ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಮಳೆ

ಬೆಂಗಳೂರು, ಏ.24- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ.ನಿನ್ನೆ ರಾತ್ರಿ ಹಾಗೂ ಇಂದು ಬೆಳಗ್ಗೆ ಬೆಂಗಳೂರು, ರಾಮನಗರ, ಕೊಡಗು, ಚಾಮರಾಜನಗರ, ಮಂಡ್ಯ, ಮೈಸೂರು ಸೇರಿದಂತೆ ಹಲವು ಭಾಗಗಳಲ್ಲಿ ಗುಡುಗು, ಮಿಂಚು, ಗಾಳಿ ಸಹಿತ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ತಂಪೆರೆದಂತಾಗಿದೆ.

ಮುಂಗಾರು ಪೂರ್ವ ಮಳೆ ರಾಜ್ಯದಲ್ಲಿ ಮತ್ತೆ ಚುರುಕಾಗಿದ್ದು, ಚದುರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದೆ.ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೂ ಟ್ರಪ್ ಉಂಟಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ಈ ಸಂಜೆಗೆ ತಿಳಿಸಿದ್ದಾರೆ.

ಹವಾ ಮುನ್ಸೂಚನೆ ಪ್ರಕಾರ, ಇನ್ನು ಮೂರು ದಿನಗಳ ಕಾಲ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಇದೇ ರೀತಿ ಮಳೆ ಮುಂದುವರಿಯಲಿದೆ. ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಒಂದೆರಡು ಕಡೆ ಅಧಿಕ ಪ್ರಮಾಣದ ಮಳೆಯಾಗಬಹುದು ಎಂದರು.

ಮುಂಗಾರು ಪೂರ್ವ ಮಳೆಯಾಗಿರುವುದರಿಂದ ಗುಡುಗು, ಸಿಡಿಲು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆ ಸಾಮಾನ್ಯ. ಕೆಲವಡೆ ಆಲಿಕಲ್ಲು ಸಹಿತ ಮಳೆಯಾಗಲಿದೆ. ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಏಪ್ರಿಲ್ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದೆ ಎಂದು ಹೇಳಿದರು.

ಸ್ಥಳೀಯ ಹವಾ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ ಎಂದರು.ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿದ್ದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾದ ವರದಿಯಾಗಿದೆ.

#ಮಳೆ ವಿವರ ಮಿಮೀಗಳಲ್ಲಿ:
ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಬೆಂಗಳೂರು 54, ಬೆಂಗಳೂರು ಗ್ರಾಮಾಂತರ 45, ರಾಮನಗರ 55, ಕೊಡಗು 80, ಚಾಮರಾಜ ನಗರ 69, ಮಂಡ್ಯ 57, ಮೈಸೂರು 37, ದಕ್ಷಿಣ ಕನ್ನಡ 32, ಹಾಸನ 59, ಚಿತ್ರದುರ್ಗ 15 ಹಾಗೂ ಚಿಕ್ಕಬಳ್ಳಾಪುರದಲ್ಲಿ 32 ಮಿಮೀನಷ್ಟು ಮಳೆಯಾದ ವರದಿಯಾಗಿದೆ.

Sri Raghav

Admin