ಪ್ರಯಾಗರಾಜ್,ಅ.16- ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿದ್ದ ಆರೋಪಿಯನ್ನು ವಶಕ್ಕೆ ಪಡೆಯಲು ಮುಂದಾದಾಗ ವ್ಯಕ್ತಿಯೊಬ್ಬನೊಂದಿಗೆ ಗುಂಡಿನ ಚಕಮಕಿ ನಡೆದಿದ್ದು, ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಸ್ಥಳೀಯ ನಿವಾಸಿ ಮುಖೇಶ್ ಎಂದು ಗುರುತಿಸಲಾಗಿದೆ.
ಅ.4 ರಂದು ಗದ್ದೆಯಲ್ಲಿ ಬಾಲಕಿಯ ಶವ ಬಿದ್ದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಪೊಲೀಸ್ ತಂಡವು ಸ್ಥಳ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿತ್ತು. ವರದಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿತ್ತು.
ಆರೋಪಿಗಳನ್ನು ಪತ್ತೆಹಚ್ಚಲು ಐದು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. 150 ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಸ್ಕ್ಯಾನ್ ಮಾಡಿ 65ಕ್ಕೂ ಹೆಚ್ಚು ಶಂಕಿತರನ್ನು ವಿಚಾರಣೆಗೊಳಪಡಿಸಲಾಗಿತ್ತು. ಸಿಸಿಟಿವಿ ದೃಶ್ಯಗಳಲ್ಲಿ ಸೈಕ್ಲಿಸ್ಟ್ ಬಾಲಕಿಯನ್ನು ಕರೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ ಎಂದು ಡಿಸಿಪಿ (ಗಂಗಾ ನಗರ) ಕುಲದೀಪ್ ಸಿಂಗ್ ಗುಣವತ್ ತಿಳಿಸಿದ್ದಾರೆ.
ಆರೋಪಿಯು ಅ.3ರಂದು ಬಾಲಕಿಗೆ ತನ್ನ ಸೈಕಲ್ನಲ್ಲಿ ಲಿಫ್ಟ್ ನೀಡಿದ್ದನು ಮತ್ತು ನಂತರ ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಂದಿದ್ದಾನೆ.ನಿನ್ನೆ ತಡರಾತ್ರಿ ಈ ವ್ಯಕ್ತಿ ಜುದಾಪುರ್ ದಾಡುವಿನ ಹೆದ್ದಾರಿಯ ಬಳಿ ಇದ್ದಾನೆ ಎಂಬ ಮಾಹಿತಿ ಸಿಕ್ಕಿತು. ಮಾಹಿತಿ ಮೇರೆಗೆ ಪೊಲೀಸ್ ತಂಡ ಅಲ್ಲಿಗೆ ತಲುಪಿ ಆತನನ್ನು ವಶಕ್ಕೆ ತೆಗೆದುಕೊಳ್ಳಲು ಮುಂದಾಯಿತು.
ಅಷ್ಟರಲ್ಲಿ ವ್ಯಕ್ತಿಯೊಬ್ಬ ಪಿಸ್ತೂಲಿನಿಂದ ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಅವರು ಹೇಳಿದ್ದಾರೆ. ಪ್ರತಿಕಾರದ ಗುಂಡಿನ ದಾಳಿಯಲ್ಲಿ, ಆರೋಪಿಯ ಕಾಲಿಗೆ ಗುಂಡು ಹಾರಿಸಲಾಯಿತು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿ ಹೇಳಿದರು ಮತ್ತು ವಿಚಾರಣೆಯ ಸಮಯದಲ್ಲಿ ಆರೋಪಿಯು ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಹೇಳಿದ್ದಾರೆ.