ರಾಜ್ಯಸಭೆ ಮತ್ತು ವಿಧಾನಪರಿಷತ್‍ಗೆ ಕೈ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಕಸರತ್ತು

ಬೆಂಗಳೂರು, ಮೇ 21- ವಿಧಾನಸಭೆಯಿಂದ ರಾಜ್ಯಸಭೆ ಮತ್ತು ವಿಧಾನಪರಿಷತ್‍ಗೆ ಸದಸ್ಯರ ಆಯ್ಕೆಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಅಂತಿಮ ಸುತ್ತಿನ ಕಸರತ್ತು ನಡೆಯುತ್ತಿದೆ. ದೆಹಲಿ ಪ್ರವಾಸದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಮಧ್ಯಾಹ್ನ ಎಐಸಿಸಿ ಪ್ರಧಾನಕಾರ್ಯದರ್ಶಿಗಳಾದ ರಣದೀಪ್‍ಸಿಂಗ್ ಸುರ್ಜೆವಾಲ ಮತ್ತು ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

ರಾಹುಲ್‍ಗಾಂಧಿ ಅನುಪಸ್ಥಿತಿಯಲ್ಲಿ ಬಹುತೇಕ ಸೋನಿಯಾಗಾಂಧಿ ಅವರನ್ನು ರಾಜ್ಯ ನಾಯಕರು ಭೇಟಿ ಮಾಡುವ ಸಾಧ್ಯತೆ ಇದೆ. ಸಂಭವನೀಯ ಅಭ್ಯರ್ಥಿಗಳೊಂದಿಗೆ ದೆಹಲಿಗೆ ತೆರಳಿರುವ ಇಬ್ಬರು ನಾಯಕರು ಇನ್ನು ಕೆಲವು ಪ್ರಮುಖ ಮುಖಂಡರ ಜತೆ ಸಮಾಲೋಚನೆ ನಡೆಸಲಿದ್ದಾರೆ.

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಪ್ರತ್ಯೇಕ ಪಟ್ಟಿಯಿಂದಾಗಿ ಅಭ್ಯರ್ಥಿಗಳ ಆಯ್ಕೆ ರಾಜ್ಯಮಟ್ಟದಲ್ಲೇ ಇತ್ಯರ್ಥಗೊಳ್ಳಲಿಲ್ಲ. ಹಾಗಾಗಿ ದೆಹಲಿಗೆ ಭೇಟಿ ನೀಡುವ ಅನಿವಾರ್ಯತೆ ಎದುರಾಯಿತು ಎಂದು ಮೂಲಗಳು ತಿಳಿಸಿವೆ. ಕಿತ್ತೂರು ಕರ್ನಾಟಕ ಭಾಗದ ಪ್ರಭಾವಿ ಲಿಂಗಾಯಿತ ಸಮುದಾಯದ ನಾಯಕ ಎಸ್.ಆರ್.ಪಾಟೀಲ್ ಅವರನ್ನು ವಿಧಾನಪರಿಷತ್‍ಗೆ ನೇಮಿಸಬೇಕು ಎಂಬುದು ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳ ಕಾಂಗ್ರೆಸ್ ಮುಖಂಡರ ಒತ್ತಾಯವಾಗಿದೆ.

ಆದರೆ, ಇದಕ್ಕೆ ಸಿದ್ದರಾಮಯ್ಯ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ಮೊದಲು ಅವರಿಗೆ ಸಾಕಷ್ಟು ಅವಕಾಶಗಳನ್ನು ನೀಡಲಾಗಿದೆ. ಹೊಸ ಮುಖಗಳಿಗೆ ಈ ಬಾರಿ ಆದ್ಯತೆ ನೀಡಬೇಕು. ಎರಡು ಸ್ಥಾನಗಳಲ್ಲಿ ಒಂದನ್ನು ಅಲ್ಪಸಂಖ್ಯಾತರಿಗೆ ಮತ್ತೊಂದನ್ನು ದಲಿತ ಸಮುದಾಯಕ್ಕೆ ನೀಡಬೇಕು ಎಂದು ಪ್ರತಿಪಾದಿಸಿದ್ದಾರೆ ಎನ್ನಲಾಗಿದೆ.

ಎಸ್.ಆರ್.ಪಾಟೀಲ್ ಅವರು ಅವಕಾಶ ಸಿಗದೇ ಇದ್ದರೆ ಬಿಜೆಪಿಯತ್ತ ವಲಸೆ ಹೋಗಲಿದ್ದಾರೆ. ಇದು ಕಿತ್ತೂರು ಕರ್ನಾಟಕದಲ್ಲಿ ಕಾಂಗ್ರೆಸ್‍ಗೆ ದೊಡ್ಡ ಹಿನ್ನಡೆಯಾಗಲಿದೆ ಎಂಬ ಆತಂಕಗಳು ಕೇಳಿ ಬಂದಿವೆ. ಕ್ರೈಸ್ತ ಸಮುದಾಯಕ್ಕೆ ಅವಕಾಶ ನೀಡುವುದಾದರೆ ಐವಾನ್ ಡಿಸೋಜ ಅವರಿಗೆ ಮಣೆ ಹಾಕಬೇಕು ಎಂಬುದು ಸಿದ್ದರಾಮಯ್ಯ ಅವರ ವಾದವಾಗಿದೆ.

ಬಿಬಿಎಂಪಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರಿಗರಿಗೆ ಅವಕಾಶ ನೀಡಬೇಕು ಎಂದು ಡಿ.ಕೆ.ಶಿವಕುಮಾರ್ ಪ್ರತಿಪಾದಿಸಿದ್ದಾರೆ ಎನ್ನಲಾಗಿದೆ. ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಮಣೆ ಹಾಕುವುದೇ ಆದರೆ, ಡಜನ್‍ಗೂ ಹೆಚ್ಚಿನ ಸಂಖ್ಯೆಯ ನಾಯಕರು ಆಕಾಂಕ್ಷಿಗಳಾಗಿದ್ದಾರೆ. ಹೀಗಾಗಿ ಹೈಕಮಾಂಡ್ ಮಟ್ಟದಲ್ಲೇ ಇತ್ಯರ್ಥವಾಗಬೇಕು ಎಂಬ ಕಾರಣಕ್ಕೆ ದೆಹಲಿಯಲ್ಲಿ ಸಭೆ ನಡೆಸಲಾಗುತ್ತಿದೆ. ಅಬ್ದುಲ್ ಜಬ್ಬರ್ ಸೇರಿದಂತೆ ಹಲವಾರು ಮುಸ್ಲಿಂ ನಾಯಕರು ಲಾಬಿ ನಡೆಸುತ್ತಿದ್ದಾರೆ.

ದಲಿತ ಸಮುದಾಯದ ಅಭ್ಯರ್ಥಿಗಳ ಆಯ್ಕೆಯಲ್ಲೂ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಎಸ್ಸಿ ಘಟಕದ ನಿರ್ಗಮಿತ ಅಧ್ಯಕ್ಷ ಜಕ್ಕಪ್ಪನವರ್ ಹೆಸರು ಕೇಳಿ ಬರುತ್ತಿದೆ. ಇಂದು ಬಹುತೇಕ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳ್ಳಲಿದ್ದು, ಸಂಜೆ ವೇಳೆಗೆ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇದೆ.