ಬೆಂಗಳೂರು,ಆ.13- ಇದೇ ಸೋಮವಾರದಂದು ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪ್ರಥಮ ಬಾರಿಗೆ ಧ್ವಜಾರೋಹಣ ನಡೆಸುತ್ತಿರುವ ಹಿನ್ನಲೆಯಲ್ಲಿ ಅಗತ್ಯ ಮುಂಜಾಗ್ರತೆ ಕೈಗೊಳ್ಳಬೇಕೆಂದು ಕಂದಾಯ ಸಚಿವ ಆರ್.ಅಶೋಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇಂದು ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ.ಮೋಹನ್, ಬಿಬಿಎಂಪಿ, ಗೃಹ, ಕಂದಾಯ ಸೇರಿದಂತೆ ಮತ್ತಿತರ ಅಧಿಕಾರಿಗಳ ಜೊತೆ ಸ್ಥಳಕ್ಕೆ ಭೇಟಿ ಕೊಟ್ಟು ಭದ್ರತೆಯ ಬಗ್ಗೆ ಪರಿಶೀಲನೆ ನಡೆಸಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಇದೇ ಮೊದಲ ಬಾರಿಗೆ ಚಾಮರಾಜಪೇಟೆಯ ಮೈದಾನದಲ್ಲಿ ಸ್ವಾತಂತ್ರ್ಯ ದಿನಾ ಚರಣೆ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯಿಂದ ಧ್ವಜಾರೋಹಣ ನೆರವೇರಿಸಲಾಗುವುದು.
ಬೆಂಗಳೂರು ಉತ್ತರ ವಿಭಾಗದ ಉಪ ವಿಭಾಗಾಕಾರಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರು, ಸಂಸದರು ಮಾತ್ರ ವೇದಿಕೆ ಏರಲು ಅವಕಾಶವಿದ್ದು, ಸಂಘಸಂಸ್ಥೆಗಳು, ಸಾರ್ವಜನಿಕರು, ಸಂಘಟನೆಗಳು ಪಾಲ್ಗೊಳ್ಳಬಹುದು ಎಂದು ಹೇಳಿದರು.
ಆದರೆ ಕಾರ್ಯಕ್ರಮಕ್ಕೆ ಬರುವವರು ವಂದೇ ಮಾತರಂ, ಭಾರತ್ ಮಾತಾ ಕೀ ಜೈ ಘೋಷಣೆಗಳನ್ನು ಬಿಟ್ಟು ಬೇರೇ ಯಾವ ಘೋಷಣೆಯನ್ನು ಕೂಗುವಂತಿಲ್ಲ. ಒಂದು ವೇಳೆ ಯಾರಾದರೂ ಕಾನೂನು ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ಕೊಟ್ಟರು.
ಈಗಾಗಲೇ ನಗರ ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿ, ಬಿಬಿಎಂಪಿ ಆಯುಕ್ತರು ಕಾರ್ಯಕ್ರಮದ ಬಗ್ಗೆ ಯಾವೆಲ್ಲ ನಿಬಂಧನೆಗಳನ್ನು ಸಾರ್ವಜನಿಕರು ಪಾಲನೆ ಮಾಡಬೇಕು ಎಂಬುದರ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಇದನ್ನು ಪ್ರತಿಯೊಬ್ಬರು ಪಾಲನೆ ಮಾಡುವುದರ ಮೂಲಕ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅಶೋಕ್ ಮನವಿ ಮಾಡಿದರು.
ಮೈದಾನವು ಕಂದಾಯ ಇಲಾಖೆ ವ್ಯಾಪ್ತಿಗೆ ಒಳಪಟ್ಟಿರುವುದರಿಂದ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಬೇಕಾದರೆ ಕಡ್ಡಾಯವಾಗಿ ಕಂದಾಯ ಇಲಾಖೆಯ ಅನುಮತಿ ಪಡೆಯಬೇಕು. ಅನುಮತಿ ಪಡೆಯದೇ ಕಾರ್ಯಕ್ರಮ ನಡೆಸಲು ಅವಕಾಶ ನೀಡು ವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಗೃಹ ಇಲಾಖೆಯವರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ನಾವು ಭಾರತೀಯರಾಗಿದ್ದು, ನಮ್ಮಲ್ಲಿ ಧ್ವಜಾರೋಹಣ ನೆರವೇರಿಸಲು ಯಾರೊಬ್ಬರೂ ಸೃಷ್ಟಿಸುವ ಸಾಧ್ಯತೆ ಇಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದರು.