ಪಿಯುಸಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಿಲ್ಲ

Social Share

ಬೆಂಗಳೂರು, ಜ.27- ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ನಿಗದಿಗೊಳಿಸಿ ಕಡ್ಡಾಯಗೊಳಿಸಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಉಡುಪಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ನಿಗದಿಗೊಳಿಸಿರುವ ಸಮವಸ್ತ್ರ ಅಥವಾ ವಸ್ತ್ರ ಸಂಹಿತೆ ಮಿತಿ ವಿಷಯದಲ್ಲಿ ಯಥಾಸ್ಥಿತಿಯನ್ನು ಮುಂದುವರೆಸಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರು ಈ ಸಂಬಂಧ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಲಾಗಿದೆ. ಆಯ್ಕೆಯ ವಸ್ತ್ರವನ್ನು ಧರಿಸಿ ಬರಲು ಅನುಮತಿ ನೀಡುವಂತೆ ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಲಾಗಿದೆ. ಉಡುಪಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ನಿಯರು ಕಾಲೇಜಿಗೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ನಿಗದಿ ಮಾಡಿದ ಸಮವಸ್ತ್ರದ ಬಗ್ಗೆ ಮಾಹಿತಿ ಇದ್ದು, ಅದನ್ನು ಸ್ವ ಇಚ್ಛೆಯಿಂದ ಒಪ್ಪಿ ದಾಖಲಾಗಿರುತ್ತಾರೆ. ಇಷ್ಟು ದಿನ ಇಲ್ಲದ ಗೊಂದಲವನ್ನು ಈಗ ಹೊಸದಾಗಿ ಸೃಷ್ಟಿಸುತ್ತಿರುವುದು ಶೈಕ್ಷಣಿಕ ಹಿತದೃಷ್ಟಿಯಿಂದ ಒಳಿತಲ್ಲ ಎಂದು ತಿಳಿಸಲಾಗಿದೆ.
ಪದವಿ ಪೂರ್ವ ತರಗತಿಗಳ ವಿದ್ಯಾರ್ಥಿಗಳಿಗೆ ಸಮವಸ್ತ್ರ ಜಾರಿ ಮಾಡುವ ಸಂಬಂಧ ಸುಪ್ರೀಂಕೋರ್ಟ್ ಹಾಗೂ ವಿವಿಧ ರಾಜ್ಯಗಳ ಹೈಕೋರ್ಟ್ ನೀಡಿರುವ ತೀರ್ಪುಗಳನ್ನು ಅವಲೋಕಿಸಿ ರಾಜ್ಯದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ ನಿಗದಿಗೊಳಿಸುವ ಕುರಿತಂತೆ ಚಿಂತನ-ಮಂಥನ ನಡೆಸಲು ಒಂದು ಉನ್ನತ ಮಟ್ಟದ ಸಮಿತಿ ರಚಿಸುವ ಅಗತ್ಯವಿದೆ.
ಸಮಿತಿ ಅಧ್ಯಯನ ನಡೆಸಿ ಸಲ್ಲಿಸಲಾಗುವ ಶಿಫಾರಸುಗಳನ್ನು ಪರಿಶೀಲಿಸಿದ ನಂತರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಈ ಪ್ರಕ್ರಿಯೆ ಮುಗಿಯುವವರೆಗೂ ಉಡುಪಿ ಪದವಿ ಪೂರ್ವ ಕಾಲೇಜಿನಲ್ಲಿ ಯಥಾಸ್ಥಿತಿ ಮುಂದುವರಿಸಲು ಪತ್ರದಲ್ಲಿ ಸೂಚಿಸಲಾಗಿದೆ.

Articles You Might Like

Share This Article