ಬೆಂಗಳೂರು,ಜ.9- ಚುನಾವಣೆಗೂ ಮುನ್ನ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರ ಉದ್ಧಾರ ಮಾಡುವುದಾಗಿ ಸುಳ್ಳು ಆಶ್ವಾಸನೆ ಕೊಟ್ಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್ ಮಾಡಿರುವ ಅವರು, ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ಕೊರೆಯುವ ಚಳಿಯಲ್ಲೂ ಫ್ರೀಡಂಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮಾಡುತ್ತಿದ್ದರೆ, ಹೃದಯಹೀನ ಸರ್ಕಾರ ಕಂಡೂ ಕಾಣದಂತೆ ಕುರುಡಾಗಿದೆ, ಕೇಳಿದರೂ ಕೇಳಿಸದಂತೆ ಕಿವುಡಾಗಿದೆ.
ಕಾಂಗ್ರೆಸ್ ಸರ್ಕಾರ ಎಲ್ಲರನ್ನೂ ವಂಚಿಸಿ ಬೀದಿಗೆ ತಂದು ನಿಲ್ಲಿಸಿ ಮಜಾ ನೋಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದೇ ವಿಷಯದ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ .ವಿಜಯೇಂದ್ರ ಅವರು, ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೀದಿಗಿಳಿದಿರುವ 25 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎರಡನೇ ದಿನವೂ ಕೊರೆವ ಚಳಿಯಲ್ಲಿಯೇ ರಾತ್ರಿ ಕಳೆದು ಮುಷ್ಕರ ನಡೆಸುತ್ತಿದ್ದರೂ ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರ ಕಿವಿ ಕೊಡದಿರುವುದು ಶ್ರಮಿಕ ವರ್ಗಗಳ ಮೇಲೆ ಈ ಸರ್ಕಾರಕ್ಕಿರುವ ಅಸಡ್ಡೆ ತನವನ್ನು ಸಾಕ್ಷೀಕರಿಸುತ್ತಿದೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ.
ಅಧಿಕಾರಕ್ಕೆ ಬರುವ ಮುನ್ನ ಆಶಾ ಕಾರ್ಯಕರ್ತೆಯರ ಮತ ಪಡೆಯಲು ಬೆಟ್ಟದಷ್ಟು ಪೊಳ್ಳು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದು ವರ್ಷ ಕಳೆದರೂ ಬೇಡಿಕೆ ಈಡೇರಿಸದೇ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಲೆ ಕೊಡದ ಈ ಸರ್ಕಾರಕ್ಕೆ ನಾಡಿನ ಜನ ಹಿಡಿಶಾಪ ಹಾಕುತ್ತಿದ್ದಾರೆ. ಈ ಕೂಡಲೇ ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ನ್ಯಾಯಸಮತ ಬೇಡಿಕೆಗಳನ್ನು ಈಡೇರಿಸಲಿ ಎಂದು ರಾಜ್ಯ ಸರ್ಕಾರವನ್ನು ವಿಜಯೇಂದ್ರ ಒತ್ತಾಯಿಸಿದ್ದಾರೆ.