ಜೂನ್ ಮೊದಲ ವಾರದಲ್ಲಿ ಇಳಿಮುಖವಾಗಲಿದೆ ಮುಂಗಾರು

ಬೆಂಗಳೂರು, ಮೇ 31-ರಾಜ್ಯದ ಹಲವು ಭಾಗಗಳಲ್ಲಿ ನಿರಂತರವಾಗಿ ಬೀಳುತ್ತಿರುವ ಮಳೆ ಜೂನ್ ಮೊದಲ ವಾರದಲ್ಲಿ ಇಳಿಮುಖವಾಗುವ ಸಾಧ್ಯತೆಗಳಿವೆ.

ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ, ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದೆ.

ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ವಾಯುಭಾರ ಕುಸಿತವಾಗಿ ಮಾರ್ಪಟ್ಟಿದ್ದು, ಮುಂಬೈ, ಗುಜರಾತ್ ಕಡೆಗೆ ಚಲಿಸುತ್ತಿದೆ. ಆದರೂ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ಈ ಸಂಜೆಗೆ ತಿಳಿಸಿದರು.

ಕಳೆದ ಒಂದು ವಾರದಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆಯಾಗಿದೆ. ಇನ್ನೆರಡು ದಿನ ಇದೇ ರೀತಿ ಮಳೆ ಮುಂದುವರೆಯಲಿದೆ. ಆದರೆ, ಜೂನ್ ಎರಡರ ನಂತರ ನಾಲ್ಕೈದು ದಿನಗಳ ಕಾಲ ಮಳೆ ಕಡಿಮೆಯಾಗಲಿದ್ದು, ಒಣ ಹವೆ ಮುಂದುವರೆಯಲಿದೆ.

ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಮುಂದುವರೆಯಲಿದೆ ಎಂದು ಹೇಳಿದರು.ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಜೂನ್ 7ರ ನಂತರ ವಾಯುಭಾರ ಕುಸಿತವಾಗಿ ಮಾರ್ಪಾಡಾಗುವ ಸಾಧ್ಯತೆ ಹೆಚ್ಚಾಗಿದೆ. ಆ ನಂತರ ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ ಎಂದರು.

ನೈರುತ್ಯ ಮುಂಗಾರು ಆಗಮನದ ಬಗ್ಗೆ ನಾಳೆಯೊಳಗೆ ಭಾರತೀಯ ಹವಾಮಾನ ಇಲಾಖೆ ಅಕೃತ ಪ್ರಕಟಣೆ ನೀಡುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದಿಂದಾಗಿ ಮುಂಗಾರು ವಿಳಂಬವಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ, ಮೈಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತದಿಂದ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ ಎಂದು ಹೇಳಿದರು.

ಮುಂಗಾರು ಪೂರ್ವ ಮಳೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಹೆಚ್ಚಾಗಿದೆ. ಆದರೆ, ಉತ್ತರ ಒಳನಾಡನಲ್ಲಿ ಕಡಿಮೆಯಾಗಿದೆ. ಕಳೆದ ನಾಲ್ಕೈದು ದಿನಗಳಿಂದಲೂ ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆ ಹೊರತುಪಡಿಸಿದರೆ ಮಳೆ ಇರಲಿಲ್ಲ ಎಂದರು.

Sri Raghav

Admin