ಬೆಂಗಳೂರು, ಜ.23- ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಮನ ಭಕ್ತರೂ ಅಲ್ಲ, ಗಾಂಧೀಜಿ ಅವರ ಅನುಯಾಯಿಗಳೂ ಅಲ್ಲ. ತಾವೇನಿದ್ದೇರೂ ಅಧಿಕಾರದ ಅನುಯಾಯಿಗಳು, ಅಧಿಕಾರ ಕೊಡುವ ಹೈಕಮಾಂಡ್ ಭಕ್ತರು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಆಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕನ್ನಡಿಗರ ರಾಮಭಕ್ತಿ, ಹಿಂದೂಗಳ ಒಗ್ಗಟ್ಟು ನೋಡಿ ತಮಗೆ ನಡುಕ ಉಂಟಾಗಿದೆ ಎಂದು ಗೊತ್ತು. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲದಿದ್ದರೆ ಪಾಪ ತಮ್ಮ ಕುರ್ಚಿಗೇ ಕಂಟಕ. ಸಿದ್ದರಾಮಯ್ಯನವರೇ ತಮ್ಮ ಪರಿಸ್ಥಿತಿಯ ಬಗ್ಗೆ ನನಗೆ ಕನಿಕರವಿದೆ. ಇನ್ನಾದರೂ ರಾಮನಿಗೆ ಶರಣಾಗಿ ಎಂದು ಆಗ್ರಹಿಸಿದ್ದಾರೆ.
ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿ, ರಾಮ ಮಂದಿರದ ಆಹ್ವಾನ ತಿರಸ್ಕರಿಸಿದ ತಮ್ಮ ಪಕ್ಷಕ್ಕೆ ಶ್ರೀರಾಮನ ಬಗ್ಗೆ, ಕೊಟ್ಟ ಮಾತಿನಂತೆ ರಾಮನ ಮಂದಿರ ನಿರ್ಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಉಳಿದಿಲ್ಲ ತಿರುಗೇಟು ನೀಡಿದ್ದಾರೆ. ರಾಮ ಸತ್ಯವಂತ. ಕೊಟ್ಟ ಮಾತಿಗೆ ಎಂದೂ ತಪ್ಪದ ವ್ಯಕ್ತಿತ್ವ. ಆದರೆ ತಾವು ಮಾಡಿದ್ದೇನು? ಮಾಡುತ್ತಿರುವುದೇನು? ತಮ್ಮ ಮೊದಲ ಅವಧಿಯಲ್ಲಿ ಜನತೆಗೆ ಕೊಟ್ಟಿದ್ದ ಭರವಸೆಗಳಲ್ಲಿ ಅರ್ಧ ಭಾಗವೂ ಈಡೇರಿಸಲಿಲ್ಲ. ಅದರ ಮೇಲೆ ನುಡಿದಂತೆ ನಡೆದ ಸರ್ಕಾರ ಎಂಬ ಮತ್ತೊಂದು ಸುಳ್ಳು.
ಭಾರತದ ವಿಕ್ರಮ್ ಲ್ಯಾಂಡರ್ ಅನ್ನು ಸೆರೆ ಹಿಡಿದ ನಾಸಾ ನೌಕೆ
ಈಗ ಎರಡನೇ ಅವಧಿಯಲ್ಲಿ ತಾವು ಮಾಡುತ್ತಿರುವುದೇನು? ಎಲ್ಲರಿಗೂ 200 ಯೂನಿಟ್ ಕರೆಂಟ್ ಉಚಿತ ಅಂತ ಸುಳ್ಳು ಭರವಸೆ ನೀಡಿ ಕಡೆಗೆ ಸರಾಸರಿ ಎಂದು ವರಸೆ ಬದಲಿಸಿದ್ದೀರಿ. 10 ಕೆಜಿ ಅಕ್ಕಿ ನೀಡುತ್ತೇನೆ ಎಂದು ಹೇಳಿ ಈಗ ಮಾತು ತಪ್ಪಿದ್ದೀರಿ. ರಾಜ್ಯದ ಎಲ್ಲಾ ನಿರುದ್ಯೋಗಿ ಪದವೀಧರರು, ಡಿಫ್ಲೋಮಾ ಪದವೀಧರರಿಗೆ ಯುವನಿಧಿ ಗ್ಯಾರೆಂಟಿ ಅಂತ ಸುಳ್ಳು ಹೇಳಿ ಈಗ ಕಂಡೀಷನ್ ಮೇಲೆ ಕಂಡೀಷನ್ ಹಾಕಿ ಕಡೆಗೆ 3,000 ಯುವಕರು ಮಾತ್ರ ಅರ್ಹರು ಎಂದು ಯುವಕರಿಗೆ ಟೋಪಿ ಹಾಕಿದ್ದೀರಿ ಎಂದು ಕಿಡಿಕಾರಿದ್ದಾರೆ.
ಆದರೆ ನಿಮ್ಮ ಕಾಂಗ್ರೆಸ್ ಪಕ್ಷದ ಒಡೆದು ಆಳುವ ನೀತಿಯನ್ನ ರಾಮನ ವಿಷಯದಲ್ಲೂ ವಿಸ್ತರಿಸುವ ಪಾಪದ ಕಟ್ಟಿಕೊಳ್ಳಬೇಡಿ. ನೀವು ಮಹಾತ್ಮ ಗಾಂಧಿಯವರು ಹೇಳಿದ ರಾಮನ ಭಕ್ತರು ಅಂತ ಹೇಳಿದ್ದೀರಿ. ಮಹಾತ್ಮ ಗಾಂಧಿಯವರು ಗೋಹತ್ಯೆ ನಿಷೇಧದ ಅತ್ಯಂತ ದೊಡ್ಡ ಪ್ರತಿಪಾದಕರಾಗಿದ್ದರು. ಆದರೆ ತಾವು ಗೋಹತ್ಯೆಯ ಪರ. ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಕ್ಷವನ್ನ ವಿಸರ್ಜನೆ ಮಾಡಿ ಅಂತ ಗಾಂಧೀಜಿ ಹೇಳಿದ್ದರು. ಆದರೆ ತಾವುಗಳು ಕಾಂಗ್ರೆಸ್ ಪಕ್ಷವನ್ನ ಒಂದು ಕುಟುಂಬದ ಜಹಗೀರು ಮಾಡಿಕೊಟ್ಟುಬಿಟ್ಟಿದ್ದೀರಿ. ಇದೇನಾ ತಮ್ಮ ಗಾಂಧೀವಾದ? ಎಂದು ಪ್ರಶ್ನೆಸಿದ್ದಾರೆ.
ಅಂತೂ ಇಂತೂ ತಮ್ಮ ಬಾಯಲ್ಲೂ ರಾಮ ನಾಮ ಹೊರಡುತ್ತಿದೆ. ತೋರಿಕೆಗೊ, ಜನಮೆಚ್ಚುಗೆಗೊ ಅಥವಾ ಸಮಾಜದ ಅಂಜಿಕೆಗೋ, ಒಟ್ಟಿನಲ್ಲಿ ನಿನ್ನೆ ತಾವೂ ಒಂದು ದೇವಸ್ಥಾನಕ್ಕೆ ಹೋಗಿದ್ದೀರಿ. ಇದು ಸಂತೋಷದ ವಿಷಯ ಎಂದು ಆಶೋಕ್ ವ್ಯಂಗ್ಯವಾಡಿದ್ದಾರೆ.