ಬೆಂಗಳೂರು, ಅ.19– ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದ್ದು, ವಾರಾಂತ್ಯದವರೆಗೆ ಮುಂದುವರೆಯುವ ಸಾಧ್ಯತೆಗಳಿವೆ.
ಕಳೆದ ಮೂರು ನಾಲ್ಕು ದಿನಗಳಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ನಿನ್ನೆ ಸಾಧಾರಣ ಮಳೆಯಾಗಿದೆ.
ಅರಬ್ಬೀ ಸಮುದ್ರದಲ್ಲಿ ಹಾಗೂ ಬಂಗಾಳ ಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ ಉಂಟಾಗಿರುವ ಪರಿಣಾಮದಿಂದ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರುತ್ತಿದ್ದು, ಆಗಾಗ್ಗೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ.
ಹವಾಮಾನ ಮುನ್ಸೂಚನೆ ಪ್ರಕಾರ ಅ.25ರವರೆಗೆ ಮಳೆ ಮುಂದುವರೆಯಲಿದೆ. ಮುಂಗಾರು ಮಾರುತಗಳು ಮರಳಿದ್ದು, ಹಿಂಗಾರು ಮಾರುತಗಳು ಕ್ರಿಯಾಶೀಲವಾಗಿರುವ ಹಿನ್ನಲೆಯಲ್ಲಿ ವಾತಾವರಣದಲ್ಲಿ ಹಲವು ಬದಲಾವಣೆಗಳಾಗುತ್ತಿವೆ. ಇದರ ಪರಿಣಾಮದಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಕರಾವಳಿ ಹಾಗೂ ಮಲೆನಾಡಿನ ಕೆಲವು ಕಡೆ ಅಧಿಕ ಮಳೆಯಾಗುವ ಮುನ್ಸೂಚನೆಗಳಿವೆ. ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಗಳು ಕಂಡುಬರುತ್ತಿವೆ. ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಅಕ್ಟೋಬರ್ ಒಂದರಿಂದ ನಿನ್ನೆಯವರೆಗೆ ದಕ್ಷಿಣ ಒಳನಾಡು ಹೊರತುಪಡಿಸಿ ರಾಜ್ಯದ ಉಳಿದೆಡೆ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಇನ್ನೊಂದು ವಾರದ ಕಾಲ ಉತ್ತಮ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಮಳೆ ಕೊರತೆಯ ಪ್ರಮಾಣ ಕಡಿಮೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.