ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸಾಹುಕಾರ್ ರಮೇಶ್‌ಗೆ ಬಿಜೆಪಿ ಟಿಕೆಟ್..!?

ಬೆಂಗಳೂರು,ಫೆ.28- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೆಲವು ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿರುವ ಬಿಜೆಪಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಬೆಳಗಾವಿ ಸಾಹುಕಾರ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮಣೆ ಹಾಕುವುದು ಖಚಿತವಾಗಿದೆ.

ಚಿಕ್ಕೋಡಿಯಿಂದ ಸ್ಪರ್ಧಿಸುವ ಕುರಿತು ರಮೇಶ್ ಜಾರಕಿಹೊಳಿ ನಿನ್ನೆ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರ ಪತಿ ಅಣ್ಣಾ ಸಾಹೇಬ್ ಜೊಲ್ಲೆ ಸೇರಿದಂತೆ ಜಿಲ್ಲೆಯ ಬಿಜೆಪಿ ಮುಖಂಡರ ಜೊತೆ ರಹಸ್ಯವಾಗಿ ಮಾತುಕತೆ ನಡೆಸಿರುವುದು ವದಂತಿಗಳಿಗೆ ಪುಷ್ಠಿ ನೀಡಿದಂತಾಗಿದೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿರುವ ಶಶಿಕಲಾ ಜೊಲ್ಲೆಗೆ ಸೇರಿದ ಭಿವಾಸಿ ಫಾರಂಹೌಸ್‍ನಲ್ಲಿ ರಹಸ್ಯವಾಗಿ ಮಾತುಕತೆ ನಡೆಸಿದ್ದು, ಚಿಕ್ಕೋಡಿಯಿಂದಲೇ ಲೋಕಸಭೆಗೆ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಕ್ಷೇತ್ರಾದ್ಯಂತ ಕಾರ್ಯಕರ್ತರು ಹಾಗೂ ತಮ್ಮ ಹಿತೈಷಿಗಳ ಅಭಿಪ್ರಾಯವನ್ನು ಸಂಗ್ರಹಿಸಿರುವ ರಮೇಶ್ ಜಾರಕಿಹೊಳಿ ಶ್ರೀಘ್ರದಲ್ಲೇ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಲೋಕಸಮರಕ್ಕೆ ಅಖಾಡಕ್ಕಿಳಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ ರಮೇಶ್ ಜಾರಕಿಹೊಳಿ ಜಿಲ್ಲಾ ಮುಖಂಡರಾದ ಉಮೇಶ್ ಕತ್ತಿ, ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ, ಸಂಸದ ಸುರೇಶ್ ಅಂಗಡಿ ಸೇರಿದಂತೆ ಅನೇಕರ ಜೊತೆ ಮಾತುಕತೆ ನಡೆಸಿದ್ದು , ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದರೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

# ರಾಜೀನಾಮೆಗೆ ಸಿದ್ಧ:
ಇನ್ನು ರಮೇಶ್‍ಜಾರಕಿಹೊಳಿ ನಿನ್ನೆ ನಡೆದ ರಹಸ್ಯ ಸಭೆಯಲ್ಲಿ ಸದ್ಯದಲ್ಲೇ ಕಾಂಗ್ರೆಸ್‍ಗೆ ಸೋಡಾಚೀಟಿ ನೀಡುವುದಾಗಿ ಹೇಳಿಕೊಂಡಿದ್ದಾರೆ. ಸದ್ಯದಲ್ಲೇ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗಿ ರಾಜೀನಾಮೆ ನೀಡಿ ಅಧಿಕೃತವಾಗಿ ಬಿಜೆಪಿ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಉಮೇಶ್ ಕತ್ತಿ ಸಹೋದರ ರಮೇಶ್ ಕತ್ತಿ, ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಬಿಜೆಪಿಯ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಇವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಣಕ್ಕಿಳಿಯುವ ಲೆಕ್ಕಾಚಾರದಲ್ಲಿ ರಮೇಶ್ ಜಾರಕಿಹೊಳಿ ಇದ್ದಾರೆ.

ರಮೇಶ್ ಜಾರಕಿಹೊಳಿ ಕಾಂಗ್ರೆಸ್‍ನ ಖಾಯಂ ಭಿನ್ನಮತೀಯ ಶಾಸಕನೆಂದೇ ಗುರುತಿಸಿಕೊಂಡಿದ್ದಾರೆ. ಸಚಿವ ಸಂಪುಟದಿಂದ ಕೈ ಬಿಟ್ಟ ಬಳಿಕ ಅವರು ಆಪರೇಷನ್ ಕಮಲಕ್ಕೆ ಒಳಗಾಗಿದ್ದಾರೆ ಎಂಬ ವದಂತಿ ಹಬ್ಬಿತ್ತು.

ಈ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಜೊತೆಗೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ, ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ, ಗುಲ್ಬರ್ಗ ಜಿಲ್ಲೆ ಚಿಂಚೋಳಿಯ ಡಾ.ಉಮೇಶ್ ಜಾಧವ್, ಮುಂಬೈನಲ್ಲಿ ವಾಸ್ತವ್ಯ ಹೂಡಿದ್ದರು.

ಸಮ್ಮಿಶ್ರ ಸರ್ಕಾರದ ವಿರುದ್ಧ ಅನೇಕ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿ ಬಜೆಟ್ ಮುನ್ನವೇ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ವದಂತಿ ಹರಡಿತ್ತು. ಆದರೆ ರಾಯಚೂರು ಜಿಲ್ಲೆಯ ದೇವದುರ್ಗದ ಐಬಿಯಲ್ಲಿ ನಡೆದ ಆಡಿಯೋ ಪ್ರಕರಣ ಇಡೀ ಆಪರೇಷನ್ ಕಮಲವನ್ನೇ ಆಪೋಶನ ಪಡೆದಿತ್ತು.

Sri Raghav

Admin