ಅಪ್ಪುಗೆ ಪದ್ಮಶ್ರೀ ; ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ

Spread the love

ಬೆಂಗಳೂರು,ನ.6- ಹಠಾತ್ ನಿಧನರಾದ ಕನ್ನಡ ಚಿತ್ರರಂಗದ ಉದಯೋನ್ಮುಖ ಪ್ರತಿಭಾವಂತ ನಟ ಅಭಿಮಾನಿಗಳ ಪಾಲಿನ ಪವರ್ ಸ್ಟಾರ್ ಖ್ಯಾತಿಯ ಪುನೀತ್ ರಾಜ್‍ಕುಮಾರ್ ಅವರಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂಬ ಒತ್ತಡ ಹೆಚ್ಚಾಗಿದೆ. ಕನ್ನಡ ಚಿತ್ರರಂಗ, ಸಾರ್ವಜನಿಕ ವಲಯ ಹಾಗೂ ಅಭಿಮಾನಿಗಳು ಪುನೀತ್ ರಾಜ್‍ಕುಮಾರ್ ಅವರಿಗೆ ಅತ್ಯುನ್ನತ ಪ್ರಶಸ್ತಿಯಾದ ಪದ್ಮಶ್ರೀಯನ್ನು ನೀಡಬೇಕೆಂಬ ಬೇಡಿಕೆ ಇಟ್ಟಿದ್ದು ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಪರಿಗಣಿಸಿದೆ.

ಕಲೆ, ಸಾಹಿತ್ಯ, ವೈದ್ಯಕೀಯ, ವಿಜ್ಞಾನ, ಇತಿಹಾಸ ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಪದ್ಮಶ್ರೀ ಪ್ರಶಸ್ತಿಯನ್ನು ಪ್ರತಿ ವರ್ಷ ಕೇಂದ್ರ ಸರ್ಕಾರ ಮಹನೀಯರಿಗೆ ನೀಡಿ ಗೌರವಿಸುತ್ತದೆ. ಅತೀ ಚಿಕ್ಕ ವಯಸ್ಸಿನಲ್ಲೇ ಚಿತ್ರರಂಗದಲ್ಲಿ ಹೆಚ್ಚಿನ ಸಾಧನೆ ಮಾಡಿ ಕರ್ನಾಟಕ ಮಾತ್ರವಲ್ಲದೆ ದೇಶ-ವಿದೇಶದಲ್ಲೂ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದ ವರನಟ ಡಾ.ರಾಜ್‍ಕುಮಾರ್ ಪುತ್ರರೂ ಆಗಿರುವ ಪುನೀತ್‍ರಾಜ್‍ಕುಮಾರ್‍ಗೆ ಪದ್ಮಶ್ರೀ ಪುರಸ್ಕಾರವನ್ನು ನೀಡುವ ಮೂಲಕ ಅಗಲಿದ ಮೇರುನಟನಿಗೆ ಗೌರವ ಸಲ್ಲಿಸಬೇಕೆಂಬುದು ಇಡೀ ಕರ್ನಾಟಕ ಜನತೆಯ ಒತ್ತಾಸೆಯಾಗಿದೆ.

ಹೀಗಾಗಿ ನಟ ಪುನೀತ್‍ಗೆ ಪದ್ಮ ಪ್ರಶಸ್ತಿ ನೀಡುವಂತೆ ಒತ್ತಾಯ ಬಂದಿರುವ ಹಿನ್ನೆಲೆಯಲ್ಲಿ, ಸರ್ಕಾರ ಅಗತ್ಯ ಕ್ರಮಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಸದ್ಯದಲ್ಲೇ ಕೇಂದ್ರಕ್ಕೆ ನಟ ಪುನೀತ್ ಹೆಸರಿನ ಶಿಫಾರಸು ಪತ್ರ ಕಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ. ನವೆಂಬರ್ 16ರ ಬಳಿಕ ಸರ್ಕಾರದ ಮಟ್ಟದಲ್ಲಿ ಹಾಗೂ ಪುನೀತ್ ಕುಟುಂಬದ ಜತೆ ಚರ್ಚಿಸಿ ಹೆಸರು ಶಿಫಾರಸು ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಅಭಿಮಾನಿಗಳು ಪುನೀತ್ ಅವರಿಗೆ ಪದ್ಮಶ್ರೀ ಪ್ರಶಸ್ತಿಗೆ ಒತ್ತಾಯಿಸಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಪುನೀತ್‍ಗೆ ಪದ್ಮಶ್ರೀ ನೀಡುವ ವಿಚಾರಕ್ಕೆ ಸಮ್ಮತವಿದೆ ಎಂಬ ಸುಳಿವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದರು. ಇದರ ಜೊತೆಗೆ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ್ದ ಅವರು, ಯಾವ ಪ್ರಶಸ್ತಿ ಗೌರವಗಳಿಗಿಂತಲೂ ಪುನೀತ್ ರಾಜ್ ಕುಮಾರ್ ಜನತೆಯಿಂದ ಗಳಿಸಿರುವ ಪ್ರೀತಿ- ಅಭಿಯಾನ ದೊಡ್ಡದು ಎಂದಿದ್ದಾರೆ. ಪುನೀತ್ ರಾಜ್‍ಕುಮಾರ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪದ್ಮಶ್ರೀ ಪ್ರಶಸ್ತಿಯನ್ನು ಪಡೆಯುತ್ತಿದ್ದರು. ಈಗ ಅವರು ನಮ್ಮನ್ನು ಅಗಲಿದ್ದಾರೆ. ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ನೀಡಬೇಕೇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ, ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ, ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಒತ್ತಾಯಿಸಿದ್ದಾರೆ. ಹಠಾತ್ ನಿಧನರಾದ ನಟ ಪುನೀತ್ ರಾಜ್ ಕುಮಾರ್ ಮೇರು ವ್ಯಕ್ತಿ ಹಾಗೂ ಅಜಾತ ಶತ್ರು. ಹೀಗಾಗಿ ರಾಜ್ಯದ ಜನತೆಯ ಒತ್ತಾಯದಂತೆ ಅವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಹಾಗೂ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು. ಜೊತೆಗೆ ಮುಖ್ಯರಸ್ತೆಗೆ ಅವರ ಹೆಸರಿಡಬೇಕು ಎಂದು ಆಗ್ರಹಿಸಿದ್ದಾರೆ.

ಸಿನಿಮಾ ಕ್ಷೇತ್ರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಪುನೀತ್ ಮಾಡಿದ ಸಾಧನೆ ದೊಡ್ಡದು. ಜೊತೆಗೆ ಅವರು ಅಜಾತ ಶತ್ರುವಾಗಿ ಬಾಳಿದವರು. ಹೀಗಾಗಿ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ನಗರದ ಪ್ರಮುಖ ರಸ್ತೆಗೆ ಇಡಬೇಕು. ಪದ್ಮಶ್ರೀ, ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ.

ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಹಿಂದೆ ಬಂಗಾರಪ್ಪನವರ ಸರ್ಕಾರ ಇದ್ದಾಗ ವರನಟ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿತ್ತು. ಈಗ ಪುನೀತ್ ಅವರಿಗೆ ಈ ಗೌರವ ನೀಡಲು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ.  ಇನ್ನು ಪುನೀತ್ ರಾಜ್‍ಕುಮಾರ್‍ಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಅನೇಕ ಸಚಿವರು ಕೂಡ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.