ವಾರಣಾಸಿ,ಏ.11- ಸ್ವಕ್ಷೇತ್ರ ವಾರಾಣಸಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣದಲ್ಲೇ, ಅತ್ಯಾಚಾರ ಘಟನೆಯ ಕುರಿತು ಪೊಲೀಸ್ ಆಯುಕ್ತರು, ವಿಭಾಗೀಯ ಆಯುಕ್ತರು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಂದ ಸಮಗ್ರ ಮಾಹಿತಿ ಪಡೆದುಕೊಂಡು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಇಂದು 50ನೇ ಬಾರಿಗೆ ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಗೆ ಆಗಮಿಸಿದ ಪ್ರಧಾನಿ ಮೋದಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೂಡಲೇ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಈ ವೇಳೆ 19 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು. ಆರೋಪಿಗಳ ವಿರುದ್ಧ ಸಾಧ್ಯವಾದಷ್ಟು ಕಠಿಣ ಕ್ರಮ ಕೈಗೊಳ್ಳಲು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮಗಳನ್ನು ಜಾರಿಗೆ ತರುವಂತೆ ಪ್ರಧಾನಿ ಮೋದಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಘಟನೆಯಲ್ಲಿ 23 ಆರೋಪಿಗಳು ಭಾಗಿಯಾಗಿದ್ದು, ಈ ಪೈಕಿ ಒಂಬತ್ತು ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪ್ರಧಾನಿಗೆ ಅಧಿಕಾರಿಗಳು ತಿಳಿಸಿದರು.