ಬೆಂಗಳೂರು, ಮಾ.2- ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ರಾಜ್ಯಾದ್ಯಂತ ನಾಳೆಯಿಂದ ಮಾರ್ಚ್ 6ರವರೆಗೆ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೋ ಹನಿ ಹಾಕುವ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆ ಹಮ್ಮಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಾಲ್, ಟೂಲ್ ಪ್ರದೇಶ ಹಾಗೂ ಇತರ ಪ್ರಮುಖ ಸ್ಥಳಗಳಲ್ಲಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ.
ರಾಜ್ಯ ಮಟ್ಟದಲ್ಲಿ ಮುಖ್ಯಮಂತ್ರಿಯವರು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆಯನ್ನು ನೀಡುವ ಮೂಲಕ ಚಾಲನೆ ನೀಡಲಿದ್ದಾರೆ. ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅಂಗವಾಗಿ ಮೊದಲ ದಿನ ಲಸಿಕಾ ಕೇಂದ್ರಗಳಲ್ಲಿ ಹಾಗೂ ಉಳಿದ ಮೂರು ದಿನ ಮನೆಗಳಿಗೆ ಭೇಟಿ ನೀಡಿ ಲಸಿಕೆಯನ್ನು ನೀಡಲಾಗುವುದು.
ಲಸಿಕಾ ಕಾರ್ಯದಲ್ಲಿ ತೊಡಗುವ ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವ ಗೌರವ ಧನ ಸೂಕ್ತ ಸಮಯದಲ್ಲಿ ಸಿಗುವಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಡಾ. ಶಾಲಿನಿ ರಜನೀಶ್ ಸೂಚಿಸಿದ್ದರು.
ಕಳೆದ ಬಾರಿ ಕಡಿಮೆ ಪ್ರಗತಿ ಹೊಂದಿರುವ ದುರ್ಬಲ ಪ್ರದೇಶಗಳ ಮೇಲೆ ಹೆಚ್ಚಿನ ನಿಗಾ ವಹಿಸುವ ಮೂಲಕ ಈ ಬಾರಿ ಐದು ವರ್ಷದೊಳಗಿನ ಯಾವುದೇ ಮಗು ಪಲ್ಸ್ ಪೋಲಿಯೋ ಲಸಿಕೆಯಿಂದ ವಂಚಿತವಾಗದಂತೆ ಕ್ರಮವಹಿಸಲು ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಅನುಷ್ಠಾನ ಕುರಿತು ನಡೆದ ರಾಜ್ಯ ಮಟ್ಟದ ಚಾಲನಾ ಸಮಿತಿ ಸಭೆಯಲ್ಲಿ ನಿರ್ದೇಶನ ನೀಡಿದ್ದರು.
ಕಳೆದ ಬಾರಿ ಯಾವ ಪ್ರದೇಶದಲ್ಲಿ ಯಾವ ಕಾರಣಕ್ಕೆ ಪಲ್ಸ್ ಪೋಲಿಯೋ ಲಸಿಕೆಯ ಅನುಷ್ಠಾನದಲ್ಲಿ ಕಡಿಮೆ ಪ್ರಗತಿ ಹೊಂದಲಾಗಿದೆಯೋ, ಅಂತಹ ಪ್ರದೇಶಗಳನ್ನು ಗುರುತಿಸಿ, ಕಾರಣ ಪತ್ತೆ ಹಚ್ಚಿ ಸೂಕ್ತ ಮೂಲಸೌಕರ್ಯ ಒದಗಿಸುವ ಜೊತೆಗೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲು ಅಕಾರಿಗಳು ಕ್ರಮವಹಿಸಬೇಕು. ಆರೋಗ್ಯ ಇಲಾಖೆಯ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಂಬಂಧಿಸಿದ ಸರ್ಕಾರದ ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಗೂ ಆರೋಗ್ಯ ಕ್ಷೇತ್ರ ಸೇರಿದಂತೆ ಇತರ ಪೂರಕ ಸಂಘಸಂಸ್ಥೆಗಳ ಸಹಕಾರ ಪಡೆದು, ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಬೇಕು. ಹೆಚ್ಚಿನ ಮಕ್ಕಳಿಗೆ ಲಸಿಕೆಯನ್ನು ನೀಡಬೇಕು ಎಂದು ಅವರು ಸೂಚನೆ ನೀಡಿದರು.
ನಗರ ಅಥವಾ ಗ್ರಾಮೀಣ ಪ್ರದೇಶಕ್ಕೆ ಅನುಕೂಲವಾಗುವ ಸೂಕ್ತ ಯೋಜನೆಯನ್ನು ರೂಪಿಸಿಕೊಂಡು, ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಅನುಷ್ಠಾನಗೊಂಡರೆ, ಎಲ್ಲಾ ಅರ್ಹ ಮಕ್ಕಳು ಲಸಿಕೆ ಪಡೆಯಬಹುದು. ಪಲ್ಸ್ ಪೋಲಿಯೋ ಲಸಿಕೆಯ ಅನುಷ್ಠಾನ ಕಾರ್ಯದಲ್ಲಿ ಸೂಕ್ತ ಮೇಲುಸ್ತುವಾರಿ ಹಾಗೂ ನಿರ್ವಹಣೆಯಾಗಬೇಕು. ಇದರಿಂದ, ಲಸಿಕೆ ಪಡೆದ ಮಕ್ಕಳ ಮಾಹಿತಿ ಸಂಗ್ರಹಿಸಲು ಅನುಕೂಲವಾಗಲಿದೆ ಎಂದು ತಿಳಿಸಿದ್ದರು.