ರಾಮನಗರದ ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆಗೆ ಹೆಚ್‍ಡಿಕೆ ಸವಾಲ್

Social Share

ಬೆಂಗಳೂರು, ಅ.2- ಬಿಜೆಪಿ ಸರ್ಕಾರ ಬಂದ ಮೇಲೆ ರಾಮನಗರ ಜಿಲ್ಲೆಯಲ್ಲಿ ಎಷ್ಟು ಅಭಿವೃದ್ಧಿಯಾಗಿದೆ ಎಂಬುದರ ಬಹಿರಂಗ ಚರ್ಚೆಗೆ ಬರುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರಿಗೆ ಸವಾಲು ಹಾಕಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಜಿಲ್ಲೆಯಲ್ಲಿ ಎಷ್ಟು ಅಭಿವೃದ್ಧಿಯಾಗಿದೆ ಎಂಬುದರ ಬಹಿರಂಗ ಚರ್ಚೆ ಮಾಡೋಣ ಬನ್ನಿ. ಆಗ ಯಾರ ಆತ್ಮಸಾಕ್ಷಿ ಏನು ಎಂಬುದು ಜನರಿಗೂ ತಿಳಿಯುತ್ತದೆ. ಎಂಎಲ್‍ಸಿ ಕೋರಿಕೆ ಮೇರೆಗೆ ಎಂದು ಬಿಡುಗಡೆ ಮಾಡಿದ 50 ಕೋಟಿ ರೂ. ಒಳಗುಟ್ಟಿನ ಬಗ್ಗೆಯೂ ಚರ್ಚಿಸೋಣ ಬನ್ನಿ. ನಾನು ತಯಾರಿದ್ದೇನೆ ಎಂದು ಹೇಳಿದ್ದಾರೆ.

ಅಭಿವೃದ್ಧಿ ಕೆಲಸ ಎಂದರೇನು ಅಶ್ವತ್ಥ ನಾರಾಯಣ? ವಾಮಮಾರ್ಗ ಎಂದರೆ ಯಾವುದು? ಇವೆರಡರಲ್ಲೂ ತಮಗೆ ಒಳ್ಳೇ ಅನುಭವವೇ ಇದೆ. ಅಧಿಕಾರಿಗಳನ್ನು ಬುಟ್ಟಿಗೆ ಹಾಕಿಕೊಂಡು ಕಳ್ಳಮಾರ್ಗದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲು ಹೊರಟಿದ್ದು, ಕ್ಷೇತ್ರದ ಶಾಸಕರನ್ನೇ ಕತ್ತಲೆಯಲ್ಲಿ ಇಟ್ಟಿದ್ದನ್ನು ಏನೆಂದು ಕರೆಯಬೇಕು? ಇದೇನಾ ನೀವು ಹೇಳುವ ರಾಜಮಾರ್ಗ ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಅಧಿಕಾರವೂ ತಪ್ಪಬಾರದು, ಅಭಿವೃದ್ಧಿಯೂ ಆಗಬಾರದು ಎಂದು ನಾನು ಭಾವಿಸಿದ್ದಿದ್ದರೆ ನೀವು ಮಲ್ಲೇಶ್ವರದಲ್ಲಿ ಶಾಸಕರೇ ಆಗುತ್ತಿರಲಿಲ್ಲ.

ಆ ದಿನಗಳನ್ನು ಒಮ್ಮೆ ನೆನಪು ಮಾಡಿಕೊಳ್ಳಿ. ಇನ್ನು ಅಭಿವೃದ್ಧಿ ಬಗ್ಗೆ ಉಪದೇಶ ಮಾಡಿದ್ದೀರಿ. ನಿಮ್ಮ ಮಾದರಿಯಲ್ಲಿ ಅಭಿವೃದ್ಧಿ ಮಾಡಿಕೊಳ್ಳುವುದು ನನಗೆ ಗೊತ್ತಿಲ್ಲ ನನ್ನಿಂದ ಆಗುವುದೂ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

ಅಧಿಕಾರ ಬರುತ್ತದೆ, ಹೋಗುತ್ತದೆ ಎಂದು ವೇದಾಂತ ಹೇಳಿದ್ದೀರಿ. ಹೌದು, ಇಂಥ ಉದಾತ್ತ, ಆದರ್ಶ ಚಿಂತನೆಯ, ವಿಶಾಲ ಹೃದಯ ವೈಶಾಲ್ಯವುಳ್ಳ ನಿಮ್ಮಂಥ ಪ್ರಾಜ್ಞರೇ ಆಪರೇಶನ್ ಕಮಲ ಎಂಬ ಪಾಪ ಎಸಗಿದ್ದೇಕೆ ? ನಮ್ಮ ಶಾಸಕರ ಮನೆಯಲ್ಲಿ ಹಣ ಇಟ್ಟು ಬಂದ್ದಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.

ಅಧಿಕಾರ ಬೇಕಿದ್ದರೆ ನೀವು ಚುನಾವಣೆಯಲ್ಲಿ ಪೂರ್ಣ ಬಹುಮತ ಸಿಗುವವರೆಗೂ ಕಾಯಬಹುದಿತ್ತಲ್ಲವೇ? ಆದರೆ, ಹಪಾಹಪಿಯಿಂದ ಅಡ್ಡಮಾರ್ಗ ಹಿಡಿದಿದ್ದು ಏಕೆ ? ಅಕ್ಕ ಪಕ್ಕದ ಪಕ್ಷಗಳ ಶಾಸಕರನ್ನು ಅಪಹರಿಸಿ ಆಪರೇಷನ್ ಕಮಲದ ಸರ್ಕಾರ ಮಾಡಿದ್ದು ಯಾಕೆ? ಇದು ವಾಮಮಾರ್ಗವೋ? ಸನ್ಮಾರ್ಗವೋ ? ಸ್ಪಲ್ಪ ಹೇಳಿ ಎಂದು ವಾಗ್ದಾಳಿ ನಡೆಸಿದ್ದಾರೆ.

Articles You Might Like

Share This Article