Thursday, December 12, 2024
Homeರಾಜ್ಯಚನ್ನಪಟ್ಟಣ ಉಪ ಚುನಾವಣೆಯ ಮತ ಎಣಿಕೆಗೆ ಸಿದ್ಧತೆ, ಬಿಗಿ ಭದ್ರತೆ

ಚನ್ನಪಟ್ಟಣ ಉಪ ಚುನಾವಣೆಯ ಮತ ಎಣಿಕೆಗೆ ಸಿದ್ಧತೆ, ಬಿಗಿ ಭದ್ರತೆ

Preparations for Channapatna by-election vote counting, tight security

ರಾಮನಗರ, ನ. 22 – ತೀವ್ರ ಕುತೂಹಲ ಕೆರಳಿಸಿರುವ ಹಾಗೂ ರಾಷ್ಟ್ರದ ಗಮನ ಸೆಳೆದಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆ ರಾಮನಗರ ತಾಲ್ಲೂಕಿನ ಅರ್ಚಕರಹಳ್ಳಿಯಲ್ಲಿರುವ ಸರ್ಕಾರಿ ಇಂಜಿನಿಯರಿಗ್ ಕಾಲೇಜಿನಲ್ಲಿ ನಡೆಯಲಿದ್ದು, ಇದಕ್ಕಾಗಿ ಜಿಲ್ಲಾಡಳಿತ ಎಲ್ಲಾ ರೀತಿಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ತಿಳಿಸಿದ್ದಾರೆ.

ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳ ಸಮಕ್ಷಮದಲ್ಲಿ ನಾಳೆ ಬೆಳಿಗ್ಗೆ 6.45ಗಂಟೆಗೆ ಮತಯಂತ್ರಗಳನ್ನಿಟ್ಟಿರುವ ಸ್ಟ್ರಾಂಗ್ ರೂಂ ಅನ್ನು ತೆರೆಯಲಾಗುವುದು. ಬೆಳಿಗ್ಗೆ 7.30ಕ್ಕೆ ಅಂಚೆ ಮತಗಳ ಎಣಿಕೆ ಕಾರ್ಯ ಪ್ರಾರಂಭಿಸಲಾಗುವುದು. ಬೆಳಿಗ್ಗೆ 8 ಗಂಟೆಗೆ ಇವಿಎಂ ಯಂತ್ರಗಳ ಮತ ಎಣಿಕೆ ಆರಂಭವಾಗಲಿದೆ. ಒಟ್ಟಾರೆ 20 ಸುತ್ತುಗಳಲ್ಲಿ ಮತ ಎಣಿಕಾ ಕಾರ್ಯ ನಡೆಯಲಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ರಾಮನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ 3 ಕೊಠಡಿಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಒಂದು ಕೊಠಡಿಯಲ್ಲಿ ಅಂಚೆ ಮತಗಳ ಎಣಿಕೆ ನಡೆಯಲಿದೆ. ಇನ್ನೆರಡು ಕೊಠಡಿಗಳಲ್ಲಿ ಇವಿಎಂ ಮತ ಯಂತ್ರಗಳ ಮತ ಎಣಿಕೆ ನಡೆಯಲಿದೆ,ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,06,886 (ಶೇ.88.81) ಮತಗಳು ಚಲಾವಣೆಗೊಂಡಿವೆ ಎಂದು ಅವರು ಹೇಳಿದ್ದಾರೆ.

14 ಟೇಬಲ್ಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಪ್ರತಿಯೊಂದು ಟೇಬಲ್ಗಳಿಗೂ ಎರಡು ರಾಜಕೀಯ ಪಕ್ಷದ ಏಜೆಂಟರುಗಳಿಗೆ ಪಾಸ್ ನೀಡಲಾಗಿದೆ. ಪಕ್ಷೇತರ ಅಭ್ಯರ್ಥಿಗಳ ಏಜೆಂಟರುಗಳಿಗೂ ಸಹ ಪಾಸ್ಗಳನ್ನು ನೀಡಲಾಗಿದೆ. ಟೇಬಲ್ವಾರು ರಾಂಡಮ್ ಆಗಿ 27 ಜನರಿಗೆ ಪಾಸ್ಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಮತ ಎಣಿಕೆಗೆ ಒಟ್ಟು 69 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 250 ಜನ ಏಜೆಂಟರುಗಳು ಇರುತ್ತಾರೆ. ಬಿಗಿಯಾದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ, ನಾಳೆ ಜಿಲ್ಲೆಯಾದ್ಯಂತ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 163ರ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಜೆಡಿಎಸ್ನಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್ನಿಂದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸೇರಿದಂತೆ ಚನ್ನಪಟ್ಟಣ ಕ್ಷೇತ್ರದಲ್ಲಿ ಒಟ್ಟು 31 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಮತದಾರರು ನಿರ್ಧರಿಸಿರುವ ಅಭ್ಯರ್ಥಿಗಳ ಭವಿಷ್ಯ ನಾಳೆ ಮಧ್ಯಾಹ್ನದ ವೇಳೆಗೆ ಬಹಿರಂಗಗೊಳ್ಳಲಿದೆ.

RELATED ARTICLES

Latest News