ಬೆಂಗಳೂರು,ಮೇ17- ಕಣ್ಣು-ಕಿವಿ, ಹೃದಯ ಇಲ್ಲದ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರ, ನರೇಗಾ ಹಾಗೂ ಪಿಂಚಣಿ ಹಣವನ್ನೂ ರೈತರ ಸಾಲಕ್ಕೆ ಜಮೆ ಮಾಡಿದೆ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದನ್ನು ತಪ್ಪಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರೈತರ ಹಣ ಸಾಲಕ್ಕೆ ಜಮೆ ಮಾಡದಂತೆ ಬ್ಯಾಂಕ್‌ಗಳಿಗೆ ಸೂಚಿಸಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಿ. ಬ್ಯಾಂಕ್‌ಗಳು ಒಪ್ಪದಿದ್ದರೆ ರೈತರ ಸಾಲ ಮನ್ನಾ ಮಾಡಲಿ ಎಂದು ಆಗ್ರಹಿಸಿದ್ದಾರೆ.
ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕದ ರೈತರಿಗಾಗಿ 3,454 ಕೋಟಿ ರೂ. ಬರ ಪರಿಹಾರವನ್ನು ಬಿಡುಗಡೆಗೊಳಿಸಿದೆ. ಈ ಪರಿಹಾರದ ಹಣವನ್ನು ಹಳೆ ಬಾಕಿಗಳಿಗೆ ಬ್ಯಾಂಕುಗಳು ಜಮೆ ಮಾಡುತ್ತಿದ್ದರೂ ರಾಜ್ಯ ಸರ್ಕಾರ ತಕ್ಷಣದ ಕ್ರಮವಹಿಸದೆ ಕೈ ಕಟ್ಟಿ ಕುಳಿತಿತ್ತು. ಈಗ ಪಿಂಚಣಿ, ನರೇಗಾ ಹಣವೂ ರೈತರ ಕೈ ಸೇರುವಂತೆ ನೋಡಿಕೊಳ್ಳಲು ಸರ್ಕಾರ ವಿಫಲವಾಗಿದೆ. ಈ ಮೂಲಕ ಅನ್ನದಾತರ ಹೊಟ್ಟೆಗೆ ಹೊಡೆಯುವ ಪಾಪದ ಕೆಲಸ ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರ ಪ್ರವಾಹ ವಿಕೋಪದಿಂದ ಹಾನಿಗೊಳಗಾದವರಿಗೆ ದುಪ್ಪಟ್ಟು ಪರಿಹಾರ ನೀಡಿತ್ತು. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯದ ಪಾಲನ್ನೂ ನೀಡಲಾಗಿತ್ತು. ಈಗ ಪಾಪರ್ ಆಗಿ ಖಾಲಿ ಖಜಾನೆಯಲ್ಲಿ ಚಿಲ್ಲರೆ ಎಷ್ಟು ಉಳಿದಿದೆ ಎಂದು ಎಣಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಸಂಕಷ್ಟಕ್ಕೂ ಮಿಡಿಯದೆ ಸುಮ್ಮನಿದ್ದಾರೆ ಎಂದು ಟೀಕಿಸಿದ್ದಾರೆ.
ಸಹಾಯಧನ ಘೋಷಿಸಿಕಳೆದ ವರ್ಷ ಹಿಂಗಾರು, ಮುಂಗಾರು ಎರಡೂ ಕೈ ಕೊಟ್ಟಿದ್ದರಿಂದ ಈ ವರ್ಷ ರೈತರ ಬಳಿ ಬಿತ್ತನೆ ಬೀಜ, ರಸಗೊಬ್ಬರ ಕೊಳ್ಳಲು, ಉಳುಮೆ ಮಾಡಲೂ ಸಹ ಹಣವಿಲ್ಲದ ಪರಿಸ್ಥಿತಿ ಇದೆ. ಆದ್ದರಿಂದ ಈ ಕೂಡಲೇ ಎಕರೆಗೆ 5,000 ರೂ. ನಂತೆ ರೈತರಿಗೆ ವಿಶೇಷ ಸಹಾಯಧನ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಇಲ್ಲವಾದಲ್ಲಿ ಈ ಬಾರಿಯೂ ಕೃಷಿ ಬೆಳೆಗಳು ಕೈ ಕೊಟ್ಟು ಆಹಾರ ಪದಾರ್ಥಗಳ ಕೊರತೆಯಿಂದ ಹಣದುಬ್ಬರ ಉಂಟಾಗಿ ತೀವ್ರ ಬೆಲೆ ಏರಿಕೆ ಆಗುವುದು ನಿಶ್ಚಿತ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ರೈತರ ಸಮಸ್ಯೆಗಳಿಗೆ ಸ್ಪಂದಿಸಿ ನಾಡಿನ ಕೃಷಿ ಚಟುವಟಿಕೆಯನ್ನು ಉಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.