Monday, June 24, 2024
Homeರಾಜ್ಯಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ಹಿಂಪಡೆಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ಹಿಂಪಡೆಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

ಬೆಂಗಳೂರು, ಜೂ, 16: ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳನ್ನು ಅವೈಜ್ಞಾನಿಕವಾಗಿ ಏರಿಕೆ ಮಾಡಿರುವುದನ್ನು ಇಂಡಿಯನ್‌ ವೆಹಿಕಲ್‌ ಡ್ರೈವರ್‌ ಅಸೋಸಿಯೇಷನ್‌ ಖಂಡಿಸಿದ್ದು, ಕೂಡಲೇ ದರ ಏರಿಕೆ ಕೈಬಿಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದೆ.

ಈ ಕುರಿತು ಹಣಕಾಸು ಇಲಾಖೆ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದ್ದು, ತಕ್ಷಣವೇ ದರ ಇಳಿಕೆ ಮಾಡಬೇಕು ಎಂದು ಅಸೋಸಿಯೇಷನ್‌ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ತಿಳಿಸಿದ್ದಾರೆ.

ಕ್ಯಾಬ್‌‍, ಟ್ಯಾಕ್ಸಿ ಕಾರುಗಳು, ಸರಕು ಸಾಗಾಣೆ ಹಾಗೂ ಖಾಸಗಿ ಬಸ್‌‍, ಹಾಲಿನ ವಾಹನಗಳು, ಜೆಸಿಬಿ, ಟ್ಯಾಂಕರ್‌ ಗಳು ಒಳಗೊಂಡಂತೆ 83ಲಕ್ಷಕ್ಕೂ ಅಧಿಕ ಹಳದಿ ಬೋರ್ಡ್‌ ವಾಹನಗಳು ರಾಜ್ಯದಲ್ಲಿ ಸಂಚರಿಸುತ್ತವೆ. ದರ ಏರಿಕೆಯಿಂದ ಎಲ್ಲಾ ವಸ್ತುಗಳ ಬೆಲೆ ಹೆಚ್ಚಳಕ್ಕೆ ದಾರಿಯಾಗುತ್ತದೆ. ವಾಣಿಜ್ಯ ವಾಹನಗಳ ಮಾಲೀಕರು ಮತ್ತು ಚಾಲಕರಿಗೆ ದರ ಏರಿಕೆ ಬರೆ ಎಳೆದಂತಾಗಿದೆ ಎಂದು ಅವರು ತಿಳಿಸಿದ್ದಾರೆ.

ಗ್ಯಾರೆಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಾಗಾಣೆ ವಲಯದ ಮೇಲೆ ಹೊರೆ ಹೇರಿರುವುದು ಅತ್ಯಂತ ಅಮಾನವೀಯ. ಬೆಲೆ ಏರಿಕೆಯಿಂದ ಬಸವಳಿದಿರುವ ಜನ ಸಾಮಾನ್ಯರ ಬದುಕಿಗೆ ಸರ್ಕಾರ ಕೊಳ್ಳಿ ಇಟ್ಟಿದೆ. ಯಾವುದೇ ಸುಳಿವು ನೀಡದೇ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಹೆಚ್ಚಿಸಿರುವುದು ಅತ್ಯಂತ ಖಂಡನೀಯ ಎಂದು ಗಂಡಸಿ ಸದಾನಂದ ಸ್ವಾಮಿ ತಿಳಿಸಿದ್ದಾರೆ.

ಈ ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

RELATED ARTICLES

Latest News