನ ದಯೆ ಇದೆ. ಅವರ ಆರೋಗ್ಯ ಚೆನ್ನಾಗಿದೆ. ದೇವೇಗೌಡರ ಆಶೀರ್ವಾದ, ಜನರ ಆಶೀರ್ವಾದದಿಂದ ಆರೋಗ್ಯವಾಗಿದ್ದಾರೆ ಎಂದು ಹೇಳಿದರು.