ರಾಯ್ದುರ, ಮಾ.16: ಸರಕಾರಿ ಗುತ್ತಿಗೆಗಳಲ್ಲಿ ಶೇ.4ರಷ್ಟನ್ನು ಮುಸ್ಲಿಮರಿಗೆ ಮೀಸಲಿಡುವ ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ನಿರ್ಧಾರವು ತುಷ್ಟಿಕರಣದ ಉತ್ತುಂಗದಲ್ಲಿದೆ ಮತ್ತು ಭಾರತೀಯ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿದೆ ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಹೇಳಿದ್ದಾರೆ.
ಈ ಅಸಾಂವಿಧಾನಿಕ ನಿರ್ಧಾರವನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಸಂಸದ ರಾಹುಲ್ ಗಾಂಧಿ ಅವರಿಗೆ ಸಾಯಿ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಎಲ್ಲೆಲ್ಲಿ ಅಧಿಕಾರಕ್ಕೆ ಬಂದರೂ ಸಂವಿಧಾನದ ಮೂಲ ಆಶಯವನ್ನು ಕತ್ತು ಹಿಸುಕಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು.
ಮುಸ್ಲಿಂ ಗುತ್ತಿಗೆದಾರರಿಗೆ ಸರ್ಕಾರಿ ಟೆಂಡರ್ ಗಳಲ್ಲಿ ಶೇ.4ರಷ್ಟು ಮೀಸಲಾತಿ ನೀಡಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಗೆ ತಿದ್ದುಪಡಿ ತರಲು ಸಿದ್ದರಾಮಯ್ಯ ಸರ್ಕಾರ ಒಪ್ಪಿಗೆ ನೀಡಿದೆ.
ಈ ನಿರ್ಧಾರವು ಸಮಾಜದಲ್ಲಿ ದ್ವೇಷವನ್ನು ಹರಡಲು ಕಾಂಗ್ರೆಸ್‌ನ ಯೋಜಿತ ಪಿತೂರಿಯಾಗಿದೆ. ನ್ಯಾಯಾಲಯಗಳು ಈಗಾಗಲೇ ಧರ್ಮ ಆಧಾರಿತ ಮೀಸಲಾತಿಯನ್ನು ಅಸಾಂವಿಧಾನಿಕ ಎಂದು ಘೋಷಿಸಿವೆ. ಆದ್ದರಿಂದ ಈ ನಿರ್ಧಾರವೂ ಸರಿ ಇಲ್ಲ ಈ ಕೂಡಲೆ ತನ್ನ ನಿರ್ಧಾರದಿಂದ ಕರ್ನಾಟಕ ಸರ್ಕಾರ ಹಿಂದೆ ಸರಿಯಬೇಕು ಎಂದು ಅವರು ಆಗ್ರಹಿಸಿದ್ದಾರೆ.