ಬೆಂಗಳೂರು, ಫೆ.17- ರಾಮನಗರದ ರಾಮದೇವರ ಬೆಟ್ಟದಲ್ಲಿ ಭವ್ಯವಾದ ರಾಮಮಂದಿರ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಇಂದು ತಾವು ಮಂಡಿಸಿದ 2023-24ನೆ ಸಾಲಿನಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಐತಿಹಾಸಿಕ ಕುರುಹುಗಳಿರುವ ತಾಣಗಳ ಪ್ರವಾಸಿ ಸರ್ಕಿಟ್ಅನ್ನು ಈ ವರ್ಷದಲ್ಲಿ ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು. ಸಂತ ಸೇವಾಲಾಲ್ ಅವರ ಜನ್ಮಸ್ಥಳವಾದ ದಾವಣಗೆರೆ ಜಿಲ್ಲೆಯ ಸುರುಗೊಂಡನಕೊಪ್ಪವನ್ನು ಅಭಿವೃದ್ಧಿಪಡಿಸಿ 5 ಕೋಟಿ ವೆಚ್ಚದಲ್ಲಿ ಪ್ರವಾಸಿ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ವದಿಗೆರೆಯಲ್ಲಿರುವ ಶಹಜಿ ಮಹಾರಾಜ್ ಸಮಾ ಸ್ಥಳವನ್ನು 5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.ಚಿಕ್ಕಬಳ್ಳಾಪುರ ಜಿಲ್ಲೆ ನಂದಿಗಿರಿಧಾಮದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಸರ್ಕಾರಿ, ಖಾಸಗಿ ಮತ್ತು ರೆಸಾರ್ಟ್ ಲಿಮಿಟೆಡ್ ಮೂಲಕ ಒಂದು ರೆಸಾರ್ಟ್ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಅದೇ ರೀತಿ ಆಂಜನೇಯ ಜನ್ಮಸ್ಥಳವೆಂದು ಪ್ರಸಿದ್ಧವಾದ ಕೊಪ್ಪಳ ಜಿಲ್ಲೆ, ಅಂಜನಾದ್ರಿ ಬೆಟ್ಟದಲ್ಲಿ ಪ್ರವಾಸಿಗರಿಗೆ ಮೂಲ ಸೌಕರ್ಯ ಒದಗಿಸಲು 100 ಕೋಟಿ ರೂ. ಅಂದಾಜು ವೆಚ್ಚದ ವಿವಿಧ ಕಾಮಗಾರಿಗಳನ್ನೊಳಗೊಂಡ ವಿಸ್ತೃತ ಯೋಜನೆ ತಯಾರಿಸಿ ಟೆಂಡರ್ ಕರೆಯಲಾಗಿದೆ ಎಂದು ತಿಳಿಸಿದರು.
ಕರಾವಳಿ ವಲಯ ನಿರ್ವಹಣಾ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಸಾಹಸ ಮತ್ತು ಪರಿಸರ ಸ್ನೇಹಿ ಪ್ರವಾಸೋದ್ಯಮ ಉತ್ತೇಜಿಸಲು ರೂಪುರೇಷೆ ತಯಾರಿಸಲಾಗುವುದು ಎಂದು ಹೇಳಿದರು.
ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಪ್ರಸಾದ್ ಯೋಜನೆಯಡಿ ಮೈಸೂರು ನಗರದ ಚಾಮುಂಡಿಬೆಟ್ಟದ ಸಮಗ್ರ ಅಭಿವೃದ್ಧಿ ಹಾಗೂ ಸ್ವದೇಶ್ ದರ್ಶನ್-20 ಅಡಿಯಲ್ಲಿ ಹಂಪಿಯ ಸ್ಮಾರಕ ಅಭಿವೃದ್ಧಿ ಮತ್ತು ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ ಪ್ರಾಕಾರದ ಆವರಣದಲ್ಲಿ ಶಾಶ್ವತ ಅಭಿವೃದ್ಧಿ ಯೋಜನೆಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.
#BasavarajBommai #Budget2023, #StateBudget2023, #BommaiBudget, #ಬಜೆಟ್ #ಬಜೆಟ್2023,