ಬೆಂಗಳೂರು,ಅ.27- ಮಹಾತಗಾಂಧೀಜಿಯವರು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿ ಶತಮಾನೋತ್ಸವ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅದ್ಧೂರಿ ಕಾರ್ಯ ಕ್ರಮವನ್ನು ಆಯೋಜಿಸಲು ಕಾಂಗ್ರೆಸ್ ತಯಾರಿ ನಡೆಸಿದ್ದು, ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಪಕ್ಷದ ಎಲ್ಲಾ ಶಾಸಕರು, ಸಂಸದರು, ಸಚಿವರೊಂದಿಗೆ ಮಹತ್ವದ ಸಮಾಲೋಚನೆ ನಡೆಸಿದರು.
ಭಾನುವಾರ ರಜಾ ದಿನವೂ ಕೂಡ ಇಂದು ಬಿಡುವಿಲ್ಲದಂತೆ ಚಟುವಟಿಕೆಯಲ್ಲಿ ತೊಡಗಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಗೃಹಕಚೇರಿ ಕೃಷ್ಣಾದಿಂದಲೇ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ್ದಾರೆ.ಬಿಜೆಪಿ ಮಹಾತ ಗಾಂಧೀಜಿಯವರ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸುತ್ತಿದೆ. ಗಾಂಧೀಜಿ ಹಾಗೂ ಕಾಂಗ್ರೆಸ್ನ ಸೈದ್ಧಾಂತಿಕ ನಿಲುವುಗಳಿಗೆ ವಿರುದ್ಧವಾಗಿ ಅಪಪ್ರಚಾರ ನಡೆಸುತ್ತಿದೆ.
ಸಂವಿಧಾನೇತರ ಶಕ್ತಿಗಳ ಆರ್ಭಟ ಮತ್ತು ಹಸ್ತಕ್ಷೇಪ ಎಲ್ಲಾ ಹಂತದಲ್ಲೂ ಕಂಡುಬರುತ್ತಿದೆ. ಇದಕ್ಕೆ ಪ್ರತ್ಯುತ್ತರ ನೀಡುವ ಮೂಲಕ ಕಾಂಗ್ರೆಸ್ ತನ್ನ ಸೈದ್ಧಾಂತಿಕ ಬದ್ಧತೆಯನ್ನು ಮರು ಸ್ಥಾಪಿಸಲು ಬೆಳಗಾವಿ ಅಧಿವೇಶನದ ಶತಮಾನೋತ್ಸವ ವೇದಿಕೆಯಾಗಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ನಡೆಯುವ ಪಥಸಂಚಲನ ಹಾಗೂ ವೇದಿಕೆ ಕಾರ್ಯಕ್ರಮಗಳಲ್ಲಿ ಪ್ರತಿಯೊಬ್ಬ ಶಾಸಕರು, ಸಂಸದರು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಕಾರ್ಯಕ್ರಮಕ್ಕೆ ಬೆನ್ನೆಲುಬಾಗಿ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರು ಪಕ್ಷದ ಪ್ರತಿಯೊಬ್ಬ ಮುಖಂಡರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯಕ್ರಮ ಆಯೋಜನೆ ಮಾಡಬೇಕು. ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಬದಿಗೊತ್ತಿ ಪಕ್ಷದ ಕಚೇರಿಯಲ್ಲೇ ಸಭೆಗಳನ್ನು ನಡೆಸಬೇಕು. ಪಕ್ಷಕ್ಕೆ ಹೊಸದಾಗಿ ಸೇರ್ಪಡೆಯಾಗಿರುವವರ ನಡುವೆ ಬೇದಭಾವ ಭಿನ್ನತೆ ಮಾಡದೇ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವಂತೆ ಸಲಹೆ ನೀಡಿದರು. ಇದೇ ವೇಳೆ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಕುರಿತು ಚರ್ಚೆ ನಡೆಸಲಾಯಿತು.