Sunday, May 18, 2025
Homeರಾಷ್ಟ್ರೀಯ | Nationalಹೊಸಪೇಟೆಯಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಭರ್ಜರಿ ಸಿದ್ಧತೆ

ಹೊಸಪೇಟೆಯಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಭರ್ಜರಿ ಸಿದ್ಧತೆ

Preparations underway for Congress government's Sadhana conference in Hospet

ಬೆಂಗಳೂರು, ಮೇ.18- ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ ತುಂಬಿದ ಸಂದರ್ಭದಲ್ಲಿ ಸಮರ್ಪಣೆ ಸಂಕಲ್ಪ ಸಮಾವೇಶದ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನಕ್ಕೆ ಗಣಿನಾಡು ಹೊಸಪೇಟೆಯಲ್ಲಿ ವೇದಿಕೆ ಸಜ್ಜುಗೊಳ್ಳುತ್ತಿದೆ.

ಮೇ 22 ರಂದು ನಡೆಯುವ ಬೃಹತ್ ಸಮಾವೇಶದಲ್ಲಿ 5 ಲಕ್ಷ ಜನ ಸಮಾವೇಶಗೊಳ್ಳುವ ನಿರೀಕ್ಷೆಯಿದ್ದು, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್‌ ಗಾಂಧಿ, ಎಐಸಿಸಿಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಂದಾಯ ಇಲಾಖೆಯಿಂದ ಒಂದು ಲಕ್ಷ ಜನರಿಗೆ ಹಕ್ಕುಪತ್ರ ಹಾಗೂ ಭೂದಾಖಲೆಗಳನ್ನು ನೀಡುವ ಸಲುವಾಗಿಯೂ ಆಯೋಜಿಸಲಾಗಿರುವ ಈ ಬೃಹತ್ ಕಾರ್ಯಕ್ರಮ ಹಂತಹಂತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನದ ವೇದಿಕೆಯಾಗಿ ಪರಿವರ್ತನೆಗೊಳ್ಳುತ್ತಿದೆ. ಈ ಮೊದಲು ಪಾಕಿಸ್ತಾನ ಹಾಗೂ ಭಾರತದ ನಡುವೆ ಸಂಘರ್ಷ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಆದರೆ ಕದನ ವಿರಾಮದ ಬೆನ್ನಲ್ಲೇ ಮತ್ತೆ ನಿಗದಿಯಾಗಿದೆ.

ಸರ್ಕಾರಿ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಊಟ, ಸಾರಿಗೆ ವ್ಯವಸ್ಥೆ ಸೇರಿದಂತೆ ಇತರ ತಯಾರಿಗಳು ನಡೆದಿವೆ. ಈ ನಡುವೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ
ಸಿದ್ದರಾಮಯ್ಯನವರ ವೈಭವೀಕರಣಕ್ಕೆ ಬಳಕೆ ಮಾಡಲಾಗುತ್ತಿದೆ. ಸಿದ್ದರಾಮಯ್ಯನವರ ಬೆಂಬಲಿಗ ಸಚಿವರು ಮತ್ತು ಶಾಸಕರು ಇದನ್ನು ಎರಡನೇ ಸಿದ್ದರಾಮೋತ್ಸವ ಎಂದು ಬಿಂಬಿಸುತ್ತಿದ್ದಾರೆ.

ಈ ಮೊದಲು ದಾವಣಗೆರೆಯಲ್ಲಿ ವಿಧಾನಸಭೆ ಚುನಾವಣೆಗೂ ಮೊದಲು ಸಿದ್ದರಾಮೋತ್ಸವ ನಡೆದಿತ್ತು. ಅನಂತರ ಚುನಾವಣೆ ನಡೆದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯ ಮುಖ್ಯಮಂತ್ರಿಯೂ ಆದರು. ಹಲವು ಅಡೆತಡೆಗಳ ನಡುವೆಯೂ ಸಿದ್ದರಾಮಯ್ಯ ಎರಡು ವರ್ಷಗಳ ಅಧಿಕಾರಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಎರಡೂವರೆ ವರ್ಷಗಳ ಬಳಿಕ ಅಧಿಕಾರ ಹಂಚಿಕೆ ಸೂತ್ರ ಜಾರಿಯಾಗಲಿದೆ. ನಾಯಕರ ಬದಲಾವಣೆಯಾಗಲಿದೆ ಎಂಬೆಲ್ಲಾ ಚರ್ಚೆಗಳಿವೆ. ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಬೀಡುಬಿಟ್ಟಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ದಿನಗಳಲ್ಲಿ ಪ್ರಮುಖ ಹುದ್ದೆ ಅಲಂಕರಿಸುವ ಸಾಧ್ಯತೆಯಿದೆಯೇ ಎಂಬ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ್ದರು. ಅವರ ಪ್ರತಿಕ್ರಿಯೆ ನಾನಾ ರೀತಿಯ ಅರ್ಥಗಳನ್ನು ನೀಡುವಂತಿತ್ತು. ಅಡ್ಡಗೋಡೆ ಮೇಲೆ ದೀಪವಿಟ್ಟ ಡಿ.ಕೆ.ಶಿವಕುಮಾರ್‌ರವರ ಪ್ರತಿಕ್ರಿಯೆ ಒಳಗೊಳಗೇ ಚರ್ಚೆಗೆ ಗ್ರಾಸವಾಗಿತ್ತು.

ಡಿ.ಕೆ.ಶಿವಕುಮಾರ್ ಬೆಂಬಲಿಗರು ಈಗಲೂ ಎರಡೂವರೆ ವರ್ಷದ ಬಳಿಕ ಅಧಿಕಾರ ಬದಲಾವಣೆಯಾಗಲಿದೆ ಎಂಬ ಮಾತುಗಳನ್ನಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜುಗೊಂಡಿದೆ. ಕಾರ್ಯಕ್ರಮದಲ್ಲಿ ಹೈಕಮಾಂಡ್‌ನ ನಾಯಕರು ಭಾಗವಹಿಸಲಿದ್ದಾರೆ.

ಅಲ್ಲಿ ಸಿದ್ದರಾಮಯ್ಯನವರ ಬೆಂಬಲಿಗರ ಘೋಷಣೆ, ವೈಭವೀಕರಣದ ಪ್ರತಿಕ್ರಿಯೆಗಳು ಜೋರಾಗಿರಲಿವೆ. ಹೀಗಾಗಿ ಮತ್ತೊಮ್ಮೆ ಸಿದ್ದರಾಮಯ್ಯನವರೇ ಕರ್ನಾಟಕದ ಮೇರುನಾಯಕ ಎಂಬ ಸಂದೇಶ ರವಾನಿಸುವ ಪ್ರಯತ್ನಗಳಾಗುತ್ತಿವೆ. ಇದಕ್ಕೆ ಡಿ.ಕೆ.ಶಿವಕುಮಾರ್‌ರವರ ಬಣದಿಂದ ನಾನಾ ರೀತಿಯ ವ್ಯಾಖ್ಯಾನಗಳು ಕೂಡ ಕೇಳಿಬರುತ್ತಿವೆ.

RELATED ARTICLES

Latest News