ಮೆಟ್ರೋದಿಂದ ಹಾಳಾಗುತ್ತಿರುವ ರಸ್ತೆ, ದುರಸ್ತಿಗೆ ಸಿಎಸ್‍ಗೆ ರಾಮಲಿಂಗಾರೆಡ್ಡಿ ಪತ್ರ

ಬೆಂಗಳೂರು, ನ.15- ಮೆಟ್ರೋ ಕಾಮಗಾರಿಯಿಂದ ರಸ್ತೆಗಳು ಗುಂಡಿ ಬಿದ್ದು ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ. ಬೇಜವಾಬ್ದಾರಿಯಿಂದ ವರ್ತಿಸುತ್ತಿರುವ ಮೆಟ್ರೋ ಅಧಿಕಾರಿಗಳಿಗೆ ರಸ್ತೆ ಗುಂಡಿ ಮುಚ್ಚಲು ಅಗತ್ಯ ಸೂಚನೆ ನೀಡುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದಾರೆ.

ಬಿಟಿಎಂ ಮತ್ತು ಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿಲ್ಕ್‍ಬೋರ್ಡ್ ಜಂಕ್ಷನ್‍ನಿಂದ ಜಯದೇವ ಆಸ್ಪತ್ರೆ ಜಂಕ್ಷನ್‍ವರೆಗೆ, ಜಿಡಿ ಮರದಿಂದ ಡೈರಿ ವೃತ್ತದವರೆಗೆ, ಜಯದೇವ ಆಸ್ಪತ್ರೆಯಿಂದ ಆರ್‍ವಿ ರಸ್ತೆವರೆಗೆ ನಮ್ಮ ಮೆಟ್ರೋ ನಿರ್ಮಾಣ ಕಾಮಗಾರಿ ನಡೆಯುತ್ತಿದೆ.  ಈ ಕಾಮಗಾರಿಯಿಂದ ಸುತ್ತಮುತ್ತಲ ರಸ್ತೆಗಳೆಲ್ಲ ಗುಂಡಿ ಬಿದ್ದಿವೆ. ಹಾಳಾಗಿರುವ ರಸ್ತೆಯನ್ನು ದುರಸ್ತಿಪಡಿಸುವಂತೆ ಮೆಟ್ರೋ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ.

ಮೆಟ್ರೋ ಅಧಿಕಾರಿಗಳ ಈ ಬೇಜವಾಬ್ದಾರಿತನದಿಂದ ಜಯನಗರ ಮತ್ತು ಬಿಟಿಎಂ ಬಡಾವಣೆಗಳಲ್ಲಿ ಪ್ರತಿನಿತ್ಯ ಟ್ರಾಫಿಕ್ ಜಾಮ್ ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಓಡಾಟಕ್ಕೆ ತೀವ್ರ ತೊಂದರೆಯಾಗಿದೆ.  ಸ್ಥಳೀಯ ಸಮಸ್ಯೆ ಕುರಿತಂತೆ ಮೆಟ್ರೋ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಹೀಗಾಗಿ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಂಡು ಗುಂಡಿ ಬಿದ್ದಿರುವ ರಸ್ತೆಗಳನ್ನು ದುರಸ್ತಿಪಡಿಸುವಂತೆ ಮೆಟ್ರೋ ನಿಗಮಕ್ಕೆ ಸೂಚನೆ ನೀಡುವಂತೆ ರಾಮಲಿಂಗಾರೆಡ್ಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ಪತ್ರ ಬರೆದಿದ್ದಾರೆ.