ರಸ್ತೆಯಲ್ಲಿ ಸಿಎಂ,ಮೇಯರ್ ಫೋಟೋ ಇಟ್ಟು ‘ಗುಂಡಿ’ ಪೂಜೆ..!

ಬೆಂಗಳೂರು, ಅ.24- ಬೆಂಗಳೂರು ರಸ್ತೆ ಗುಂಡಿಗಳಿಂದ ಜನ ರೋಷಿ ಹೋಗಿದ್ದಾರೆ. ಸಾರ್ವಜನಿಕರ ಪ್ರಾಣಕ್ಕೆ ಎರವಾಗುತ್ತಿರುವ ರಸ್ತೆ ಗುಂಡಿಗಳನ್ನು ಸರಿಪಡಿಸಿದ ಬಿಬಿಎಂಪಿ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಮೇಯರ್ ಗೌತಮ್ ಕುಮಾರ್ ಜೈನ್ ಮತ್ತು ಆಯುಕ್ತರಾದ ಅನಿಲ್‍ಕುಮಾರ್ ವಿರುದ್ಧ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ ರಸ್ತೆ ಗುಂಡಿಗಳನ್ನು ಮುಚ್ಚಿ ಎಂದು ಇಂದು ಆಗ್ರಹಿಸಿದರು. ರಸ್ತೆ ಗುಂಡಿಗಳಿಂದ ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ. ಪ್ರಾಣಕ್ಕೆ ಸಂಚಕಾರ ಉಂಟಾಗುತ್ತಿದೆ.

ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ಚಿ ಸರಿಪಡಿಸಿ ಎಂದು ವಿನೂತನವಾಗಿ ಪ್ರತಿಭಟನೆ ನಡೆಸಿದರು. ನಾಯಂಡಹಳ್ಳಿ ಜಂಕ್ಷನ್ ಬಳಿ ಕನ್ನಡ ಪರ ಸಂಘಟನೆಗಳು ರಸ್ತೆ ಗುಂಡಿಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮೇಯರ್ ಗೌತಮ್‍ಕುಮಾರ್, ಆಯುಕ್ತ ಅನಿಲ್‍ಕುಮಾರ್ ಪೋಟೋಗಳನ್ನು ಇಟ್ಟು ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರತಿಭಟನೆ ನಡೆಸಿ, ಸರ್ಕಾರ ಹಾಗೂ ಬಿಬಿಎಂಪಿ ವಿರುದ್ಧ ಘೋಷಣೆ ಕೂಗಿದರು.

ಕೂಡಲೇ ಬಿಬಿಎಂಪಿ ರಸ್ತೆ ಗುಂಡಿಗಳನ್ನು ಮುಚ್ಚದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಹಲವಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಮತ್ತೆ ಇಂತಹ ಘಟನೆಗಳು ನಡೆಯಬಾರದು. ಬಿಬಿಎಂಪಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕೆಂದು ಅವರು ಹೇಳಿದ್ದಾರೆ.

ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಕೂಡ ಕೆಟ್ಟು ಹೋದ ರಸ್ತೆಗಳ ಡಾಂಬರಿಕರಣ ಸಂಬಂಧ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದನ್ನು ಇಲ್ಲಿ ಸ್ಮರಿಸಬಹುದು.ಉದ್ಯೋಗಿಗಳು, ವಿದ್ಯಾರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಓಡಾಡುವ ಬಿಟಿಎಂ ಲೇಔಟ್,ಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಯದೇವ ವೃತ್ತ, ಆರ್‍ವಿ ಜಂಕ್ಷನ್ ಮುಂತಾದ ಕಡೆ ರಸ್ತೆಗಳು ಹಾಳಾಗಿದ್ದು, ಶೀಘ್ರ ದುರಸ್ತಿ ಮಾಡಿಸಬೇಕೆಂದು ರಾಮಲಿಂಗಾರೆಡ್ಡಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದರು.